Bantwal: ಮಾಜಿ ಸಚಿವ ಜನಾರ್ದನ ಪೂಜಾರಿಯವರಿಂದ ಮತದಾನ
Tuesday, April 16, 2024
ಬಂಟ್ವಾಳ: ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಅವರು ಮಂಗಳವಾರ ಬಿ.ಮೂಡ ಗ್ರಾಮದ ಬಸ್ತಿಪಡ್ಪುವಿನಲ್ಲಿರುವ ತಮ್ಮ ನಿವಾಸದಲ್ಲಿ ತಮ್ಮ ಹಕ್ಕು ಚಲಾಯಿಸಿದರು.
ಬಂಟ್ವಾಳ ಸೆಕ್ಟರ್ ಅಧಿಕಾರಿಗಳ ನೇತೃತ್ವದಲ್ಲಿ ಮತಗಟ್ಟೆ ಅಧಿಕಾರಿಗಳ ತಂಡ ಪೂಜಾರಿಯವರ ಮನೆಗೆ ತೆರಳಿ ಮತದಾನ ಪ್ರಕ್ರಿಯೆಯನ್ನು ಮಾಡಿದರು.
ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ೮೫ ವರ್ಷಕ್ಕೆ ಮೇಲ್ಪಟ್ಟ ಮತ್ತು ಶೇ.40 ಕ್ಕಿಂತ ಹೆಚ್ಚಿನ ಅಂಗವೈಕಲ್ಯತೆ ಹೊಂದಿದ ಮತದಾರರ ಮನೆಗಳಿಗೆ ಮತಗಟ್ಟೆ ಅಧಿಕಾರಿಗಳ ತಂಡವು ತೆರಳಿ ಮತದಾನ ಮಾಡಿಸುವ ಪ್ರಕ್ರಿಯೆಗೆ ಸೋಮವಾರ ಚಾಲನೆ ನೀಡಲಾಗಿತ್ತು.
ಮತದಾರರ ಪಟ್ಟಿಯಂತೆ ಜನಾರ್ದನ ಪೂಜಾರಿಯವರಿಗೆ 87 ವರ್ಷ ವಯಸ್ಸಾಗಿದ್ದು, ಅವರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಚುನಾವಣಾ ಆಯೋಗದ ನಿರ್ದೇಶನದಂತೆ ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲು 85 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮನೆಯಿಂದಲೆ ಮತದಾನದ ಹಕ್ಕು ಚಲಾಯಿಸಲು ಅವಕಾಶ ಕಲ್ಪಿಸಲಾಗಿತ್ತು.
ಬಂಟ್ವಾಳ ಕ್ಷೇತ್ರದಲ್ಲಿ 85 ವರ್ಷಕ್ಕಿಂತ ಮೇಲ್ಪಟ್ಟವರು ಸೇರಿದಂತೆ ಒಟ್ಟು 975 ಮಂದಿ ಮತದಾರರನ್ನು ಗುರುತಿಸಲಾಗಿದೆ.