ರಾಜ್ಯಶಾಸ್ತ್ರ ಅಧ್ಯಯನಕ್ಕೆ ಹೆಚ್ಚಿನ ಪ್ರಾಶಸ್ತ್ಯ ಸಿಗಲಿ: ಪೊ. ಪಿ.ಎಲ್. ಧರ್ಮ
ಮಂಗಳೂರು: ಮಂಗಳೂರು ವಿಶ್ವ ವಿದ್ಯಾಲಯ ವ್ಯಾಪ್ತಿಯ ಕಾಲೇಜುಗಳಲ್ಲಿ ರಾಜ್ಯಶಾಸ್ತ್ರ ವಿಭಾಗವನ್ನು ಬೆಳೆಸುವ ನಿಟ್ಟಿನಲ್ಲಿ ಎಲ್ಲ ರೀತಿಯ ಸಹಕಾರ ನೀಡಲಾಗುವುದು. ವಿಭಾಗದ ಹಳೆ ವಿದ್ಯಾರ್ಥಿ ಸಂಘ ಆರಂಭಗೊಂಡಿದ್ದು, ಇದನ್ನು ಇನ್ನಷ್ಟು ಶಕ್ತಿಶಾಲಿಯಾಗಿ ಸಂಘಟಿಸಬೇಕು. ವಿದ್ಯಾರ್ಥಿಗಳು ಕೂಡಾ ರಾಜ್ಯಶಾಸ್ತ್ರ ಅಧ್ಯಯನಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಮಂಗಳೂರು ವಿವಿ ಕುಲಪತಿ ಪೊ. ಪಿ.ಎಲ್. ಧರ್ಮ ಹೇಳಿದರು.
ಮಂಗಳೂರು ವಿಶ್ವ ವಿದ್ಯಾಲಯ ರಾಜ್ಯಶಾಸ್ತ್ರ ವಿಭಾಗದ ಹಳೆ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿಶ್ವ ವಿದ್ಯಾಲಯದಲ್ಲಿ ಅನೇಕ ಸವಾಲುಗಳಿವೆ. ಆಡಳಿತಾತ್ಮಕವಾಗಿ ಸರಿಪಡಿಸಬಹುದಾದ ಎಲ್ಲ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದಕ್ಕೆ ಮೊದಲ ಆದ್ಯತೆ ನೀಡುತ್ತೇನೆ. ಅನೇಕ ಕಾಲೇಜುಗಳಲ್ಲಿ ಮುಚ್ಚಿ ಹೋಗಿರುವ ಕಲಾ ವಿಭಾಗವನ್ನು ಮರು ಆರಂಭಿಸಲು ಪ್ರಯತ್ನಪಡುತ್ತೇನೆ. 1.80ಲಕ್ಷಕ್ಕೂ ಅಧಿಕ ಮಂದಿ ವಿವಿ ಪ್ಯಾಪ್ತಿಯ ಕಾಲೇಜುಗಳಲ್ಲಿ ಅಧ್ಯಯನ ಮಾಡುತ್ತಿದ್ದು, ಅವರೆಲ್ಲರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು, ಸರಕಾರ ಮಟ್ಟದಲ್ಲೂ ಆಗಬೇಕಿರುವ ಕೆಲಸ ಕಾರ್ಯಗಳಿಗೂ ಹೆಚ್ಚಿನ ಪ್ರಯತ್ನಪಟ್ಟು ಕೆಲಸ ನಿರ್ವಹಿಸುತ್ತೇನೆ ಎಂದರು.
ಮಂಗಳೂರು ವಿಶ್ವವಿದ್ಯಾಲಯ ರಾಜ್ಯಶಾಸ್ತ್ರ ವಿಭಾಗದ ಹಾಗೂ ಹೊಸದಿಲ್ಲಿಯ ರಾಜ್ಯಶಾಸ್ತ್ರ ವಿಭಾಗದ ನಿವೃತ್ತ ಪ್ರಾಧ್ಯಾಪಕ ಪೊ. ವಲೇರಿಯನ್ ರೋಡ್ರಿಗಸ್ ನೂತನ ಸಂಘವನ್ನು ಉದ್ಘಾಟಿಸಿ ಮಾತನಾಡಿ, ರಾಜ್ಯಶಾಸ್ತ್ರ ವಿಭಾಗದಲ್ಲಿ ಅಧ್ಯಯನ ಮಾಡಿದ ವಿದ್ಯಾರ್ಥಿಗಳಿಗೆ ಕೇವಲ ಬೋಧನಾ ವೃತ್ತಿ ಮಾತ್ರವಲ್ಲದೆ, ಅನೇಕ ಅವಕಾಶಗಳಿವೆ. ಅವುಗಳನ್ನು ಸಮರ್ಪಕ ರೀತಿಯಲ್ಲಿ ಬಳಕೆ ಮಾಡಿಕೊಳ್ಳಬೇಕು. ಹಳೆ ವಿದ್ಯಾರ್ಥಿ ಸಂಘಕ್ಕೆ ಬೇಕಾದ ಎಲ್ಲ ರೀತಿಯ ನೆರವು, ಸಲಹೆಗಳನ್ನು ನೀಡಲು ನಾನು ಬದ್ಧ ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ನಿವೃತ್ತ ಪ್ರಾಧ್ಯಾಪಕರಾದ ಪೊ. ಜೆ.ಎಸ್. ಸದಾನಂದ, ಪೊ. ರಾಜಾರಾಮ ತೋಳ್ಪಾಡಿ, ಮಂಗಳೂರು ವಿವಿ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪೊ. ಜಯರಾಮ್ ಅಮೀನ್ ಮಾತನಾಡಿದರು. ಸಂಘದ ಖಜಾಂಜಿ ಪ್ರವೀಣ್ ಬಂಗೇರ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಮಂಗಳೂರು ವಿಶ್ವವಿದ್ಯಾಲಯದ ಕುಲಪತಿಗಳಾಗಿ ನೇಮಕಗೊಂಡಿರುವ ಪೊ. ಪಿ.ಎಲ್. ಧರ್ಮ, ರಾಜ್ಯಶಾಸ್ತ್ರ ವಿಭಾಗದಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಪೊ. ವಲೇರಿಯನ್ ರೋಡ್ರಿಗಸ್, ಪೊ. ಜೆ.ಎಸ್. ಸದಾನಂದ, ಪೊ. ರಾಜಾರಾಮ ತೋಳ್ಪಾಡಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಝೇವಿಯರ್ ಡಿಸೋಜ, ವಿಭಾಗದ ಕಚೇರಿಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಮಂಜುನಾಥ ಹಾಗೂ ಚಂದ್ರಶೇಖರ್ ಅವರನ್ನು ಸನ್ಮಾನಿಸಲಾಯಿತು.
ಮಂಗಳೂರು ವಿಶ್ವ ವಿದ್ಯಾಲಯ ರಾಜ್ಯಶಾಸ್ತ್ರ ವಿಭಾಗದ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಝೇವಿಯರ್ ಡಿಸೋಜ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಕಾರ್ಯದರ್ಶಿ ಪೊ. ದಯಾನಂದ್ ನಾಯ್ಕ್ ವಂದಿಸಿದರು. ಕಾರ್ಯಕಾರಿ ಸಮಿತಿ ಸದಸ್ಯರಾದ ಪತ್ರಕರ್ತ ಆರ್.ಸಿ. ಭಟ್ ಹಾಗೂ ಡಾ. ರೋಸ್ ವೀರಾ ಡಿಸೋಜ ಕಾರ್ಯಕ್ರಮ ನಿರೂಪಿಸಿದರು.