ನಕ್ಸಲ್ ನಿಗ್ರಹ ರಾಜ್ಯ ಸರ್ಕಾರದ ನಿರ್ಧಾರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಉಡುಪಿ: ಈಚೆಗೆ ನಡೆದ ನಕ್ಸಲ್ ವಿಕ್ರಮ್ ಗೌಡ ಎನ್ಕೌಂಟರ್ ನಕಲಿ ಅಲ್ಲ. ಆ ಬಗ್ಗೆ ಅನುಮಾನ ಬೇಡ. ಈ ಕುರಿತು ನ್ಯಾಯಾಂಗ ತನಿಖೆ ಅಗತ್ಯ ಇಲ್ಲ. ಅಗತ್ಯವಿದ್ದರೆ ಮುಖ್ಯಮಂತ್ರಿ ಹಾಗೂ ಗೃಹಸಚಿವರೊಂದಿಗೆ ಚರ್ಚಿಸಲಾಗುವುದು. ಅಷ್ಟಕ್ಕೂ ನಕ್ಸಲ ನಿಗ್ರಹ ಕೇಂದ್ರ ಮತ್ತು ರಾಜ್ಯ ಸರ್ಕಾರದ ನಿರ್ಧಾರ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟಪಡಿಸಿದರು.
ಶನಿವಾರ ಇಲ್ಲಿನ ಗೃಹ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸರು ಕಾನೂನು ಚೌಕಟ್ಟಿನಲ್ಲಿ ಕ್ರಮ ಕೈಗೊಂಡಿದ್ದಾರೆ. ವಿಕ್ರಮ್ ಗೌಡ ವಿರುದ್ಧ ಹಲವು ಪ್ರಕರಣಗಳಿದ್ದು, ಆತನ ಬಳಿ ಶಸ್ತ್ರಾಸ್ತ್ರಗಳಿದ್ದವು. ಕೂಂಬಿಂಗ್ ಸಂದರ್ಭ ವಿಕ್ರಮ್ ಗೌಡ ಫೈರಿಂಗ್ ಮಾಡಿದ್ದರಿಂದ ಪೊಲೀಸರು ಪ್ರತಿದಾಳಿ ಮಾಡಿದ್ದರು ಎಂದರು.
ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಇಲ್ಲ:
ಕಾಂಗ್ರೆಸ್ನಲ್ಲಿ ಯಾವುದೇ ಭಿನ್ನಮತ ಇಲ್ಲ. ಭಿನ್ನಮತ ಇರುವುದು ಬಿಜೆಪಿಯಲ್ಲಿ ಮಾತ್ರ. ನಮ್ಮಲ್ಲಿ ಭಿನ್ನಮತ ಇಲ್ಲ ಎನ್ನುವುದಕ್ಕೆ ಉಪಚುನಾವಣೆಯ ಫಲಿತಾಂಶವೇ ಉತ್ತರ. ವಿರೋಧ ಪಕ್ಷದ ಒಳಗಿನ ಗಲಾಟೆ ನಮಗೆ ಅನುಕೂಲವಾಗುತ್ತದೆ. ಸಂಪುಟ ವಿಸ್ತರಣೆ ಬಗ್ಗೆಯೂ ಪಕ್ಷದಲ್ಲಿ ಚರ್ಚೆ ಆಗಿಲ್ಲ ಎಂದರು.
ಅನುದಾನ ಕಡಿತ ಇಲ್ಲ:
ವಿಭಿನ್ನ ಚೇತನ ಹಾಗೂ ಹಿರಿಯ ನಾಗರಿಕ ಇಲಾಖೆ ಅನುದಾನ ಕಡಿತ ಮಾಡಲಾಗಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವೆ ಹೆಬ್ಬಾಳ್ಕರ್, ನಮ್ಮ ಇಲಾಖೆ 32 ಸಾವಿರ ಕೋಟಿಗಿಂತ ಹೆಚ್ಚಿನ ಗಾತ್ರದ ಬಜೆಟ್ ಹೊಂದಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಭಿನ್ನಚೇತನರ ಯಾವುದೇ ಅನುದಾನ ಕಡಿತ ಮಾಡುವುದಿಲ್ಲ ಎಂದರು.
ರಾಜ್ಯದಲ್ಲಿ ಅಂಗನವಾಡಿಗೆ 50 ವರ್ಷದ ಇತಿಹಾಸವಿದೆ. 70 ಸಾವಿರ ಅಂಗನವಾಡಿಯಲ್ಲಿ 35 ಲಕ್ಷ ಮಕ್ಕಳ ಪಾಲನೆ ಮಾಡಲಾಗುತ್ತದೆ. ಅಂಗನವಾಡಿಗಳಲ್ಲಿ ಕಳಪೆ ಅಕ್ಕಿ ವಿತರಣೆ, ಆಹಾರ ನೀಡಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿನ ಬಾಣಂತಿ ಸಾವು ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದು, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.