Kundapura: ಬ್ರಹ್ಮಾವರದಲ್ಲಿ ಗುಂಡಿನ ದಾಳಿ: ಯುವಕನ ಕೊಲೆ
ಕುಂದಾಪುರ: ಮನೆಯೊಳಗೆ ನುಗ್ಗಿ ಯುವಕನನ್ನು ಗುಂಡಿಕ್ಕಿ ಕೊಲೆ ಮಾಡಿರುವ ದುರ್ಘಟನೆ ಬ್ರಹ್ಮಾವರ ತಾಲೂಕಿನ ಹನೆಹಳ್ಳಿಯಲ್ಲಿ ನಡೆದಿದೆ.
ಕೃಷ್ಣ (36) ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ.
ಕೃಷ್ಣ ಹನೆಹಳ್ಳಿಯಲ್ಲಿನ ತನ್ನ ಮನೆಯಲ್ಲಿ ಏಕಾಂಗಿಯಾಗಿ ವಾಸವಾಗಿದ್ದರು. ಆತ ಮಣಿಪಾಲದಲ್ಲಿ ಕೆಲಸ ಮಾಡುತ್ತಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.
ಕೃಷ್ಣ ಎಂದಿನಂತೆ ಶನಿವಾರ ರಾತ್ರಿ ಮನೆಗೆ ಬಂದು ಊಟ ಮಾಡುವಾಗ ಏಕಾಏಕಿ ನುಗ್ಗಿದ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಶನಿವಾರ ರಾತ್ರಿ 9.30ರ ಸುಮಾರಿಗೆ ಫೈರಿಂಗ್ ಶಬ್ದ ಕೇಳಿ ಬಂದಿದೆ. ನಾವು ಮೊದಲು ಪಟಾಕಿಯ ಶಬ್ದವೆಂದು ಸುಮ್ಮನಾದೆವು ಎಂದು ನೆರೆಹೊರೆಯವರು ತಿಳಿಸಿದ್ದಾರೆ.
ಭಾನುವಾರ ಬೆಳಿಗ್ಗೆ ಕೃಷ್ಣ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ. ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಾಗಿದೆ. ಘಟನಾ ಸ್ಥಳಕ್ಕೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ಹಾಗೂ ಬ್ರಹ್ಮಾವರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಪ್ರಕರಣ ದಾಖಲಾಗಿದ್ದು, ಬ್ರಹ್ಮಾವರ ಪೊಲೀಸರು ದುಷ್ಕರ್ಮಿಗಳ ಪತ್ತೆಗೆ ಬಲೆ ಬೀಸಿದ್ದಾರೆ.