
Mangalore: ಅಂತರಾಷ್ಟ್ರೀಯ ಯೋಗ ದಿನಾಚರಣೆ: ಅಚ್ಚುಕಟ್ಟಾಗಿ ಸಂಘಟಿಸಲು ಸೂಚನೆ: ಡಾ. ಸಂತೋಷ್ ಕುಮಾರ್ ಜಿ.
ಮಂಗಳೂರು: ಜಿಲ್ಲೆಯಾದ್ಯಂತ ಜೂನ್ 21ರಂದು ಹಮ್ಮಿಕೊಳ್ಳಲಾಗಿರುವ 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅತ್ಯಂತ ಶಿಸ್ತುಬದ್ಧವಾಗಿ ಹಾಗೂ ಅಚ್ಚುಕಟ್ಟಾಗಿ ಸಂಘಟಿಸುವಂತೆ ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್ ಜಿ. ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪೂರ್ವ ಸಿದ್ಧತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲಾಡಳಿತ, ಆಯುಷ್ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿಪೂರ್ವ ಶಿಕ್ಷಣ ಇಲಾಖೆ, ಪದವಿ ಶಿಕ್ಷಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಎನ್.ಎಸ್.ಎಸ್. ಘಟಕಗಳು, ವಿವಿಧ ಯೋಗ ಸಂಸ್ಥೆಗಳು ಹಾಗೂ ಇತರೆ ಇಲಾಖೆಗಳ ಸಹಯೋಗದೊಂದಿಗೆ 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗುತ್ತಿದ್ದು, ಅದರ ಮುಖ್ಯ ಕಾರ್ಯಕ್ರಮ ಮಂಗಳೂರಿನ ಪುರಭವನದ ಮಿನಿ ಸಭಾಂಗಣದಲ್ಲಿ ಜೂ. 21ರಂದು ಬೆಳಿಗ್ಗೆ 8 ಗಂಟೆಗೆ ನಡೆಯಲಿದೆ ಎಂದರು.
ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ‘ಮಹಿಳಾ ಸಬಲೀಕರಣಕ್ಕಾಗಿ ಯೋಗ’ ಎಂಬ ಧ್ಯೇಯ ವಾಕ್ಯದೊಂದಿಗೆ ಆಚರಿಸಲಾಗುತ್ತಿದ್ದು, ಜಿಲ್ಲೆಯ ಪ್ರತಿ ಮನೆಗೂ ಯೋಗದ ಪ್ರಯೋಜನವನ್ನು ತಲುಪಿಸುವ ನಿಟ್ಟಿನಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಎಲ್ಲಾ ವಸತಿ ಶಾಲೆ ಹಾಗೂ ಕಾಲೇಜುಗಳಲ್ಲಿಯೂ ಪ್ರತಿ ನಿತ್ಯ ಮಕ್ಕಳಿಗೆ ಯೋಗ ತರಬೇತಿ ನೀಡಬೇಕು, ಅವರ ಕಲಿಕೆಯ ಜೊತೆಗೆ ಯೋಗವೂ ಎಂದು ಭಾಗವಾಗಬೇಕು. ಇದು ಮಕ್ಕಳಿಂದಲೇ ಪ್ರಾರಂಭವಾಗಬೇಕು. ಮಕ್ಕಳ ಮಾನಸಿಕ, ದೈಹಿಕ ಮತ್ತು ಭಾವನಾತ್ಮಕ ಬೆಳವಣಿಗೆಗೆ ಯೋಗವು ಪ್ರಯೋಜನಕಾರಿಯಾಗಿದೆ. ಸದಾ ಆರೋಗ್ಯವಾಗಿರಲು ಯೋಗ ಮಾಡುವುದು ಬಹಳ ಮುಖ್ಯ. ಯೋಗ ಮಾಡುವುದರಿಂದ ದೇಹದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ಇದು ಎಲ್ಲಾ ರೀತಿಯ ರೋಗಗಳ ವಿರುದ್ಧ ಹೋರಾಡಲು ನಮ್ಮ ದೇಹವನ್ನು ಶಕ್ತಗೊಳಿಸುತ್ತದೆ. ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ನಾವೆಲ್ಲರೂ ಪ್ರತಿದಿನ ಯೋಗ ಮಾಡಬೇಕು. ನಾವು ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ಮಾತ್ರ ಯೋಗಭ್ಯಾಸವನ್ನು ಸೀಮಿತಗೊಳಿಸಬಾರದು ಎಂದರು.
ಜಿಲ್ಲಾ ಆಯುಷ್ ಅಧಿಕಾರಿ ಡಾ. ಮುಹಮ್ಮದ್ ಇಕ್ಬಾಲ್ ಮಾತನಾಡಿ, ಜಿಲ್ಲೆಯ ಶಾಲಾ ಕಾಲೇಜುಗಳು, ವಸತಿ ಶಾಲೆಗಳು, ಆಯುಷ್ ಆರೋಗ್ಯ ಮಂದಿರಗಳು ಮತ್ತು ಸಂಘ ಸಂಸ್ಥೆಗಳಲ್ಲಿ ಸುಮಾರು 1 ಲಕ್ಷ ಯೋಗಾಸಕ್ತರಿಗೆ ಯೋಗ ತರಬೇತಿಗಳನ್ನು ನೀಡಲಾಗುತ್ತಿದ್ದು, ಪೂರ್ವಭಾವಿಯಾಗಿ ಯೋಗೋತ್ಸವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಗದೀಶ್ ಎಂ., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ತಿಮ್ಮಯ್ಯ, ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಅಧೀಕಕ್ಷಕಿ ಜೆಸಿಂತಾ ಡಿ’ಸೊಜ, ಜಿಲ್ಲೆಯ ವಿವಿಧ ಯೋಗ ಸಂಘಟನೆಗಳ ಪ್ರಮುಖರು, ಯೋಗಾಸಕ್ತರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿದ್ದರು.