ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಮೂವರ ಸೆರೆ

ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಮೂವರ ಸೆರೆ


ಮಂಗಳೂರು: ಬೆಂಗಳೂರಿನಿಂದ ಮಂಗಳೂರು ನಗರಕ್ಕೆ ಕಾರಿನಲ್ಲಿ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎನ್ನು ಸಾಗಾಟ/ಮಾರಾಟ ಮಾಡುತ್ತಿದ್ದವನನ್ನು ಪತ್ತೆ ಹಚ್ಚಿ 42 ಗ್ರಾಂ ಎಂಡಿಎಂಎ ನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಮಂಗಳೂರು ನಗರಕ್ಕೆ ಬೆಂಗಳೂರಿನಿಂದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಖರೀದಿಸಿಕೊಂಡು ಹೊಸ ಮಾರುತಿ ಬಲೆನೋ ಕಾರಿನಲ್ಲಿ ಸಾಗಾಟ/ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ಮಂಗಳೂರು ನಗರದ ಸುರತ್ಕಲ್ ಎನ್‌ಐಟಿಕೆ ಮುಕ್ಕ ಪರಿಸರದಲ್ಲಿ ಅಕ್ರಮವಾಗಿ ಎಂಡಿಎಂಎ ಮಾದಕ ವಸ್ತುವನ್ನು ಹೊಂದಿಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಕಾರನ್ನು ಪತ್ತೆ ಹಚ್ಚಿ ಕಾರಿನಲ್ಲಿದ್ದ ಕಾಸರಗೋಡಿನ ಶಾಜಹಾನ್ ಪಿ. ಎಂ. (32), ಮೊಹಮ್ಮದ್ ನಿಶಾದ್ (27), ಬೆಂಗಳೂರು ಗಿರಿನಗರದ ಮನ್ಸೂರು ಎಂ. ಎಂ. (27) ಎಂಬವರನ್ನು ಬಂಧಿಸಲಾಗಿದೆ. 

ಆರೋಪಿಗಳ ವಶದಿಂದ 2,10,000 ರೂ. ಮೌಲ್ಯದ 42 ಗ್ರಾಂ ನಿಷೇಧಿತ ಮಾದಕ ವಸ್ತು ಎಂಡಿಎಂಎ, 5 ಮೊಬೈಲ್ ಫೋನ್ ಗಳು, ಹೊಸ ಮಾರುತಿ ಬಲೆನೋ ಕಾರು, ಡಿಜಿಟಲ್ ತೂಕ ಮಾಪಕವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 12,18,500 ಆಗಬಹುದು. ಈ ಬಗ್ಗೆ  ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿಗಳು ಅಕ್ರಮ ಲಾಭಗಳಿಸುವ ಉದ್ದೇಶದಿಂದ ಹೊಸ ಕಾರನ್ನು ಬಾಡಿಗೆಗೆ ಪಡೆದು ಬೆಂಗಳೂರಿನಿಂದ ಎಂಡಿಎಂಎ ಅನ್ನು ಖರೀದಿಸಿಕೊಂಡು ಕರ್ನಾಟಕ, ಕೇರಳ ರಾಜ್ಯದ  ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರು. ಈ ಮಾದಕ ವಸ್ತು  ಮಾರಾಟ, ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ.  ಇವರು ಐಷಾರಾಮಿ ಜೀವನ ನಡೆಸುವ ಉದ್ದೇಶದಿಂದ ಮಾದಕ ವಸ್ತುಗಳ ಮಾರಾಟ ದಂಧೆ ನಡೆಸುತ್ತಿದ್ದಾರೆ. ಆರೋಪಿಗಳ ಪೈಕಿ ಶಾಜಹಾನ್ ಎಂಬಾತನ ವಿರುದ್ಧ ಈ ಹಿಂದೆ ಕಾಸರಗೋಡು ಜಿಲ್ಲೆ ಮೇಲ್ಪರಂಬ, ಬೇಕಲಂ, ವಿದ್ಯಾನಗರ, ಕುಂಬಳೆ, ಕಾಸರಗೋಡು ಪೊಲೀಸ್ ಠಾಣೆಗಳಲ್ಲಿ ಮಾದಕ ವಸ್ತು ಮಾರಾಟ/ಸೇವನೆಗೆ ಸಂಬಂಧಪಟ್ಟಂತೆ ಒಟ್ಟು 7 ಪ್ರಕರಣ ದಾಖಲಾಗಿರುತ್ತದೆ. ಇನ್ನೋರ್ವ ಆರೋಪಿ ಮೊಹಮ್ಮದ್ ನಿಶಾದ್ ಎಂಬಾತನ ವಿರುದ್ಧ ಪುತ್ತೂರು ನಗರ ಹಾಗೂ ಮಡಿಕೇರಿ ಪೊಲೀಸ್ ಠಾಣೆಯಲ್ಲಿ 2 ದ್ವಿಚಕ್ರ ವಾಹನ ಕಳವು ಪ್ರಕರಣ ದಾಖಲಾಗಿದೆ.



Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article