
‘ಬಾಲಕನ ಚಿಕಿತ್ಸೆಗೆ ಎಕ್ಸಲೆಂಟ್ ನೆರವು’
ಮೂಡುಬಿದಿರೆ: ತೀವ್ರತರವಾದ ಆರೋಗ್ಯ ಸಮಸ್ಯೆಗೆ ಸಂಬಂಧಿಸಿದಂತೆ ಮಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸಾ ವಿಭಾಗಕ್ಕೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಸೃಜನ್ ಕುಕ್ಯಾನ್‌ನ ವೈದ್ಯಕೀಯ ಚಿಕಿತ್ಸೆಗೆ ಮೂಡುಬಿದಿರೆಯ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯು ಆರ್ಥಿಕ ಬೆಂಬಲವನ್ನು ನೀಡುವ ಮೂಲಕ ವಿದ್ಯಾರ್ಥಿಯ ಬದುಕಿಗೆ ನೆರವಾಗಿದೆ.
ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆ ಮೂಡುಬಿದಿರೆಯ 9ನೇ ತರಗತಿಯ ವಿದ್ಯಾರ್ಥಿ ಸೃಜನ್ ಕುಕ್ಯಾನ್ ಕಳೆದ ಕೆಲ ದಿನಗಳಿಂದ ತೀವ್ರತರವಾದ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದು ತುರ್ತು ಚಿಕಿತ್ಸಾ ವಿಭಾಗಕ್ಕೆ ದಾಖಲಾಗಿದ್ದ. ಹೆಚ್ಚಿನ ಚಿಕಿತ್ಸೆಯ ವೆಚ್ಚವನ್ನು ಭರಿಸಲು ಮಧ್ಯಮ ವರ್ಗದ ಬಾಲಕನ ಕುಟುಂಬ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದು ಈ ಹಿನ್ನಲೆಯಲ್ಲಿ ಆತನ ಕುಟುಂಬದ ಸದಸ್ಯರು ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಗೂ ಮನವಿ ಸಲ್ಲಿಸಿದ್ದರು.
ಈ ಮನವಿಗೆ ಕೂಡಲೇ ಸ್ಪಂದಿಸಿದ ಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್ ಹಾಗೂ ಕಾರ್ಯದರ್ಶಿ ರಶ್ಮಿತಾ ಜೈನ್ ಅವರು ಆರ್ಥಿಕ ಬೆಂಬಲವನ್ನು ನೀಡುವುದರ ಜೊತೆಗೆ ಸಂಸ್ಥೆಯ ಅಧ್ಯಾಪಕ ವೃಂದ ಹಾಗೂ ವಿದ್ಯಾರ್ಥಿಗಳ ಸಹಕಾರದೊಂದಿಗೆ 5 ಲಕ್ಷ ರೂ. ಮೊತ್ತವನ್ನು ಬಾಲಕನ ಕುಟುಂಬಕ್ಕೆ ಕ್ರಿಸ್‌ಮಸ್ ಡೇ ಕಾರ್ಯಕ್ರಮದ ಸಂದರ್ಭದಲ್ಲಿ ನೀಡುವ ಮೂಲಕ ಆತನ ಚಿಕಿತ್ಸೆಗೆ ನೆರವಾಗಿದ್ದಾರೆ.
ಈ ಮಹಾ ಕಾರ್ಯಕ್ಕೆ ಸಂಸ್ಥೆಯ ಅಧ್ಯಕ್ಷರು, ಕಾರ್ಯದರ್ಶಿಗಳು, ಅಧ್ಯಾಪಕ ವೃಂದ, ವಿದ್ಯಾರ್ಥಿಗಳು ಹಾಗೂ ಕೆಲವು ಪೋಷಕರು ಸಹಾಯಧನವನ್ನು ನೀಡಿದ್ದು ಎಲ್ಲೆಡೆ ಪ್ರಶಂಸೆಗೆ ಕಾರಣವಾಗಿದೆ. ಈ ಹಿಂದೆಯೂ ಕೂಡ ಎಕ್ಸಲೆಂಟ್ ಶಿಕ್ಷಣ ಸಂಸ್ಥೆ, ಇಬ್ಬರೂ ವಿದ್ಯಾರ್ಥಿನಿಯರ ಚಿಕಿತ್ಸೆಗೆ ಸಂಬಂಧಿಸಿದಂತೆ ಆರ್ಥಿಕ ಸಹಾಯ ಹಸ್ತವನ್ನು ನೀಡಿತ್ತು.