
ಸ್ನೇಹಿತನ ಕತ್ತು ಕತ್ತರಿಸಿ ಭೀಕರ ಹತ್ಯೆ
ಉಡುಪಿ: ಕ್ಷುಲ್ಲಕ ಕಾರಣಕ್ಕಾಗಿ ತನ್ನ ಸ್ನೇಹಿತನ ಕತ್ತಿಗೆಗೆ ಚೂರಿಯಿಂದ ಇರಿದು ಭೀಕರವಾಗಿ ಹತ್ಯೆಗೈದಿರುವ ಘಟನೆ ನಗರದ ಹಳೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಬಳಿಯ ಕೃಷ್ಣಕೃಪಾ ಕಾಂಪ್ಲೆಕ್ಸ್‌ನ ನೆಲ ಅಂತಸ್ತಿನ ಕೊಠಡಿಯಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ.
ಕೊರಂಗ್ರಪಾಡಿಯ ಪ್ರಶಾಂತ್ ಶೆಟ್ಟಿ (32) ಎಂಬಾತ ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಆತನ ಸ್ನೇಹಿತ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ನಿವಾಸಿ ಈರಣ್ಣ ಯಾನೆ ದಿನೇಶ್ ಎಂಬಾತ ಕೊಲೆ ಮಾಡಿದಾತ.
ಮದ್ಯಪಾನ ಮಾಡಿಕೊಂಡಿದ್ದ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ವಿಕೋಪಕ್ಕೆ ಹೋಗಿದೆ. ಆರೋಪಿ ಈರಣ್ಣ ಹರಿತವಾದ ಚೂರಿಯಿಂದ ಪ್ರಶಾಂತನ ಕತ್ತಿಗೆ ಚಾಕುವಿನಿಂದ ಇರಿದಿದ್ದು, ಗಂಭೀರವಾಗಿ ಗಾಯಗೊಂಡ ಪ್ರಶಾಂತ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಕೊಲೆಗೈದ ಬಳಿಕ ಆರೋಪಿ ಖುದ್ದು ಪೊಲೀಸರಿಗೆ ಕರೆ ಮಾಡಿ, ಸ್ನೇಹಿತನನ್ನು ಕೊಲೆ ಮಾಡಿರುವುದಾಗಿ ಮಾಹಿತಿ ನೀಡಿದ್ದಾನೆ. ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದು, ಆರೋಪಿಯನ್ನು ನ್ಯಾಯಾಲಯದೆದುರು ಹಾಜರುಪಡಿಸಿರುವುದಾಗಿ ಎಸ್‌ಪಿ ಡಾ. ಅರುಣ್ ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಎಸ್ಪಿ ಡಾ. ಅರುಣ್ ಕೆ., ಎಎಸ್ಪಿ ಸಿದ್ದಲಿಂಗಪ್ಪ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೆರಳಚ್ಚು ತಜ್ಞರು ಸ್ಥಳಕ್ಕೆ ಭೇಟಿ ನೀಡಿದ್ದರು. ಸಮಾಜಸೇವಕ ನಿತ್ಯಾನಂದ ಒಳಕಾಡು ಜಿಲ್ಲಾಸ್ಪತ್ರೆಯ ವೈದ್ಯಕೀಯ ಪರೀಕ್ಷಾ ಕೇಂದ್ರಕ್ಕೆ ಪ್ರಶಾಂತ್ ಶವ ಸಾಗಿಸಲು ಇಲಾಖೆಗೆ ನೆರವು ನೀಡಿದರು.