Chikkamagaluru: ಸಂವಿಧಾನದಲ್ಲಿರುವ ಅಂಶಗಳನ್ನು ಪ್ರತಿಯೊಬ್ಬರು ತಿಳಿದುಕೊಳ್ಳಬೇಕು: ಮೀನಾ ನಾಗರಾಜ್
ಚಿಕ್ಕಮಗಳೂರು: ಸಂವಿಧಾನದಲ್ಲಿರುವ ಅಂಶಗಳನ್ನು ಪ್ರತಿಯೊಬ್ಬ ಪ್ರಜೆಯು ತಿಳಿದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದರು.
ಜಿಲ್ಲಾ ಪಂಚಾಯಿತಿ ಮಿನಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ ಸಂವಿಧಾನ ಜಾಗೃತಿ ಜಾಥಾ ಅಭಿಯಾನ ಕಾರ್ಯಕ್ರಮದ ಅಂಗವಾಗಿ ಪತ್ರಕರ್ತರಿಗಾಗಿ ಆಯೋಜಿಸಿದ್ದ ಅಭಿವ್ಯಕ್ತಿ ಸ್ವಾತಂತ್ರ್ಯದ ಕುರಿತ ವಿಚಾರ ಸಂಕೀರ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ದೇಶದ ಪ್ರತಿಯೊಬ್ಬ ಪ್ರಜೆಯು ಸಂವಿಧಾನದ 19(1)(ಎ) ವಿಧಿಯ ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ತಿಳಿದುಕೊಳ್ಳುವುದು ಬಹುಮುಖ್ಯವಾಗಿದೆ. ಪ್ರತಿಯೊಬ್ಬರು ಸಂವಿಧಾನದಲ್ಲಿರುವ ಅಂಶಗಳನ್ನು ತಿಳಿದುಕೊಳ್ಳಬೇಕು ಎಂದ ಅವರು. ಪತ್ರಕರ್ತರು ಜಿಲ್ಲೆಯ ಅಭಿವೃದ್ಧಿ ಕಾರ್ಯಗಳ ಮಾಹಿತಿಗಳನ್ನು ಕಲೆ ಹಾಕಿ ಇಲಾಖೆ ಗಮನಕ್ಕೆ ತರುವ ಕಾರ್ಯವನ್ನು ಪತ್ರಕರ್ತರು ಮಾಡುವುದರಿಂದ ಅಭಿವೃದ್ಧಿ ಕಾರ್ಯಗಳು ಕೈಗೊಳ್ಳಲು ಸಹಕಾರಿ ಆಗುತ್ತದೆ. ಸಂವಿಧಾನವನ್ನು ಕೇವಲ ಪತ್ರಕರ್ತರು, ವಿದ್ಯಾರ್ಥಿಗಳು ಆಡಳಿತ ವರ್ಗದವರು ಮಾತ್ರವಲ್ಲದೇ ದೇಶದ ಪ್ರತಿಯೊಬ್ಬ ಪ್ರಜೆಯು ತಿಳಿದುಕೊಳ್ಳಬೇಕೆಂಬ ಉದ್ದೇಶದಿಂದ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಜಿಲ್ಲೆಯಲ್ಲಿ ಜನವರಿ ೨೬ ರಂದು ಇಂಧನ ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಜಾಗೃತಿ ಜಾಥಾಕ್ಕೆ ಚಾಲನೆ ನೀಡಿದ್ದಾರೆ. ಜಾಥಾವು ಈಗಾಗಲೇ ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂಚರಿಸಿ ಅರಿವು ಮೂಡಿಸುವ ಕಾರ್ಯವನ್ನು ಯಶಸ್ವಿಯಾಗಿ ಮಾಡುತ್ತಿದೆ ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಡಾ. ಗೋಪಾಲಕೃಷ್ಣ ಪ್ರಾಸ್ತಾವಿಕವಾಗಿ ಮಾತನಾಡಿ, ಭಾರತಕ್ಕೆ ಸ್ವಾತಂತ್ರ್ಯ ಬರುವಲ್ಲಿ ಪತ್ರಿಕೆಗಳ ಮಹತ್ವ ಅಪಾರವಾದದ್ದು, ಅಭಿವ್ಯಕ್ತಿ ಸ್ವಾತಂತ್ರ್ಯ ಭಾರತದ ಪ್ರತಿಯೊಬ್ಬ ಪ್ರಜೆಗಳಿಗಿದ್ದರೂ ಅದರ ಸದುಪಯೋಗ ಉತ್ತಮ ರೀತಿಯಲ್ಲಿ ಬಳಸಿಕೊಳ್ಳುತ್ತಿರುವುದು. ಪತ್ರಿಕಾ ಮಾಧ್ಯಮ ಮಾತ್ರ, ಪತ್ರಿಕೆಗಳು ಸಮಾಜದ ಸಮಸ್ಯೆಗಳನ್ನು ಸರಿ ದಾರಿಗೆ ತರುವಲ್ಲಿ ಪತ್ರಿಕೆಗಳ ಪಾತ್ರ ಅತ್ಯಂತ ಮಹತ್ವವಾದದ್ದು, ಈ ನಿಟ್ಟಿನಲ್ಲಿ ಎಲ್ಲಾ ಮಾಧ್ಯಮಗಳು ತಮ್ಮ ಅಭಿಪ್ರಾಯಗಳನ್ನು ಮುಕ್ತ ಮನಸ್ಸಿನಿಂದ ಬಿಂಬಿಸಿ ಕಾರ್ಯನಿರ್ವಹಿಸಬೇಕೆಂದು ತಿಳಿಸಿದರು.
ಹಿರಿಯ ಪತ್ರಕರ್ತರ ತಿಪ್ಪೇರುಪ್ಪ ಮಾತನಾಡಿ, ಸಂವಿಧಾನ ಕರಡು ಸಮಿತಿ ಅಧ್ಯಕ್ಷತೆ ವಹಿಸಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರು ವಿವಿಧ ರಾಷ್ಟ್ರಗಳ ಸಂವಿಧಾನವನ್ನು ಅಧ್ಯಯನ ಮಾಡಿ ಭಾರತಕ್ಕೆ ವಿಶಾಲ ಸಂವಿಧಾನವನ್ನು ರಚನೆ ಮಾಡಿದ್ದಾರೆ. ಈ ಸಂವಿಧಾನದ ಆರು ಮೂಲಭೂತ ಹಕ್ಕುಗಳ ಪಟ್ಟಿಯಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯವು ಒಂದು ಭಾರತದ ಪ್ರತಿಯೊಬ್ಬ ಪ್ರಜೆಗೂ ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕನ್ನು ಸಂವಿಧಾನ ಪ್ರತಿಪಾದಿಸಿದೆ ಈ ಸ್ವಾತಂತ್ರ್ಯವನ್ನು ಪತ್ರಿಕೆಗಳು ಉತ್ತಮ ರೀತಿಯಲ್ಲಿ ಬಳಸಿಕೊಂಡು ಸಮಾಜದಲ್ಲಿ ನಡೆಯುವ ಶೋಷಣೆಗಳು, ಅನ್ಯಾಯಗಳನ್ನು ತಮ್ಮ ಪತ್ರಿಕೆಗಳಲ್ಲಿ ಪ್ರಕಟಿಸಿ ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕನ್ನು ಉತ್ತಮ ರೀತಿಯಲ್ಲಿ ಬಳಸಿಕೊಳ್ಳಬೇಕು ಪ್ರತಿಯೊಬ್ಬ ಪತ್ರಕರ್ತರು ಸಂವಿಧಾನ ತಿಳಿಯುವುದು ಬಹುಮುಖ್ಯವಾಗಿದೆ. ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿರುವ ಮಾಧ್ಯಮಗಳು ಸರ್ಕಾರ ಮತ್ತು ಸಾರ್ವಜನಿಕರೊಂದಿಗೆ ಸೇತುವೆಯಾಗಿ ಕಾರ್ಯನಿರ್ವಹಿಸಬೇಕು ಎಂದರು.
ಕಾರ್ಯಾಗಾರದಲ್ಲಿ ಭಾಗವಹಿಸಿದ ಪರ್ತಕರ್ತರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.
ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಯೋಗೀಶ್ ಉಪಸ್ಥಿತರಿದ್ದರು.
