
ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪಿಗೆ ಜೈಲು ಶಿಕ್ಷೆ
ಪುತ್ತೂರು: 8 ವರ್ಷಗಳ ಹಿಂದೆ ಪುತ್ತೂರಿನಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದ ಆರೋಪಿಯ ಅಪರಾಧ ಸಾಬೀತಾಗಿದ್ದು, ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಅಬ್ದುಲ್ ರಹಿಮಾನ್ ಜೈಲು ಶಿಕ್ಷೆಗೆ ಒಳಗಾದ ಆರೋಪಿ.
2016ರ ನ.18ರಂದು ಆರೋಪಿಯು ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ನೀಡಲಾಗಿದ್ದ ದೂರಿನ ಅನ್ವಯ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿತ್ತು. ಆಗಿನ ಠಾಣಾ ಎಸ್‌ಐ ಆಗಿದ್ದ ಓಮನ ಎನ್.ಕೆ ಅವರು ಆರೋಪಿ ವಿರುದ್ದ ಪೋಕ್ಸೋ ಪ್ರಕರಣ ದಾಖಲಿಸಿ, ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆಯನ್ನು ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಸರಿತಾ ಡಿ ಅವರು ಕೈಗೆತ್ತಿಕೊಂಡು ಒಟ್ಟು 17 ಸಾಕ್ಷಿದಾರರನ್ನು ವಿಚಾರಿಸಿದ್ದರು. ಸರಕಾರಿ ಅಭಿಯೋಜಕರು ಮತ್ತು ಆರೋಪಿ ಪರ ವಾದ ಆಲಿಸಿದ ನ್ಯಾಯಾಧೀಶರು ಆರೋಪಿಯು ತಪ್ಪಿತಸ್ಥನೆಂದು ತೀರ್ಮಾನಿಸಿ ಆರೋಪಿಗೆ ಜೈಲು ಶಿಕ್ಷೆ ವಿಧಿಸಿದ್ದಾರೆ.
ಭಾ.ದಂ.ಸಂ ಕಲಂ 354(ಎ) ರಡಿ ಅಪರಾಧಕ್ಕೆ 3 ವರ್ಷ ಸಾದಾ ಶಿಕ್ಷೆ ಮತ್ತು ರೂ. 10 ಸಾವಿರ ದಂಡ, ದಂಡ ತೆರಲು ತಪ್ಪಿದಲ್ಲಿ 3 ತಿಂಗಳ ಸಾದಾ ಕಾರಾಗೃಹ ಶಿಕ್ಷೆ ವಿಧಿಸಲಾಗಿದೆ. ಪೋಕ್ಸೋ ಕಾಯ್ದೆಯ ಕಲಂ 10ರಡಿ 5 ವರ್ಷಗಳ ಸಾದಾ ಕಾರಾಗೃಹ ವಾಸ ಮತ್ತು ರೂ. 30 ಸಾವಿರ ದಂಡ ಮತ್ತು ದಂಡ ತೆರಲು ತಪ್ಪಿದಲ್ಲಿ 6 ತಿಂಗಳ ಸಾದಾ ಕಾರಾಗೃಹ ಶಿಕ್ಷೆ ವಿಧಿಸಲಾಗಿದೆ. ದಂಡದ ಮೊತ್ತದಲ್ಲಿ ರೂ. 30 ಸಾವಿರವನ್ನು ಬಾಲಕಿಗೆ ನೀಡುವಂತೆ ಮತ್ತು ದಂ.ಪ್ರ.ಸಂ ಕಲಂ 347ಎ ಮತ್ತು ಪೋಕ್ಸೋ ಕಾಯ್ದೆ ಕಲಂ 33(ಬಿ) ಹಾಗು ನಿಯಮ ೭ರಡಿ ದ.ಕ.ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ರೂ. 50ಸಾವಿರ ಪರಿಹಾರ ರೂಪವಾಗಿ ಬಾಲಕಿಗೆ ನೀಡುವಂತೆ ಆದೇಶಿಸಿದೆ. ಸರಕಾರದ ಪರವಾಗಿ ಪೋಕ್ಸೋ ವಿಶೇಷ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ಕುದ್ರಿಯ ಪುಷ್ಪರಾಜ ಅಡ್ಯಂತಾಯ ವಾದಿಸಿದರು.