
Udupi: ದ್ವೈತಮತ ವಿದ್ವಾಂಸ ಪ್ರವಚನಕಾರ ಸಗ್ರಿ ರಾಘವೇಂದ್ರ ಉಪಾಧ್ಯಾಯ ವಿಧಿವಶ
ಉಡುಪಿ: ದೈತ ಸಿದ್ಧಾಂತದ ಮೇರು ವಿದ್ವಾಂಸ, ಪ್ರಚನಕಾರ, ಉಡುಪಿ ಅಷ್ಟಮಠಗಳ ಆಸ್ಥಾನ ವಿದ್ವಾಂಸ ವಿದ್ವಾನ್ ಸಗ್ರಿ ರಾಘವೇಂದ್ರ ಉಪಾಧ್ಯಾಯ (72) ಶನಿವಾರ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನರಾದರು.
ಭಂಡಾರಕೇರಿ ಮಠ ಬೆಂಗಳೂರಿನಲ್ಲಿ ಆಯೋಜಿಸಿದ್ದ ಸರಣಿ ಪ್ರವಚನ ಮಾಲಿಕೆಯಲ್ಲಿ ಶುಕ್ರವಾರ ಪಾಲ್ಗೊಂಡಿದ್ದ ಅವರು, ಶ್ರೀರಾಮ ನಿರ್ಯಾಣ ವಿಷಯದಲ್ಲಿ ಪ್ರವಚನಗೈದ ಕೆಲವೇ ಹೊತ್ತಿನಲ್ಲಿ ಅಸ್ವಸ್ಥಗೊಂಡು ಕುಸಿದು ಬಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ಸೇರಿಸಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದರು.
ಮೂಲತಃ ವಿದ್ವಾಂಸರ ಮನೆತನದವರಾದ ಉಪಾಧ್ಯಾಯರು ಸಂಪ್ರದಾಯ ನಿಷ್ಠೆ ಹಾಗೂ ವಿಪ್ರವಿಹಿತ ಕರ್ಮಾನುಷ್ಠಾನಗಳಲ್ಲಿ ಆತ್ಯಂತಿಕ ಶ್ರದ್ಧೆ ಹೊಂದಿದ್ದು ಜೀವನ ಪರ್ಯಂತ ಅವುಗಳನ್ನು ಪಾಲಿಸಿಕೊಂಡು ಬಂದಿದ್ದರು. ಮಧ್ವಶಾಸ್ತ್ರದ ಬಗ್ಗೆ ಅಧಿಕೃತವಾಗಿ ಮಾತನಾಡಬಲ್ಲ ವಿದ್ವಾಂಸರಾಗಿದ್ದ ಅವರು ಬಹುತೇಕ ಎಲ್ಲ ಮಾಧ್ವಮಠಗಳಿಂದ ಪುರಸ್ಕೃತರಾಗಿದ್ದರು. ಪ್ರವಚನಕುಶಲಿಗಳಾಗಿದ್ದ ಅವರು ದ್ವೈತ ವೇದಾಂತ ಶಾಸ್ತ್ರದ ಹಳೆಯ ತಲೆಮಾರಿನ ವಿದ್ವಾಂಸರ ಮಹತ್ವದ ಕೊಂಡಿಯಾಗಿದ್ದರು.
ಉಡುಪಿಯ ಶ್ರೀಮನ್ಮಧ್ವಸಿದ್ಧಾಂತಪ್ರಬೋಧಿನಿ ಸಂಸ್ಕೃತ ಮವಿದ್ಯಾಲಯದಲ್ಲಿ ಸುದೀರ್ಘ ಕಾಲ ದೈತ ವೇದಾಂತ ಶಾಸ್ತ್ರ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಅಷ್ಟಮಠಗಳಿಂದ ಪ್ರಕಟವಾಗುವ ಸುಗುಣಮಾಲಾ, ಸರ್ವಮೂಲ ತತ್ತ್ವವಾದ ಮೊದಲಾದ ಅನೇಕ ಮಾಸಪತ್ರಿಕೆಗಳಲ್ಲಿ ಅವರು ನಿರಂತರವಾಗಿ ಅಂಕಣಗಳನ್ನು ಬರೆಯುತ್ತಿದ್ದರು.
ಇತ್ತೀಚೆಗಷ್ಟೇ ಪೇಜಾವರ ಶ್ರೀಗಳ ನೇತೃತ್ವದಲ್ಲಿ ಅಯೋಧ್ಯೆಯಲ್ಲಿ ಸಂಪನ್ನಗೊಂಡ ಮಂಡಲೋತ್ಸವದಲ್ಲಿ ಭಾಗವಹಿಸಿ ಅಷ್ಠಾವಧಾನ ಸೇವೆ ನಡೆಸಿದ್ದರು.
ಮೃತರು ಪತ್ನಿ, ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಬೆಂಗಳೂರಿನ ಚಾಮರಾಜಪೇಟೆ ಜಿಂಕೆಪಾರ್ಕ್ ಬಳಿಯ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಿತು.
ಸಂತಾಪ:
ಸಗ್ರಿ ರಾಘವೇಂದ್ರ ಉಪಾಧ್ಯಾಯ ನಿಧನಕ್ಕೆ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಮತ್ತು ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು, ಪಲಿಮಾರು ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಮತ್ತು ಶ್ರೀ ವಿದ್ಯಾರಾಜೇಶ್ವರತೀರ್ಥ ಶ್ರೀಪಾದರು, ಅದಮಾರು ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಮತ್ತು ಶ್ರೀ ಈಶಪ್ರಿಯತೀರ್ಥ ಶ್ರೀಪಾದರು, ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು, ಕಾಣಿಯೂರು ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು, ಸೋದೆ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದರು ಮತ್ತು ಶೀರೂರು ಶ್ರೀ ವೇದವರ್ಧನತೀರ್ಥ ಶ್ರೀಪಾದರು ಹಾಗೂ ಮಂತ್ರಾಲಯ, ಭಂಡಾರಕೇರಿ, ಭೀಮನಕಟ್ಟೆ ಮತ್ತು ಚಿತ್ರಾಪುರ ಶ್ರೀಗಳು, ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾ, ಯುವ ಬ್ರಾಹ್ಮಣ ಪರಿಷತ್, ಕರಂಬಳ್ಳಿ ವಲಯ ಬ್ರಾಹ್ಮಣ ಸಮಿತಿ, ತುಳು ಶಿವಳ್ಳಿ ಬ್ರಾಹಣ ಮಹಾಮಂಡಲ, ಉಡುಪಿ ಪುರೋಹಿತರ ಸಂಘ, ಸಂಸ್ಕೃತ ಮಹಾವಿದ್ಯಾಲದ ಆಡಳಿತ ಮಂಡಳಿ ಮತ್ತು ಸಿಬಂದಿ ವರ್ಗ, ಮಾಜಿ ಶಾಸಕ ಕೆ. ರಘುಪತಿ ಭಟ್. ಶಾಸಕ ಯಶಪಾಲ್ ಸುವರ್ಣ ಮೊದಲಾದವರು ಸಂತಾಪ ವ್ಯಕ್ತಪಡಿಸಿದ್ದಾರೆ.