Mangalore: ಆರು ಸ್ಥಾನದಲ್ಲೂ ಕಾಂಗ್ರೆಸ್ ಗೆಲ್ಲುತ್ತದೆ: ಸಲೀಂ ಅಹಮ್ಮದ್
ಮಂಗಳೂರು: ಮುಂಬರುವ ವಿಧಾನ ಪರಿಷತ್‌ನ ಎಲ್ಲ ಆರೂ ಸ್ಥಾನಗಳನ್ನು ಕಾಂಗ್ರೆಸ್ ಗೆದ್ದೇ ಗೆಲ್ಲಲಿದೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮ್ಮದ್ ಭರವಸೆ ವ್ಯಕ್ತಪಡಿಸಿದ್ದಾರೆ.
ಚುನಾವಣೆ ಹಿನ್ನೆಲೆಯಲ್ಲಿ ಪರಿಶೀಲನೆಗಾಗಿ ಮಂಗಳೂರಿಗೆ ಆಗಮಿಸಿದ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಇಡೀ ರಾಜ್ಯದಲ್ಲಿ ಬಿಜೆಪಿಯಿಂದ ಜನತೆ ಭ್ರಮನಿರಸರಾಗಿದ್ದಾರೆ. ಪದವೀಧರ ಯುವಕರು ಹಾಗೂ ಶಿಕ್ಷಕರು ಬದಲಾವಣೆ ಬಯಸಿದ್ದಾರೆ. ಇದಕ್ಕೆ ಪೂರಕವಾಗಿ ರಾಜ್ಯ ಸರ್ಕಾರವು ಯುವನಿಧಿ ಮೂಲಕ ನಿರುದ್ಯೋಗಿ ಯುವಕರಿಗೆ ಶಕ್ತಿ ನೀಡಿದೆ, ಶಿಕ್ಷಕರಿಗೂ ಹಲವು ಯೋಜನೆ ತರಲಾಗಿದೆ. ಎಲ್ಲ ಆರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲೋದು ಖಚಿತ ಎಂದು ಹೇಳಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕಳೆದ ಒಂದು ವರ್ಷದಲ್ಲಿ ಎಲ್ಲ ಐದೂ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಜನರಿಗೆ ತಲುಪಿವೆ. ಗ್ಯಾರಂಟಿ ಯೋಜನೆಗಳು ಕೇವಲ ರಾಜ್ಯ ಮಾತ್ರವಲ್ಲ, ಇಡೀ ದೇಶದಲ್ಲಿ ಚರ್ಚೆಗೆ ಕಾರಣವಾಗಿವೆ. ಈ ಕಾರಣದಿಂದ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕನಿಷ್ಠ 20 ಸೀಟ್ ಗೆಲ್ಲಲಿದ್ದೇವೆ ಎಂದು ಭವಿಷ್ಯ ನುಡಿದರು.
ಜನರ ಒಡೆಯೋ ಕೆಲಸ:
ಜನರಿಗೆ ಈಗ ಬಿಜೆಪಿಯ ಮೋಸ ಗೊತ್ತಾಗಿದೆ, ಇಡೀ ದೇಶದಲ್ಲಿ ಬದಲಾವಣೆ ಗಾಳಿ ಆರಂಭವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ 10 ವರ್ಷಗಳಲ್ಲಿ ತಾನು ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ಬಿಟ್ಟು ಜನರಲ್ಲಿ ಭೇದ ಸೃಷ್ಟಿಸುವ ಮಾತನಾಡುತ್ತಿದ್ದಾರೆ. ದೇಶದಲ್ಲಿ 3ನೇ ಹಂತದ ಮತದಾನದ ಬಳಿಕ ಬಿಜೆಪಿಗೆ ಸೋಲುವ ಭೀತಿ ಖಚಿತವಾಗಿದೆ. ಹೀಗಾಗಿ ನರೇಂದ್ರ ಮೋದಿ ಅಂದಿನಿಂದಲೇ ತಮ್ಮ ಹೇಳಿಕೆಗಳನ್ನು ಬದಲಿಸಿ ದೇಶದ ಜನರನ್ನು ಒಡೆಯುವ ಕೆಲಸ ಮಾಡ್ತಿದ್ದಾರೆ ಎಂದು ಸಲೀಂ ಅಹಮ್ಮದ್ ಆರೋಪಿಸಿದರು.
ದ.ಕ.ದಲ್ಲೂ ಎಲ್ಲ ನಾಯಕರು, ಕಾರ್ಯಕರ್ತರು ಲೋಕಸಭೆ ಚುನಾವಣೆಗಾಗಿ ನಿರಂತರ ಕೆಲಸ ಮಾಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುವುದು ನಿಶ್ಚಿತ ಎಂದರು.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಗಾಗಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದ ಸಲೀಂ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಪ್ರಕರಣದ ಕುರಿತು ಗೃಹ ಸಚಿವರು ಸೂಕ್ತ ಉತ್ತರ ನೀಡಲಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಮುಖಂಡರಾದ ಶಾಲೆಟ್ ಪಿಂಟೊ, ಗಫೂರ್, ಶಶಿಧರ ಹೆಗ್ಡೆ, ಅಶ್ರಫ್, ಟಿ.ಕೆ. ಸುಧೀರ್, ಗಣೇಶ್ ಪೂಜಾರಿ, ನಝೀಲ್ ಬಜಾಲ್ ಮತ್ತಿತರರಿದ್ದರು.