ಸೆ.26 ರಂದು ಎಬಿವಿಪಿ ರಾಜ್ಯವ್ಯಾಪಿ ಪ್ರತಿಭಟನೆ ನಿರ್ಧಾರ: ಪ್ರವೀಣ್ ಎಚ್.ಕೆ.

ಸೆ.26 ರಂದು ಎಬಿವಿಪಿ ರಾಜ್ಯವ್ಯಾಪಿ ಪ್ರತಿಭಟನೆ ನಿರ್ಧಾರ: ಪ್ರವೀಣ್ ಎಚ್.ಕೆ.

ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯಗಳ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸುವಂತೆ ಆಗ್ರಹಿಸಿ ಸೆ.26 ರಂದು ರಾಜ್ಯದ ಎಲ್ಲಾ ವಿಶ್ವ ವಿದ್ಯಾನಿಲಯ ವ್ಯಾಪ್ತಿಯಲ್ಲಿ ಹೋರಾಟ ನಡೆಸಲು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಕರ್ನಾಟಕ ದಕ್ಷಿಣ ಪ್ರಾಂತದ ರಾಜ್ಯ ಕಾರ್ಯಕಾರಣಿ ಸಭೆ ತೀರ್ಮಾನಿಸಿದೆ ಎಂದು ಕರ್ನಾಟಕ ದಕ್ಷಿಣ ಪ್ರಾಂತ್ಯದ ರಾಜ್ಯ ಕಾರ್ಯದರ್ಶಿ ಪ್ರವೀಣ್ ಎಚ್.ಕೆ. ಹೇಳಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳೂರಿನ ಉಮಾದಮ್ ಸಭಾಂಗಣದಲ್ಲಿ ನಡೆದಿದ್ದ ಕಾರ್ಯಕಾರಣಿ ಸಭೆಯಲ್ಲಿ ರಾಜ್ಯದ ಶೈಕ್ಷಣಿಕ ಪರಿಸ್ಥಿತಿ ಮತ್ತು ರಾಜ್ಯದ ವರ್ತಮಾನ ಪರಿಸ್ಥಿತಿ ಕುರಿತು ಎರಡು ಕರಡು ನಿರ್ಣಯ ಕೈಗೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹಾಸ್ಟೆಲ್ ಸಂಖ್ಯೆಯನ್ನು ಹೆಚ್ಚಿಸಬೇಕು. ಸಮರ್ಪಕವಾಗಿ ವಿದ್ಯಾರ್ಥಿ ವೇತನ ವಿತರಿಸುವಂತೆ ಹಾಗೂ ಸಾಂಪ್ರದಾಯಿಕ ವಿಶ್ವವಿದ್ಯಾಲಯಗಳ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಯಿತು ಎಂದರು.

ಎನ್‌ಇಪಿ ಹಾಗೂ ಎಸ್‌ಇಪಿ ಕುರಿತು ಇರುವ ಗೊಂದಲವನ್ನು ಸರ್ಕಾರ ನಿವಾರಿಸಿ ವಿದ್ಯಾರ್ಥಿಗಳಿಗೆ ಸೂಕ್ತ ಆಯ್ಕೆಗೆ ಅವಕಾಶ ಕಲ್ಪಿಸಬೇಕು. ಸರಕಾರದ ವಿಳಂಬ ನೀತಿಯಿಂದಾಗಿ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದು ಸರ್ಕಾರ ಶೀಘ್ರ ಪರಿಹರಿಸಬೇಕು ಎಂದು ಆಗ್ರಹಿಸಿದರು.

ಹೆಣ್ಣು ಮಕ್ಕಳಲ್ಲಿ ಮಾನಸಿಕ ಸ್ಥೈರ್ಯ ತುಂಬಲು ಮಿಷನ್ ಸಾಹಸಿ ಕರಾಟೆ ಕಾರ್ಯಕ್ರಮವನ್ನು ಆಯೋಜಿಸಲು ಕರೆ ನೀಡಲಾಯಿತು. ಈ ಬಾರಿಯ ರಾಜ್ಯ ಸಮ್ಮೇಳನ ಶಿವಮೊಗ್ಗದಲ್ಲಿ ಹಾಗೂ ವಿದ್ಯಾರ್ಥಿ ಸಂಸ್ಕೃತಿ ಚಳುವಳಿ ಮೈಸೂರಿನಲ್ಲಿ ಆಯೋಜಿಸಲು ನಿರ್ಧರಿಸಲಾಯಿತು ಎಂದರು.

ಎಬಿವಿಪಿ ವಿಭಾಗ ಸಂಚಾಲಕ ಗಣೇಶ್ ಪೂಜಾರಿ, ಮಂದಾರ, ಜಿಲ್ಲಾ ಸಂಚಾಲಕ ಸುಮಿತ್ ಶೆಟ್ಟಿ ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article