ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಯುವ ನೈತಿಕತೆ ಸಿದ್ದರಾಮಯ್ಯರಿಗೆ ಇಲ್ಲ: ಪ್ರತಾಪ್ ಸಿಂಹ ನಾಯಕ್
ಮಂಗಳೂರು: ಕಳಂಕ ರಹಿತ, ಶುದ್ಧ ಹಸ್ತ, ತೆರೆದ ಪುಸ್ತಕ ಎಂದು ಹೇಳಿಕೊಂಡು ತಿರುಗಾಡುತ್ತಿದ್ದ ಸಿದ್ಧರಾಮಯ್ಯ ಅವರು ಇದೀಗ ಮೂಡಾದ ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ತನಿಖೆ ಎದುರಿಸಬೇಕಾಗಿ ಬಂದಿರುವುದರಿಂದ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯಲು ಅವರಿಗೆ ಯಾವುದೇ ನೈತಿಕತೆ ಇಲ್ಲ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಹೇಳಿದ್ದಾರೆ.
ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರು ನೀಡಿರುವ ಅನುಮತಿಯನ್ನು ರದ್ದುಗೊಳಿಸುವಂತೆ ಕೋರಿ ಸಿದ್ಧರಾಮಯ್ಯ ಅವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ. ಹೀಗಾಗಿ ಅವರು ಇನ್ನು ಮುಖ್ಯಮಂತ್ರಿ ಹುದ್ದೆಯಲ್ಲಿ ಇರಲು ಅನರ್ಹರಾಗಿದ್ದಾರೆ. ನಿಯಮಗಳ ಪ್ರಕಾರ ಸಿದ್ಧರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಮೂಡಾದಿಂದ ಎರಡು ನಿವೇಶನ ನೀಡಬೇಕಿದ್ದರೂ, 14 ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ. ಹಂಚಿಕೆ ಪ್ರಕ್ರಿಯೆಯಲ್ಲಿನ ಸತ್ಯವನ್ನು ಅರಿಯಲು ತನಿಖೆಯ ಅಗತ್ಯವಿದೆ ಎಂದು ನ್ಯಾಯಮೂರ್ತಿ ನಾಗಪ್ರಸನ್ನ ಹೇಳಿದ್ದಾರೆ. ಇಷ್ಟೇ ಅಲ್ಲದೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಬುಧವಾರ ಅಧಿಕೃತವಾದ ಆದೇಶವನ್ನು ಹೊರಡಿಸಿದ್ದು ಎಫ್.ಐ.ಆರ್. ದಾಖಲಿಸಿ ತನಿಖೆ ನಡೆಸುವಂತೆ ಲೋಕಾಯುಕ್ತ ಪೋಲಿಸರಿಗೆ ಸೂಚಿಸಿದೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಅಥವಾ ಇತರ ಹುದ್ಧೆಗಳಲ್ಲಿದ್ದಾಗ ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿರುವ ಶಂಕೆಯನ್ನು ನ್ಯಾಯಾಲಯ ವ್ಯಕ್ತಪಡಿಸಿದೆ.
ರಾಜ್ಯಪಾಲರು ವಿವೇಚನಾಯುತವಾಗಿ ಆದೇಶ ಹೊರಡಿಸಿದ್ದಾರೆ ಎಂಬುದಾಗಿ ನ್ಯಾಯಾಲಯ ಅಭಿಪ್ರಾಯಿಸಿದೆ. ಇದು ಮುಖ್ಯಮಂತ್ರಿ ಮತ್ತು ಅವರ ಬೆಂಬಲಿಗರ ಆರೋಪಗಳು ಸುಳ್ಳು ಎಂಬುದನ್ನು ಎತ್ತಿ ತೋರಿಸಿದೆ ಎಂದಿದ್ದಾರೆ.