ಪೌರಕಾರ್ಮಿಕರಿಗೆ ರೂ. 5 ಲಕ್ಷದ ಆರೋಗ್ಯ ವಿಮೆ: ಜಿಲ್ಲಾಧಿಕಾರಿ ಸೂಚನೆ

ಪೌರಕಾರ್ಮಿಕರಿಗೆ ರೂ. 5 ಲಕ್ಷದ ಆರೋಗ್ಯ ವಿಮೆ: ಜಿಲ್ಲಾಧಿಕಾರಿ ಸೂಚನೆ


ಮಂಗಳೂರು: ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಈಗಾಗಲೇ ನೀಡಿರುವ ಆರೋಗ್ಯ ವಿಮೆ ಕವರೇಜನ್ನು ರೂ. 5 ಲಕ್ಷಕ್ಕೆ ಏರಿಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ. ಸೂಚಿಸಿದ್ದಾರೆ.

ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ  ಸಫಾಯಿ ಕರ್ಮಚಾರಿ/ಮ್ಯಾನುವೆಲ್ ಸ್ಕ್ಯಾವೆಂಜರ್ ಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈಗಾಗಲೇ ಮಹಾನಗರಪಾಲಿಕೆಯ ನಿಧಿಯಿಂದ 708 ಮಂದಿ ಪೌರಕಾರ್ಮಿಕರು ಮತ್ತು ಅವರ ಅವಲಂಭಿತರಿಗೆ ಖಾಸಗಿ ವಿಮಾ ಕಂಪೆನಿ ಮೂಲಕ ರೂ. 3 ಲಕ್ಷದ ಆರೋಗ್ಯ ವಿಮೆ ನೀಡಲಾಗಿದೆ. ಈ ವಿಮಾ ಮೊತ್ತವು ಕಡಿಮೆಯಾಗಿದ್ದು, ಗಂಭೀರ ಖಾಯಿಲೆ ಚಿಕಿತ್ಸೆಗಳಿಗೆ ಸಾಕಾಗುವುದಿಲ್ಲ ಎಂದು ಪೌರಕಾರ್ಮಿಕರಿಂದ ಮನವಿಗಳು ಬಂದಿದ್ದು, ಈ ನಿಟ್ಟಿನಲ್ಲಿ ಮುಂದಿನ ಸಾಲಿನಿಂದ ಆರೋಗ್ಯ ವಿಮಾ ಮೊತ್ತವನ್ನು ರೂ. 5 ಲಕ್ಷಕ್ಕೆ ಏರಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.

ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ..

ಇದೇ ಸಂದರ್ಭದಲ್ಲಿ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ನಡೆಸಿದ ಜಿಲ್ಲಾಧಿಕಾರಿಗಳು, ಆಯಾ ಉಪವಿಭಾಗಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಪ್ರತೀ ತಿಂಗಳು ಕುಂದುಕೊರತೆ ಸಭೆ ನಡೆಸಬೇಕು ಎಂದು ಸೂಚಿಸಿದರು. 

ಅಪರ ಜಿಲ್ಲಾಧಿಕಾರಿ ಡಾ. ಜಿ. ಸಂತೋಷ್ ಕುಮಾರ್ ಮಾತನಾಡಿ, ಪರಿಶಿಷ್ಟ ಜಾತಿ ಮತ್ತು ಪಂಗಡದ ಅರ್ಹ ಕ್ರೀಡಾಪಟುಗಳಿಗೆ ಸೌಲಭ್ಯಗಳನ್ನು ಆಯಾ ಸ್ಥಳೀಯ ಸಂಸ್ಥೆಗಳು ತಮ್ಮ ಮೀಸಲು ನಿಧಿಯಲ್ಲಿ ಮಂಜೂರು ಮಾಡಬಹುದು ಎಂದು ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಹೇಮಲತಾ ಅವರು,  ಪ್ರಸಕ್ತ ಸಾಲಿನಲ್ಲಿ ಜನವರಿಯಿಂದ ನವೆಂಬರ್ 20ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 45 ದೌರ್ಜನ್ಯ ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 36 ಪ್ರಕರಣಗಳಲ್ಲಿ ರೂ. 34 ಲಕ್ಷ ಪರಿಹಾರ ಮಂಜೂರು ಮಾಡಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್, ಡಿಸಿಪಿ ಸಿದ್ಧಾರ್ಥ್ ಗೋಯಲ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಜೇಂದ್ರ, ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ್, ವಿವಿಧ ಇಲಾಖೆ ಅಧಿಕಾರಿಗಳು, ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರು, ಪೌರಕಾರ್ಮಿಕರ ಪ್ರತಿನಿಧಿಗಳು ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article