
'ಪಿಎಂ-ವಿದ್ಯಾಲಕ್ಷ್ಮಿ’ ಯೋಜನೆ: ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸು ನನಸು
ಮಂಗಳೂರು: ಕೇಂದ್ರ ಸರ್ಕಾರ ಪ್ರಾರಂಭಿಸುತ್ತಿರುವ ಹೊಸ ಪಿಎಂ-ವಿದ್ಯಾಲಕ್ಷ್ಮಿ ಯೋಜನೆಯು ಕರ್ನಾಟಕ ಸೇರಿದಂತೆ ದೇಶದೆಲ್ಲೆಡೆ ಆರ್ಥಿಕ ಸಮಸ್ಯೆಯಿಂದ ಉನ್ನತ ಶಿಕ್ಷಣ ಮುಂದುವರಿಸಲು ಸಾಧ್ಯವಾಗದ ಪ್ರತಿಭಾವಂತ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಬಹು ದೊಡ್ಡ ವರದಾನವಾಗಲಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಪಿಎಂ ವಿದ್ಯಾಲಕ್ಷ್ಮಿ ಎನ್ನುವ ಬಹಳ ಉಪಯುಕ್ತ ಯೋಜನೆಗೆ ಅನುಮೋದನೆ ನೀಡಿರುವುದಕ್ಕೆ ಹರ್ಷ ವ್ಯಕ್ತಪಡಿಸಿರುವ ಸಂಸದರು, "ಪ್ರಧಾನಮಂತ್ರಿ ವಿದ್ಯಾಲಕ್ಷ್ಮಿ ಯೋಜನೆ ರಾಷ್ಟ್ರೀಯ ಶಿಕ್ಷಣ ನೀತಿಯ ಮತ್ತೊಂದು ಪ್ರಮುಖ ಕೊಡುಗೆಯಾಗಿದೆ. ಈ ಯೋಜನೆಯಡಿ ಉನ್ನತ ಶಿಕ್ಷಣದ ಕನಸು ಕಾಣುತ್ತಿರುವ ಬಡ ಕುಟುಂಬಗಳ ಲಕ್ಷಾಂತರ ವಿದ್ಯಾರ್ಥಿಗಳಿಗೆ ಉನ್ನತ ಹಾಗೂ ಗುಣಮಟ್ಟದ ಶಿಕ್ಷಣ ಸಂಸ್ಥೆಗಳಲ್ಲಿ ಕಲಿಯುವುದಕ್ಕೆ ಸುಲಭ ಹಾಗೂ ತ್ವರಿತಗತಿಯಲ್ಲಿ ಹಣಕಾಸಿನ ನೆರವು ಲಭ್ಯವಾಗಲಿದೆ. ಆ ಮೂಲಕ ಪಿಎಂ ವಿದ್ಯಾಲಕ್ಷ್ಮಿ ಯೋಜನೆಯು ಪ್ರತಿವರ್ಷವೂ ಲಕ್ಷಾಂತರ ಬಡ ಮತ್ತು ಮಧ್ಯಮ ವರ್ಗದ ಪ್ರತಿಭಾವಂತ ವಿದ್ಯಾರ್ಥಿಗಳ ಕನಸು ನನಸಾಗಿಸುವುದರಲ್ಲಿ ಅನುಮಾನವೇ ಇಲ್ಲ" ಎಂದವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.