Chikkamagaluru: ಡಾ. ಬಿ.ಆರ್. ಅಂಬೇಡ್ಕರ್ ಪುತ್ಥಳಿಗೆ ತೆರವಿಗೆ ಮುಂದಾದ ಜಿಲ್ಲಾಡಳಿತದ ನಡೆ ಖಂಡನೀಯ
ಚಿಕ್ಕಮಗಳೂರು: ನಗರ ಸಮೀಪದ ಗವನಹಳ್ಳಿ ಗ್ರಾಮದಲ್ಲಿ ಬುದ್ಧ ಮತ್ತು ಅಂಬೇಡ್ಕರ್ ಅಧ್ಯಯನ ಕೇಂದ್ರ ನಿರ್ಮಿಸುತ್ತಿ ರುವ ಡಾ|ಬಿ.ಆರ್.ಅಂಬೇಡ್ಕರ್ ಪುತ್ಥಳಿಯನ್ನು ಜಿಲ್ಲಾಡಳಿತ ತೆರವುಗೊಳಿಸಲು ಮುಂದಾಗಿರುವ ಕ್ರಮ ಖಂಡನೀಯ. ಇಲ್ಲಿನ ಶಾಸಕ ಎಚ್.ಡಿ. ತಮ್ಮಯ್ಯ ಈ ಬಗ್ಗೆ ಧ್ವನಿ ಎತ್ತಿಲ್ಲ ಮತ್ತು ಕ್ರಮ ಕೈಗೊಳ್ಳದಿರುವುದು ಬೇಸರದ ಸಂಗತಿ ಎಂದು ದಲಿತ ಸಂಘರ್ಷ ಸಮಿತಿ (ಬಿ.ಕೃಷ್ಣಪ್ಪ ಬಣ) ಜಿಲ್ಲಾ ಸಂಚಾಲಕ ಕಬ್ಬಿಗೆರೆ ಮೋಹನ್ ತಿಳಿಸಿದ್ದಾರೆ.
ಸೋಮವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ಅಂಬೇಡ್ಕರ್ ಪುತ್ಥಳಿ ತೆರವುಗೊಳಿಸಲು ಮುಂದಾದ ಪ್ರಕರಣದಲ್ಲಿ ಇದರ ಹಿಂದೆ ರಾಜಕೀಯ ಕೈವಾಡ ಇದ್ದಂತೆ ಕಾಣಿಸುತ್ತಿದೆ. ಇಲ್ಲಿನ ಶಾಸಕ ಎಚ್.ಡಿ.ತಮ್ಮಯ್ಯ ನಾನು ಬುದ್ಧ ಬಸವ ಅಂಬೇಡ್ಕರ್ ಅನುಯಾಯಿ ಎಂದು ಹೇಳಿಕೊಳ್ಳುತ್ತಿದ್ದು ಇದುವರೆಗೂ ಈ ಬಗ್ಗೆ ಧ್ವನಿ ಎತ್ತಿಲ್ಲ ಎಂದು ದೂರಿದ್ದಾರೆ.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಇಂತಹ ಪ್ರಕರಣಗಳು ನಡೆದಿದ್ದರೇ ಕೋಮುವಾದಿ, ದೇಶದ್ರೋಹಿ ಹಣೆಪಟ್ಟಿ ಕಟ್ಟಲಾಗುತ್ತಿತ್ತು. ಸಂವಿಧಾನ ಮತ್ತು ಅಂಬೇಡ್ಕರ್ ಪರ ಎನ್ನುವ ಕಾಂಗ್ರೆಸ್ ಪಕ್ಷದ ಶಾಸಕರು ಇದ್ದು ಬುದ್ಧ ಮತ್ತು ಅಂಬೇಡ್ಕರ್ ಅಧ್ಯಯನ ಕೇಂದ್ರ ನಿರ್ಮಾಣಕ್ಕೆ ಜಾಗ ನೀಡಲು ಏಕೆ ಮೀನಾಮೇಷ ಎಣಿಸಲಾಗುತ್ತಿದೆ ಎಂದು ಪ್ರಶ್ನಿಸಿದ್ದಾರೆ.