Bangalore: ಯತ್ನಾಳ್‌ರನ್ನು ನಿಮ್ಹಾನ್ಸ್ ಆಸ್ಪತ್ರೆಗೆ ಸೇರಿಸಬೇಕು
Friday, December 29, 2023
ಬೆಂಗಳೂರು: ಕೋವಿಡ್ ನಿರ್ವಹಣೆ ಸಂದರ್ಭದಲ್ಲಿ ೪೦ಸಾವಿರ ಕೋಟಿ ರೂ.ಅವ್ಯವಹಾರ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕ, ವಿಜಯಪುರ ನಗರ ಕ್ಷೇತ್ರದ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿಕೆ ಈ ವರ್ಷದ ಅತ್ಯಂತ ದೊಡ್ಡ ಹಾಸ್ಯ ಪ್ರಸಂಗ. ಯತ್ನಾಳ್ ಅವರನ್ನು ಕೂಡಲೇ ಮಾನಸಿಕ ಆಸ್ಪತ್ರೆಗೆ ಸೇರಿಸಬೇಕು ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಲೇವಡಿ ಮಾಡಿದ್ದಾರೆ.
ಗುರುವಾರ ಬಿಜೆಪಿ ಕಚೇರಿಯಲ್ಲಿ ಜಗನ್ನಾಥ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಯಡಿಯೂರಪ್ಪ ನಮ್ಮ ಪ್ರಶ್ನಾತೀತ ನಾಯಕ. ಅವರ ವಿರುದ್ಧ ಯತ್ನಾಳ್ ಮಾತನಾಡಿದ್ದಾರೆ. ಯತ್ನಾಳ್ ಪ್ರಭಾವಿ ಸಚಿವರ ಜೊತೆ ಮ್ಯಾಚ್ ಫಿಕ್ಸ್ ಮಾಡಿಕೊಂಡಿದ್ದಾರೆ. ಇದು ಯಾರಿಗೂ ಗೊತ್ತಿಲ್ಲವೇ?’ ಎಂದು ಪ್ರಶ್ನಿಸಿದರು.
ಕೋವಿಡ್ ಸಂದರ್ಭದಲ್ಲಿ ಸಿದ್ದರಾಮಯ್ಯ ಪ್ರತಿಪಕ್ಷ ನಾಯಕರಾಗಿದ್ದರು. ಅಧಿವೇಶನದಲ್ಲಿ ಸುದೀರ್ಘ ಚರ್ಚೆಯಾಗಿತ್ತು. ೨ಸಾವಿರ ಕೋಟಿ ರೂ.ಮಾತ್ರ ಬಿಡುಗಡೆಯಾಗಿತ್ತು. ಆದರೆ ೪೦ ಸಾವಿರ ಕೋಟಿ ರೂ. ಎಂದು ಯತ್ನಾಳ್ ಆರೋಪ ಮಾಡುತ್ತಿದ್ದಾರೆ. ಅದರ ಬಗ್ಗೆ ದಾಖಲೆ ಇದ್ದರೆ ಕೊಡಲಿ ಎಂದರು.