
Mangalore: ಸಾಂಕ್ರಾಮಿಕ ರೋಗಗಳ ಬಗ್ಗೆ ಎಚ್ಚರ ಇರಲಿ: ಡಾ. ತಿಮ್ಮಯ್ಯ
ಮಂಗಳೂರು: ಡೆಂಘೀ ಸೇರಿದಂತೆ ಸಾಂಕ್ರಾಮಿಕ ರೋಗಗಳ ಬಗ್ಗೆ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ದ.ಕ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ತಿಮ್ಮಯ್ಯ ಹೇಳಿದ್ದಾರೆ.
ಗುರುವಾರ ಇಲ್ಲಿನ ವಾರ್ತಾ ಇಲಾಖೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಡೆಂಘೀ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿದ್ದು, ಈ ಬಗ್ಗೆ ಎಚ್ಚರ ಅತೀ ಅಗತ್ಯ. ಜನವರಿಯಿಂದ ಇದುವರೆಗೆ 211 ಡೆಂಘೀ ಪ್ರಕರಣಗಳು ಕಂಡುಬಂದಿವೆ ಎಂದರು.
ಡೆಂಘೀ ಪ್ರಕರಣಗಳ ಬಗ್ಗೆ ನಿರ್ಲಕ್ಷ್ಯ ಸಲ್ಲದು. ಯಾವುದೇ ಜ್ವರ ಅಥವಾ ಡೆಂಘೀ ಪಾಸಿಟಿವ್ ಕಂಡುಬಂದರೆ ಸ್ವಯಂ ಪ್ರೇರಿತವಾಗಿ ಯಾವುದೇ ಮಾತ್ರೆ, ಔಷಧಿಗಳನ್ನು ತೆಗೆದುಕೊಳ್ಳದೆ ವೈದ್ಯರನ್ನು ಸಂಪರ್ಕಿಸಬೇಕು. ನೋವು ನಿವಾರಕ ಮಾತ್ರೆಗಳನ್ನು ತೆಗೆದುಕೊಂಡರೆ ಪ್ಲೇಟ್‌ಲೆಟ್ ಕಡಿಮೆಯಾಗಿ ಆರೋಗ್ಯ ಮತ್ತಷ್ಟು ಹದಗೆಡುವ ಸಾಧ್ಯತೆ ಇದೆ. ಜನವರಿಯಿಂದ ಇದುವರೆಗೆ ಜಿಲ್ಲೆಯಲ್ಲಿ ಮಲೇರಿಯಾ 25 ಪ್ರಕರಣ, ಒಂದು ಚಿಕುನ್‌ಗುನ್ಯಾ ಪ್ರಕರಣಗಳು ಪತ್ತೆಯಾಗಿವೆ ಎಂದರು.
ಇದ್ದಕ್ಕಿದ್ದಂತೆ ತೀವ್ರ ಜ್ವರ, ವಿಪರೀತ ತಲೆನೋವು, ಕಣ್ಣಿನ ಹಿಂಭಾಗದಲ್ಲಿ ನೋವು, ಮಾಂಸಖಂಡ ಮತ್ತು ಕೀಲುಗಳಲ್ಲಿ ವಿಪರೀತ ನೋವು, ವಾಕರಿಕೆ ವಾಂತಿ ಇತ್ಯಾದಿ ಡೆಂಘೀ ಜ್ವರದ ಲಕ್ಷಣಗಳು. ಇಂತಹ ಸಾಮಾನ್ಯ ಲಕ್ಷಣಗಳು ಕಂಡುಬಂದರೆ ವೈದ್ಯರನ್ನು ಸಂಪರ್ಕಿಸುವುದು ಒಳಿತು. ಸಾರ್ವಜನಿಕರ ಸಹಭಾಗಿತ್ವವಿದ್ದರೆ ಮಾತ್ರ ಸಾಂಕ್ರಾಮಿಕ ರೋಗಗಳನ್ನು ತಡೆಯಲು ಸಾಧ್ಯ ಎಂದು ಹೇಳಿದರು.
ಜಿಲ್ಲಾ ಮಲೇರಿಯಾ ನಿಯಂತ್ರಾಣಧಿಕಾರಿ ಡಾ. ನವೀನ್‌ಚಂದ್ರ ಕುಲಾಲ್, ಜಿಲ್ಲಾ ವಾರ್ತಾಧಿಕಾರಿ ಬಿ.ಎ. ಖಾದರ್ ಶಾ ಉಪಸ್ಥಿತರಿದ್ದರು.