ಉಡುಪಿ ಜಿಲ್ಲೆಯಲ್ಲಿ 20 ಅಪಘಾತ ವಲಯ

ಉಡುಪಿ ಜಿಲ್ಲೆಯಲ್ಲಿ 20 ಅಪಘಾತ ವಲಯ


ಉಡುಪಿ: ಜಿಲ್ಲೆಯಲ್ಲಿ ರಸ್ತೆ ಅಪಘಾತವಾಗುವ ವಲಯಗಳನ್ನು ಗುರುತಿಸಿದ್ದು, ಆ ಸ್ಥಳಗಳಲ್ಲಿ ಅಪಘಾತವಾಗುವುದನ್ನು ತಡೆಗಟ್ಟಲು ಕೈಗೊಳ್ಳಬೇಕಾಗಿರುವ ವೈಜ್ಞಾನಿಕ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಕೈಗೊಂಡು ಅಪಘಾತ ಮುಕ್ತ ವಲಯಗಳನ್ನಾಗಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಸೂಚನೆ ನೀಡಿದರು.

ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ 2020ರಿಂದ 2022ರ ವರೆಗೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತವಾದ ಸ್ಥಳಗಳನ್ನು 20 ಬ್ಲ್ಯಾಕ್ ಸ್ಪಾಟ್‌ಗಳೆಂದು ಗುರುತಿಸಲಾಗಿದೆ. ಆ ಸ್ಥಳಗಳಲ್ಲಿ ಸುರಕ್ಷಿತಾ ನಿರ್ವಹಣೆ ಕಾಮಗಾರಿಗಳಾದ ಕಪ್ಪುಚುಕ್ಕೆ ಸ್ಥಳಗಳಲ್ಲಿ ಪಾದಚಾರಿಗಳ ಕ್ರಾಸಿಂಗ್ ಹಾಗೂ ಜೀಬ್ರಾ ಕ್ರಾಸಿಂಗ್, ಸೂಚನಾ ಫಲಕಗಳು, ಹೈಮಾಸ್ಟ್ ದೀಪಗಳು, ಬ್ಲಿಂಕರ‍್ಸ್, ರಸ್ತೆ ಬದಿಯಲ್ಲಿ ಮೆಟಲ್ ಕ್ರಾಸ್ ಬ್ಯಾರಿಯರ‍್ಸ್, ಹೆದ್ದಾರಿ ಸಂಪರ್ಕಿಸುವ ರಸ್ತೆಗಳಿಗೆ ಹಂಪ್ಸ್, ಫೂಟ್‌ಓವರ್ ಬ್ರಿಡ್ಜ್, ಕೆಲವು ಸ್ಥಳಗಳಲ್ಲಿ ಮಳೆಯ ನೀರು ಸರಾಗವಾಗಿ ಹರಿದು ಹೋಗಲು ಒಳಚರಂಡಿ, ಎಂ.ಎಸ್ ರೈಲಿಂಗ್ಸ್, ಕಾಮಗಾರಿ ಕೈಗೊಳ್ಳಲು ಆವಶ್ಯಕತೆಗಳಿದ್ದು, ಅವುಗಳನ್ನು ಆದ್ಯತೆಯ ಮೇಲೆ ಶೀಘ್ರವಾಗಿ ಕೈಗೊಳ್ಳಬೇಕು ಎಂದು ಸೂಚಿಸಿದರು.

ವಾಹನ ಸವಾರರು ಸಾರ್ವಜನಿಕ ರಸ್ತೆಯಲ್ಲಿ ಚಲಿಸುವಾಗ ತಪ್ಪದೇ ರಸ್ತೆ ಸುರಕ್ಷತಾ ನಿಯಮ ಪಾಲಿಸಿದಲ್ಲಿ ಹಾಗೂ ವೇಗಮಿತಿಯೊಳಗೆ ಸುಗಮವಾಗಿ ಸಂಚರಿಸಿದಲ್ಲಿ ಮಾತ್ರ ಅಪಘಾತ ತಪ್ಪಿಸಲು ಸಾಧ್ಯ. ಅದಕ್ಕೆ ಸಾರ್ವಜನಿಕರು ಹೆಚ್ಚಿನ ಆದ್ಯತೆ ನೀಡಬೇಕು ಎಂದರು.

ರಸ್ತೆಗಳಿಗೆ ಹಂಪ್‌ಗಳನ್ನು ಅಳವಡಿಸುವಾಗ ವೈಜ್ಞಾನಿಕ ಮೆಜರ್‌ಗಳನ್ನು ತೆಗೆದುಕೊಳ್ಳಬೇಕು ಎಂದ ಅವರು, ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಕೈಗೊಳ್ಳುವ ಮುನ್ನ ಜನರು ಹಾಗೂ ವಾಹನಗಳ ಸುಗಮ ಮತ್ತು ಸುರಕ್ಷಿತ ಸಂಚಾರಕ್ಕೆ ತಾತ್ಕಾಲಿಕವಾಗಿ ಪೂರಕ ರಸ್ತೆ ಕಾಮಗಾರಿ ಕೈಗೊಳ್ಳಬೇಕು ಎಂದರು.

ಕುಂದಾಪುರ ಘಟಕದಿಂದ ಹೊರಡುವ ಗ್ರಾಮೀಣ ಸಾರಿಗೆ ಕೆ.ಎಸ್.ಆರ್.ಟಿ.ಸಿ ಬಸ್ಸುಗಳು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಪ್ರಯಾಣಿಕರನ್ನು ಇಳಿಸಬಾರದು. ಬಸ್ ನಿಲ್ದಾಣದಲ್ಲಿಯೇ ಪ್ರಯಾಣಿಕರನ್ನು ಇಳಿಸುವಂತೆ ಕ್ರಮ ಕೈಗೊಳ್ಳಬೇಕು ಎಂದರು.

ವಿವಿಧ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಹೆಚ್ಚು ಅಪಘಾತ ಸಂಭವಿಸುವ ಸ್ಥಳಗಳಲ್ಲಿ ಅಗತ್ಯವಿರುವ ಸುರಕ್ಷತಾ ಕ್ರಮ ಕೈಗೊಳ್ಳಲು ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರ ಕ್ರಿಯಾ ಯೋಜನೆಯಡಿ ನೀಡಿರುವ ಅನುದಾನವನ್ನು ಸಮರ್ಪಕವಾಗಿ ಬಳಸುವುದರೊಂದಿಗೆ ಅಗತ್ಯ ಸುರಕ್ಷತಾ ಕ್ರಮ ಕೈಗೊಳ್ಳಬೇಕು ಎಂದು ನಗರಸಭೆ ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಅಬ್ದುಲ್ಲಾ ಮೊಹಮ್ಮದ್ ಅಜ್ಮಿ, ಲೋಕೋಪಯೋಗಿ ಇಲಾಖೆಯ ತಾಂತ್ರಿಕ ಸಹಾಯಕಿ ಜೆ.ಜಿ. ಶಾಂತಲಾ, ಪೌರಾಯುಕ್ತ ರಾಯಪ್ಪ, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ. ಮೊದಲಾದವರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article