ಸಿಎಂ ರಾಜಿನಾಮೆ ನೀಡಿ ತನಿಖೆ ಎದುರಿಸಿ: ನಂದನ್ ಮಲ್ಯ
ಮಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಗರಣದಲ್ಲಿ ನೇರ ಭಾಗಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್ ಅರ್ಜಿ ವಜಾ ಮಾಡುವಂತೆ ಸಿಎಂ ಸಿದ್ದರಾಮಯ್ಯ ಸಲ್ಲಿಕೆ ಮಾಡಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದ್ದು, ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆ ಮಾಡುವಂತೆ ಕೋರ್ಟ್ ಅನುಮತಿ ನೀಡಿರುವುದು ಬಿಜೆಪಿಯ ಸಂಘಟಿತ ಹೋರಾಟಕ್ಕೆ ಸಂದ ಗೆಲುವು ಎಂದು ಬಿಜೆಪಿ ಯುವ ಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ನಂದನ್ ಮಲ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೂಡ ಹಗರಣದಲ್ಲಿ ಭಾಗಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಪದವಿಗೆ ರಾಜಿನಾಮೆ ನೀಡಿ ತನಿಖೆ ಎದುರಿಸಲಿ. ಕಳಂಕ ರಹಿತ ಆಡಳಿತ ಎಂದು ಜನರ ಕಣ್ಣಿಗೆ ಮಂಕುಬೂದಿ ಎರಚಿ ಸೈಟ್ ಕಬಳಿಕೆಯಲ್ಲಿ ಭಾಗಿಯಾಗಿದ್ದಾರೆ. ರಾಜ್ಯದ ಸಂಪತ್ತಿಗೆ ಕನ್ನ ಹಾಕಿದ ಎಲ್ಲರಿಗೂ ಕೂಡ ತಕ್ಕ ಶಿಕ್ಷೆಯಾಗಬೇಕು. ಕಾಂಗ್ರೆಸಿಗರಿಗೆ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ಕಿಂಚಿತ್ತಾದರೂ ಗೌರವವಿದ್ದರೆ ಸಿಎಂ ರಾಜಿನಾಮೆ ಕೊಡಿಸಲಿ.
ಅದರೊಂದಿಗೆ ಬಾಂಗ್ಲಾ ಮಾದರಿಯಲ್ಲಿ ಗಲಭೆ ನಡೆಸುವುದಾಗಿ ಬೆದರಿಕೆ ಹಾಕಿದ್ದ ಕಾಂಗ್ರೆಸ್ ಮುಖಂಡ ಐವನ್ ಡಿ’ಸೋಜಾ ಅವರನ್ನು ಕೂಡ ತನಿಖೆ ಮಾಡಬೇಕು ಎಂದು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.