Chikkamagaluru: ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಿ: ಜಿಲ್ಲಾಧಿಕಾರಿ
ಚಿಕ್ಕಮಗಳೂರು: ಎಸ್.ಎಸ್.ಎಲ್.ಸಿ. ಪರೀಕ್ಷೆಯು ಮಾರ್ಚ್ 25 ರಿಂದ ಏಪ್ರಿಲ್ 06 ರವರೆಗೆ ನಡೆಯಲಿದ್ದು, ಪರೀಕ್ಷೆ ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಇಂದು ನಡೆದ ಪರೀಕ್ಷಾ ಕಾರ್ಯದಲ್ಲಿ ಭಾಗವಹಿಸುವ ಅಧಿಕಾರಿ ಸಿಬ್ಬಂದಿಗಳ ಕುರಿತು ಅವರು ಮಾತನಾಡಿದರು.
ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು, ಶೌಚಾಲಯ, ವಿದ್ಯುತ್ ವ್ಯವಸ್ಥೆ ಕಲ್ಪಿಸಬೇಕಲ್ಲದೆ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲೂ ಸಿಸಿ ಕ್ಯಾಮರವನ್ನು ಕಡ್ಡಾಯವಾಗಿ ಆಳವಡಿಸುವಂತೆ ತಿಳಿಸಿದ ಅವರು ಪರೀಕ್ಷೆ ನಡೆಯುವ ದಿನಗಳಂದು ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಸರಿಯಾದ ಸಮಯಕ್ಕೆ ಹಾಜರಾಗಲು ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಬೇಕಲ್ಲದೆ, ವಿದ್ಯಾರ್ಥಿಗಳಿಗೆ ಅನಾನುಕೂಲವಾಗದಂತೆ ನೋಡಿಕೊಳ್ಳಬೇಕು, ಪರೀಕ್ಷೆ ನಡೆಯುವ ಸಂದರ್ಭದಲ್ಲಿ ಕೊಠಡಿಯ ಮೇಲ್ವಿಚಾರಕರು ಕಡ್ಡಾಯವಾಗಿ ಮೊಬೈಲ್ ಬಳಸಲು ಅವಕಾಶವಿರುವುದಿಲ್ಲ. ಪರೀಕ್ಷೆಯನ್ನು ಜಿಲ್ಲೆಯಲ್ಲಿ ಯಾವುದೇ ಸಮಸ್ಯೆಗಳಿಗೆ ಆಸ್ಪದ ನೀಡದೆ ಸುಸೂತ್ರವಾಗಿ ನಡೆಸುವಂತೆ ಹೇಳಿದರು.
ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗುವುದು. ಅಲ್ಲದೇ ಸುತ್ತ ಮುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಪರೀಕ್ಷಾ ದಿನಗಳಂದು ಮುಚ್ಚುವಂತೆ ಹಾಗೂ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು, ಪರೀಕ್ಷಾ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗಳನ್ನು ಹೊರತುಪಡಿಸಿ ಬೇರೆಯವರು ಪರೀಕ್ಷಾ ಕೇಂದ್ರಗಳ ಸುತ್ತ ಓಡಾಡಲು ಅವಕಾಶವಿರುವುದಿಲ್ಲ ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಗೋಪಾಲಕೃಷ್ಣ ಬಿ. ಮಾತನಾಡಿ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಸುಸೂತ್ರವಾಗಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಅಕ್ರಮ ನಡೆಯುವುದು ಕಂಡು ಬಂದರೆ ಅಂತಹವರ ವಿರುದ್ದ ಕ್ರಮ ಜರುಗಿಸಲಾಗುವುದು ಎಂದ ಅವರು ಪ್ರತಿ ವರ್ಷದಂತೆ ಈ ಬಾರಿಯು ಜಿಲ್ಲೆಯಲ್ಲಿ ಉತ್ತಮ ರೀತಿಯಲ್ಲಿ ಪರೀಕ್ಷೆ ನಡೆಯಬೇಕು. ಮೊದಲ ಹಂತದಲ್ಲಿಯೇ ಪರೀಕ್ಷಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದರು.
ಸಾರ್ವಜನಿಕ ಶಿಕ್ಷಣ ಇಲಾಖೆ (ಆಡಳಿತ) ಉಪನಿರ್ದೇಶಕ ಮಂಜುನಾಥ ಮಾಹಿತಿ ನೀಡಿ ಜಿಲ್ಲೆಯಲ್ಲಿ ಒಟ್ಟು 50 ಪರೀಕ್ಷಾ ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆ ಸುಗಮವಾಗಿ ನಡೆಯಲು ಇಲಾಖೆಯಿಂದ ಎಲ್ಲಾ ರೀತಿಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಈ ಬಾರಿ 12942 ಹೊಸ ವಿದ್ಯಾರ್ಥಿಗಳು, ೪೬೮ ಪುನರಾವರ್ತಿತ ವಿದ್ಯಾರ್ಥಿಗಳು, 459 ಖಾಸಗಿ ವಿದ್ಯಾರ್ಥಿಗಳು, 134 ಖಾಸಗಿ ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ ಒಂದು ಎರಡು ವಿಷಯಗಳಲ್ಲಿ ಅನುತ್ತೀರ್ಣರಾದ 6 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 14014 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಅಮಟೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅಶ್ವಥ್ ಬಾಬು ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.
