
Sulya: ಜಿ.ಪಂ. ಹಾಗೂ ತಾ.ಪಂ. ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಒಟ್ಟಾಗಿ ಸ್ಪರ್ಧೆ: ಬಿ.ಎಸ್. ಯಡಿಯೂರಪ್ಪ
ಸುಳ್ಯ: ಮುಂದೆ ನಡೆಯುವ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಒಟ್ಟಾಗಿ ಸ್ಪರ್ಧೆ ನಡೆಸಲು ನಿರ್ಧರಿಸಲಾಗಿದೆ. ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಿದರೆ ಕಾಂಗ್ರೆಸ್‌ನ್ನು ಧೂಳೀಪಟ ಮಾಡಲು ಸಾಧ್ಯ ಎಂದು ಮಾಜಿ ಮುಖ್ಯಮಂತ್ರಿ, ಜಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಅವರು ಜೂ.24 ರಂದು ಸುಳ್ಯ ಬಿಜೆಪಿ ಮಂಡಲ ಸಮಿತಿಯ ನೂತನ ಕಚೇರಿ ಉದ್ಘಾಟಿಸಿ ಮಾತನಾಡಿದರು.
ಬಿಜೆಪಿ ಹಾಗೂ ಜೆಡಿಎಸ್ ಒಟ್ಟಾಗಿ ಸ್ಪರ್ಧೆ ಮಾಡಿದ ಕಾರಣ ಲೋಕಸಭಾ ಚುನಾವಣೆಯಲ್ಲಿ ಉತ್ತಮ ಫಲಿತಾಂಶ ಬಂದಿದೆ. ಮುಂದೆಯೂ ಒಟ್ಟಾಗಿ ಕೆಲಸ ಮಾಡಿ ಕಾಂಗ್ರೆಸನ್ನು ಮೂಲೆಗುಂಪು ಮಾಡಲು ಸಾಧ್ಯ ಮತ್ತೆ ಬಿಜೆಪಿ ಸರಕಾರ ಅಧಿಕಾರಕ್ಕೆ ತರಲು ಸಾಧ್ಯ. ಕಾಂಗ್ರೆಸ್ ಸರಕಾರ ಪೆಟ್ರೋಲ್, ಡೀಸೆಲ್, ವಿದ್ಯುತ್ ದರ ಸೇರಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನ ಸಾಮಾನ್ಯರ ಬದುಕು ದುಸ್ತರವಾಗಿದೆ ಎಂದು ಅವರು ಹೇಳಿದರು.
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಮಾತನಾಡಿ, ಬಿಜೆಪಿಗೆ ಸುಳ್ಯದಲ್ಲಿ ಒಂದು ಸ್ವಂತ ಕಟ್ಟಡ ಆಗಬೇಕು ಎಂಬುದು ಹಲವಾರು ದಶಕಗಳ ಕನಸು. ಹಿಂದಿನ ಎಲ್ಲಾ ಅಧ್ಯಕ್ಷರ ಪ್ರಯತ್ನದಿಂದ ಇದು ಸಾಧ್ಯವಾಗಿದೆ ಎಂದು ಹೇಳಿದರು.
ಮಾಜಿ ಸಚಿವ ಎಸ್. ಅಂಗಾರ ಮಾತನಾಡಿ, ಹಲವರ ತ್ಯಾಗ, ಬಲಿದಾನದ ಫಲವಾಗಿ ಪಕ್ಷ ಬೆಳೆದಿದೆ. ಪಕ್ಷ ಬೆಳೆದ ಇತಿಹಾಸ ತಿಳಿದುಕೊಳ್ಳಬೇಕು. ಯಡಿಯೂರಪ್ಪರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ರೈತರ ಹಾಗೂ ಜನರ ಪರವಾಗಿ ದೊಡ್ಡ ಕೆಲಸ ಮಾಡಿದ್ದಾರೆ. ಸುಳ್ಯದ ಅಭಿವೃದ್ಧಿಗೆ ದೊಡ್ಡ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಸ್ವಾಗತಿಸಿದರು. ಬಿಜೆಪಿ ಮಂಡಲ ಪ್ರಭಾರಿ ರವೀಂದ್ರ ಶೆಟ್ಟಿ ಉಳಿದೊಟ್ಟು, ಬಿಜೆಪಿ ಮಂಡಲ ಸಮಿತಿ ಮಾಜಿ ಅಧ್ಯಕ್ಷ ಹಾಗೂ ಅಟಲ್‌ಜಿ ಸೇವಾ ಟ್ರಸ್ಟ್‌ನ ಅಧ್ಯಕ್ಷ ಹರೀಶ್ ಕಂಜಿಪಿಲಿ ಉಪಸ್ಥಿತರಿದ್ದರು. ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ವಿನಯಕುಮಾರ್ ಕಂದಡ್ಕ, ಪ್ರದೀಪ್ ರೈ ಮನವಳಿಕೆ ಕಾರ್ಯಕ್ರಮ ನಿರೂಪಿಸಿದರು.
ಈ ಸಂದರ್ಭದಲ್ಲಿ ಕಚೇರಿಯ ಸ್ಥಳ ನೀಡಿದ ಮಧುಸೂದನ ಕುಂಭಕ್ಕೋಡು ಹಾಗೂ ಲತಾ ಮಧುಸೂದನ್ ಹಾಗೂ ಇದುವರೆಗೆ ಕಚೇರಿ ಕೊಠಡಿ ನೀಡಿದ್ದ ಕೃಷ್ಣ ಕಾಮತ್ ಅವರನ್ನು ಸನ್ಮಾನಿಸಲಾಯಿತು.