
ಶಕ್ತಿ ವಿದ್ಯಾಸಂಸ್ಥೆಯಲ್ಲಿ 76ನೇ ಗಣರಾಜ್ಯೋತ್ಸವ ದಿನಾಚರಣೆ
Sunday, January 26, 2025
ಮಂಗಳೂರು: ಶಕ್ತಿ ನಗರದ ಶಕ್ತಿ ವಿದ್ಯಾಸಂಸ್ಥೆಯಲ್ಲಿ ನಡೆದ 76ನೇ ಗಣರಾಜ್ಯೋತ್ಸವದ ಧ್ವಜಾರೋಹಣವನ್ನು ಸೂರಜ್ ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷ ಹಾಗೂ ರುಪ್ಸಾ ಕರ್ನಾಟಕ ರಾಜ್ಯ ಉಪಾಧ್ಯಕ್ಷ ಡಾ. ಮಂಜುನಾಥ್ ರೇವಣ್ಕರ್ ನೇರವೇರಿಸಿ, ಡಾ. ಬಿ.ಆರ್. ಅಂಬೇಡ್ಕರ್ ಮತ್ತು ಡಾ. ರಾಜೇಂದ್ರ ಪ್ರಸಾದ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.
ಬಳಿಕ ಅವರು ಮಾತನಾಡಿ, ಭಾರತ ನಮ್ಮ ತಾಯ್ನಾಡು. ನಮ್ಮನ್ನು ಹೆತ್ತ ತಾಯಿ ಬೇರೆ ಬೇರೆಯಾಗಿದ್ದರೂ ನಮ್ಮೆಲ್ಲರನ್ನು ಹೊತ್ತು ಬೆಳೆಸುವ ತಾಯಿ ಈ ಭಾರತ ಮಾತೆ. ಈ ದೇಶದ ಒಳಿತಿಗಾಗಿ ಶ್ರಮಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಪ್ರತಿಯೊಂದು ಮಗುವಿನಲ್ಲೂ ಒಂದು ಶಕ್ತಿ ಇದೆ. ಒಂದಲ್ಲ ಒಂದು ರೀತಿಯಲ್ಲಿ ಅದು ಅವನ ವ್ಯಕ್ತಿತ್ವದಲ್ಲಿ ತೋರುತ್ತದೆ. ಆ ಶಕ್ತಿಯೇ ಅವರನ್ನು ಮುಂದಕ್ಕೆ ಸಮಾಜದಲ್ಲಿ ಒಂದು ಸ್ಥಾನವನ್ನು ಗಳಿಸಲು ಪ್ರೇರೇಪಿಸುತ್ತದೆ ಎಂದರು.
ಈ ಸಂದರ್ಭದಲ್ಲಿ ಎಸ್‌ಜಿಎಫ್‌ಐಗೆ ಆಯ್ಕೆಯಾದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಸಂಸ್ಥಾಪಕ ಡಾ. ಕೆ.ಸಿ. ನಾಕ್ ವಹಿಸಿದರು. ಕಾರ್ಯಕ್ರಮದಲ್ಲಿ ಶಕ್ತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವೆಂಕಟೇಶ ಮೂರ್ತಿ, ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲೆ ಬಬಿತಾ ಸೂರಜ್ ಉಪಸ್ಥಿತರಿದ್ದರು. ಉಪನ್ಯಾಸಕಿ ಪ್ರಿಯಾಂಕ ರೈ ಅವರು ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.