ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಸಹಕಾರ: ಯು.ಟಿ. ಖಾದರ್
ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಸಂಬಂಧವಾಗಿ ಮಂಗಳೂರಿನ ವಕೀಲರು ಹಾಗೂ ಹೋರಾಟ ಸಮಿತಿಯವರ ಜತೆಯಲ್ಲಿ ಶೀಘ್ರದಲ್ಲಿ ಮುಖ್ಯಮಂತ್ರಿ, ಕಾನೂನು ಸಚಿವರು ಹಾಗೂ ಮುಖ್ಯ ಕಾರ್ಯದರ್ಶಿಯವರನ್ನು ಭೇಟಿಯಾಗಿ ಪ್ರಸ್ತಾವನೆ ಸಲ್ಲಿಸುವ ನಿಟ್ಟಿನಲ್ಲಿ ಸಹಕರಿಸುವುದಾಗಿ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಮಾಡಬೇಕೆಂಬ ಹಕ್ಕೊತ್ತಾಯದ ಭಾಗವಾಗಿ ಶುಕ್ರವಾರದಂದು ಹೋರಾಟ ಸಮಿತಿಯ ಪ್ರಮುಖರು ಶುಕ್ರವಾರದಂದು ಮನವಿ ಸಲ್ಲಿಸಿದ ಸಂದರ್ಭದಲ್ಲಿ ಮಾತನಾಡಿದ ಅವರು, ಹೋರಾಟಕ್ಕೆ ಪೂರ್ಣ ಬೆಂಬಲ ನೀಡುವುದಾಗಿ ಭರವಸೆ ನೀಡಿದರು.
ಹೋರಾಟ ಸಮಿತಿಯವರು ಶನಿವಾರದಂದು ಮಂಗಳೂರು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರನ್ನು ಕೂಡ ಭೇಟಿಯಾಗಿ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಂಸದರು ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ರಚನೆಗೆ ಪೂರಕವಾಗಿ ಎಲ್ಲ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಮಂಗಳೂರು ವಿವಿ ಕುಲಪತಿ ಪ್ರೊ. ಪಿ.ಎಲ್. ಧರ್ಮ, ಅಮುಕ್ತ್‌ನ ಪದಾಧಿಕಾರಿಗಳು ಹಾಗೂ ಕಾಲೇಜುಗಳಿಗೆ ಭೇಟಿಯಾಗಿ ಹೋರಾಟಕ್ಕೆ ಬೆಂಬಲ ಕೋರುವಂತೆ ಮನವಿ ಸಲ್ಲಿಸಲಾಯಿತು.
ಹೋರಾಟ ಸಮಿತಿಯ ಸಂಚಾಲಕ ವಿಧಾನಪರಿಷತ್ ಸದಸ್ಯ ಐವನ್ ಡಿ’ಸೋಜಾ, ಮಂಗಳೂರು ವಕೀಲರ ಸಂಘದ ಅಧ್ಯಕ್ಷ ಎಚ್.ವಿ.ರಾಘವೇಂದ್ರ, ಪ್ರಧಾನ ಕಾರ್ಯದರ್ಶಿ ಶ್ರೀಧರ ಎಚ್, ಕೋಶಾಧಿಕಾರಿ ಗಿರೀಶ್ ಶೆಟ್ಟಿ, ಮಾಜಿ ಅಧ್ಯಕ್ಷ ಪೃಥ್ವಿರಾಜ್ ರೈ, ಹಿರಿಯ ವಕೀಲ ಎಂ.ಪಿ.ನೊರೊನ್ಹಾ, ಜತೆ ಕಾರ್ಯದರ್ಶಿ ಜ್ಯೋತಿ, ಹಿರಿಯ ಸದಸ್ಯೆ ಸುಮನಾ ಶರಣ್ ಮೊದಲಾದವರಿದ್ದರು.