Mangalore: ಎಸ್.ಎಸ್.ಎಲ್.ಸಿ: ಮಕ್ಕಳು ಸುಗಮವಾಗಿ ಪರೀಕ್ಷೆ ಬರೆಯಲು ಅಗತ್ಯ ಕ್ರಮವಹಿಸಲು ಜಿಲ್ಲಾಧಿಕಾರಿ ಸೂಚನೆ
ಮಂಗಳೂರು: ಇದೇ ಮಾ.25 ರಿಂದ ಆರಂಭವಾಗಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಜಿಲ್ಲೆಯ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ಸಮಸ್ಯೆಗಳಾಗದಂತೆ ಎಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಸೂಚಿಸಿದರು.
ಅವರು ಮಾ.14 ರಂದು ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಎಸ್‌ಎಸ್‌ಎಲ್‌ಸಿ 2024ರ ಪರೀಕ್ಷಾ ಸಿದ್ಧತೆ ಕುರಿತು ಹಮ್ಮಿಕೊಳ್ಳಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಎಸ್.ಎಸ್.ಎಲ್. ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆಗಳು ಆಗಬಾರದು, ಅವರು ಸುಗಮವಾಗಿ ಪರೀಕ್ಷೆ ಬರೆಯಲು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಎಲ್ಲಾ ರೀತಿಯ ಅನುಕೂಲಗಳನ್ನು ಮಾಡಿಕೊಡಬೇಕು, ಮುಖ್ಯವಾಗಿ ಮಕ್ಕಳ ಓಡಾಟಕ್ಕೆ ಬಸ್ಸಿನ ತೊಂದರೆ ಆಗಬಾರದು, ಇದಕ್ಕಾಗಿ ಪ್ರತಿ ತಾಲೂಕುಗಳ ತಹಶೀಲ್ದಾರರು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಕೆಎಸ್‌ಆರ್‌ಟಿಸಿಯ ಅಧಿಕಾರಿಗಳು ಚರ್ಚಿಸಿ ಪರೀಕ್ಷೆಗೆ ಅನುಕೂಲವಾಗುವಂತೆ ಬಸ್ಸಿನ ಸಮಯ, ಸಾಗುವ ಮಾರ್ಗದ ಬಗ್ಗೆ ಪಟ್ಟಿ ತಯಾರಿಸಿ ವಿದ್ಯಾರ್ಥಿಗಳ ಮಾಹಿತಿಗೆ ನೀಡಬೇಕು ಎಂದು ಹೇಳಿದರು.
ಮಾರ್ಚ್ 25ರಿಂದ ಬೆಳಿಗ್ಗೆ 10.15 ರಿಂದ ಮಧ್ಯಾಹ್ನ 1.30ರ ವರೆಗೆ ಪರೀಕ್ಷೆಗಳು ನಡೆಯಲಿದೆ. ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾಗಲಿರುವ ಅಭ್ಯರ್ಥಿಗಳ ವಿವರ: ಜಿಲ್ಲೆಯಲ್ಲಿ 27,663 ಶಾಲಾ ವಿದ್ಯಾರ್ಥಿಗಳು, 1,053 ಖಾಸಗಿ ಅಭ್ಯರ್ಥಿಗಳು, 1,632 ಪುನರಾವರ್ತಿತ ಅಭ್ಯರ್ಥಿಗಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟಾರೆ 30,348 ವಿದ್ಯಾರ್ಥಿಗಳು ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಎದುರಿಸಲಿದ್ದಾರೆ.
ಪರೀಕ್ಷಾ ಕೇಂದ್ರಗಳು: ಜಿಲ್ಲೆಯ ಬಂಟ್ವಾಳದಲ್ಲಿ 17, ಬೆಳ್ತಂಗಡಿಯಲ್ಲಿ 13, ಮಂಗಳೂರು ಉತ್ತರ ವ್ಯಾಪ್ತಿಯಲ್ಲಿ 18, ಮಂಗಳೂರು ದಕ್ಷಿಣ ಭಾಗದಲ್ಲಿ 16, ಮೂಡಬಿದ್ರೆಯಲ್ಲಿ 5, ಪುತ್ತೂರು 13 ಹಾಗೂ ಸುಳ್ಯ ವಲಯದಲ್ಲಿ ೬ ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 88 ಪರೀಕ್ಷಾ ಕೇಂದ್ರಗಳಿವೆ.
ಪರೀಕ್ಷಾ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳ ವಿವರ: ಮುಖ್ಯ ಅಧೀಕ್ಷಕರು ೮೮, ಉಪಮುಖ್ಯ ಅಧೀಕ್ಷಕರು ೪೨, ಕಸ್ಟೋಡಿಯನ್ 88, ಸ್ಥಾನಿಕ ಜಾಗೃತ ದಳದ ಕಾರ್ಯಕ್ಕೆ ಅಧಿಕಾರಿಗಳು 88, ಮೊಬೈಲ್ ಫೊ?ನು ಸ್ವಾದಿನಾಧಿಕಾರಿಗಳು 88, ಮಾರ್ಗಾಧಿಕಾರಿ 30, ಕೊಠಡಿ ಮೇಲ್ವಿಚಾರಕರಾಗಿ 1,588 ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.
ತೆಗೆದುಕೊಳ್ಳಲಾಗಿರುವ ಮುನ್ನೆಚ್ಚರಿಕಾ ಕ್ರಮಗಳಿವು:
ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಮಾಡಲಾಗಿದ್ದು, ಅಭ್ಯರ್ಥಿಗಳ ಅನುಕೂಲಕ್ಕಾಗಿ ಸೂಕ್ತ ಸೂಚನಾ ಫಲಕಗಳ ವ್ಯವಸ್ಥೆ ಮಾಡಲಾಗಿದೆ, ಅಭ್ಯರ್ಥಿಗಳಿಗೆ ಅಗತ್ಯ ಅಸನದ ವ್ಯವಸ್ಥೆ ಮಾಡಲಾಗಿದ್ದು, ಕುಡಿಯುವ ನೀರು, ಶೌಚಾಲಯ ಹಾಗೂ ಇತರೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಲು ಮೊಬೈಲ್ ಸ್ವಾಧೀನಾಧಿಕಾರಿಯನ್ನು ನೇಮಕ ಮಾಡಲಾಗಿದೆ. ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಹಾಗೂ ಪ್ರಶ್ನಾಪತ್ರಿಕೆ ಅಭಿರಕ್ಷಕರುಗಳ ಸಭೆಯನ್ನು ಜಿಲ್ಲಾ ಹಂತದಲ್ಲಿ ಉಪನಿರ್ದೇಶಕರು (ಆ), ಶಾಲಾ ಶಿಕ್ಷಣ ಇಲಾಖೆ ಮೂಲಕ ಆಯೋಜಿಸಲಾಗಿದೆ. ಪ್ರಶ್ನೆ ಪತ್ರಿಕೆ ಬಂಡಲ್ ಗಳನ್ನು ತಾಲೂಕು/ಜಿಲ್ಲಾ ಖಜಾನೆಯಿಂದ ಪರೀಕ್ಷಾ ಕೇಂದ್ರಗಳಿಗೆ ಸಾಗಾಟ ಮಾಡುವ ವಾಹನಕ್ಕೆ ಪೊಲೀಸ್ ಎಸ್ಕಾರ್ಟ್‌ಗಳನ್ನು ನಿಯೋಜಿಸಲಾಗುತ್ತಿದೆ.
ಉಪ ಖಜಾನಾಧಿಕಾರಿಗಳಿಗೆ ಪರೀಕ್ಷಾ ದಿನಗಳಂದು ಪ್ರಶ್ನೆ ಪತ್ರಿಕೆಗಳನ್ನು ಹೊರತೆಗೆಯುವ ಬಗ್ಗೆ ನಿರ್ದೇಶನವಿದ್ದು, ಜಿಲ್ಲಾ ಮತ್ತು ತಾಲೂಕು ಖಜಾನಾಧಿಕಾರಿಗಳು ಆಯಾ ಪರೀಕ್ಷಾ ದಿನದಂದು ಪರೀಕ್ಷೆ ಮುಗಿದ ನಂತರ ಉತ್ತರ ಪತ್ರಿಕೆಗಳನ್ನು ಸ್ವೀಕರಿಸಿ ಜಿಲ್ಲಾ ಕೇಂದ್ರದ (ಕಫಿತಾನಿಯೋ ಪ್ರೌಢ ಶಾಲೆ, ಪಂಪ್‌ವೆಲ್) ಭದ್ರತಾ ಕೊಠಡಿಗೆ ಸುರಕ್ಷಿತವಾಗಿ ಸಾಗಿಸಲಾಗುವುದು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸಿ.ಬಿ., ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಸಿದ್ದಾರ್ಥ್ ಗೋಯಲ್, ಅಪರ ಜಿಲ್ಲಾಧಿಕಾರಿ ಡಾ. ಸಂತೋಷ ಕುಮಾರ್, ಸಹಾಯಕ ಆಯುಕ್ತರಾದ ಹರ್ಷವರ್ಧನ್, ಜುಬಿನ್ ಮೊಹಪಾತ್ರ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ವೆಂಕಟೇಶ್ ಎಸ್. ಪಟಗಾರ್, ತಾಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು, ನೋಡಲ್ ಅಧಿಕಾರಿಗಳು ಹಾಗೂ ಸಂಬಂಧಿಸಿದವರು ಉಪಸ್ಥಿತರಿದ್ದರು.