ರೈಲಿನಲ್ಲಿ ಬಾಲೆಯ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಸಜೆ

ರೈಲಿನಲ್ಲಿ ಬಾಲೆಯ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಸಜೆ

ಮಂಗಳೂರು: ನಗರದ ಸೆಂಟ್ರಲ್ ರೈಲು ನಿಲ್ದಾಣದಲ್ಲಿ ನಿಂತಿದ್ದ ರೈಲು ಬೋಗಿಯಲ್ಲಿ ಬಾಲಕಿಯನ್ನು ಅತ್ಯಾಚಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳದ ಇರ್ವತ್ತೂರು ಗ್ರಾಮದ ಅಬುತಾಹಿರ್ ಅಲಿಯಾಸ್ ಶಾಝಿಲ್ ಎಂಬಾತನಿಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಮತ್ತು ತ್ವರಿತಗತಿ ವಿಶೇಷ ನ್ಯಾಯಾಲಯ ಮತ್ತು ಪೋಕ್ಸೊ ವಿಶೇಷ ನ್ಯಾಯಾಲಯ (ಎಎಫ್.ಟಿ.ಎಸ್.ಸಿ-2) 20 ವರ್ಷ ಕಠಿಣ ಸಜೆ ಮತ್ತು 50 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

‘ಫೋನ್‌ನಲ್ಲಿ ಪರಿಚಯವಾಗಿದ್ದ ಅಬುತಾಹಿರ್ ಬಾಲಕಿಯನ್ನು ಪ್ರೀತಿಸುವುದಾಗಿ ನಂಬಿಸಿದ್ದ. 2023ರ ಜೂನ್ 22ರಂದು ಶಾಲೆಗೆ ತೆರಳುತ್ತಿದ್ದ ಬಾಲಕಿಯನ್ನು ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣಕ್ಕೆ ಕರೆತಂದು, ಪ್ಲಾಟ್ ಫಾರ್ಮ್ ನಂ 3ರಲ್ಲಿ ನಿಂತಿದ್ದ ಮಂಗಳೂರು-ಮಡಗಾಂವ್ ರೈಲಿನ ಬೋಗಿಯಲ್ಲಿ ರಾತ್ರಿ 11ರಿಂದ 12 ಗಂಟೆಯ ನಡುವೆ ಆಕೆ ಮೇಲೆ ಅತ್ಯಾಚಾರ ಮಾಡಿದ್ದ ಎಂದು ಆರೋಪಿಸಲಾಗಿತ್ತು.

ಬಾಲಕಿ ರಾತ್ರಿಯೇ ತಾಯಿಗೆ ಕರೆ ಮಾಡಿ ನಡೆದಿದ್ದನ್ನು ವಿವರಿಸಿದ್ದಳು. ಮಗಳು ಕಾಣೆಯಾದ ಬಗ್ಗೆ ತಾಯಿ ಪೊಲೀಸರಿಗೆ ದೂರು ನೀಡಿದ್ದರು. 

ರೈಲು ನಿಲ್ದಾಣದಲ್ಲಿ ಸಂತ್ರಸ್ತ ಬಾಲಕಿಯನ್ನು ರಕ್ಷಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. ಪುಂಜಾಲಕಟ್ಟೆ ಠಾಣೆಯ ಆಗಿನ ವೃತ್ತ ನಿರೀಕ್ಷಕ ಶಿವಕುಮಾರ್ ಬಿ. ಮತ್ತು ನಾಗೇಶ್ ಕೆ. ಪ್ರಕರಣದ ತನಿಖೆ ನಡೆಸಿ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. 

ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ (ಐಪಿಸಿ ಸೆಕ್ಷನ್ 376(3) ಮತ್ತು ಪೋಕ್ಸೊ ಸೆಕ್ಷನ್ 4(2)ರ ಅಡಿ 20 ವರ್ಷಗಳ ಕಾಲ ಕಠಿಣ ಶಿಕ್ಷೆ ಮತ್ತು 50 ಸಾವಿರ ರೂ. ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಮತ್ತು ಎಫ್.ಟಿ.ಎಸ್.ಸಿ-2 ಪೊಕ್ಸೊ ವಿಶೇಷ ನ್ಯಾಯಾಲಯದ ಜಿಲ್ಲಾ ನ್ಯಾಯಾಧೀಶ ಮಾನು ಕೆ. ಎಸ್. ಅವರು ಸೋಮವಾರ ಆದೇಶ ಮಾಡಿದ್ದಾರೆ. 

ಬಾಲಕಿಯನ್ನು ಅಪಹರಣ ನಡೆಸಿದ್ದಕ್ಕೆ ಐಪಿಸಿ ಸೆಕ್ಷನ್ 363ರಡಿ 3 ವರ್ಷ ಸಾದಾ ಶಿಕ್ಷೆ ಮತ್ತು ರೂ. 10 ಸಾವಿರ ದಂಡ ವಿಧಿಸಿದ್ದಾರೆ. ದಂಡದಲ್ಲಿ ರೂ. 50 ಸಾವಿರವನ್ನು ಸಂತ್ರಸ್ತ ಬಾಲಕಿಗೆ ಪಾವತಿಸುವಂತೆ ಆದೇಶ ನೀಡಿದ್ದಾರೆ. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರವು ಸಂತ್ರಸ್ತರ ಪರಿಹಾರ ಯೋಜನೆಯಡಿ ಹೆಚ್ಚುವರಿಯಾಗಿ ರೂ. 1.5 ಲಕ್ಷ ಪರಿಹಾರವನ್ನು ಸಂತ್ರಸ್ತೆಗೆ ನೀಡುವಂತೆ ನಿರ್ದೇಶನ ನೀಡಿದ್ದಾರೆ. ಸಂತ್ರಸ್ತೆಯ ಪರ ಸರಕಾರಿ ವಕೀಲ ಕೆ.ಬದರಿನಾಥ ನಾಯರಿ ವಾದಿಸಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article