
ಸಮಾಜದಲ್ಲಿ ಗೂಂಡಾಗಿರಿಯನ್ನು ಸಹಿಸುವ ಪ್ರಶ್ನೆಯೇ ಇಲ್ಲ: ದಿನೇಶ್ ಗುಂಡೂರಾವ್
ಮಂಗಳೂರು: ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಪೊಲೀಸ್ ಇಲಾಖೆಗೆ ಕಟ್ಟು ನಿಟ್ಟಿನ ಸೂಚನೆ ನೀಡಲಾಗಿದೆ. ಸಮಾಜದಲ್ಲಿ ಯಾವುದೇ ವರ್ಗದ ಗೂಂಡಾಗಿರಿಯನ್ನು ಸಹಿಸುವ ಪ್ರಶ್ನೆಯೇ ಇಲ್ಲ. ಸಮಾಜವೇ ಬಹಿಷ್ಕಾರ ಹಾಕಿದರಷ್ಟೇ ಇಂತಹ ದುಷ್ಟ ಶಕ್ತಿಗಳನ್ನು ನಿರ್ನಾಮ ಮಾಡಬಹುದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ನೆಹರೂ ಮೈದಾನದಲ್ಲಿ ರವಿವಾರ ದ.ಕ. ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಅವರು ಸಂದೇಶ ನೀಡಿದರು.
ಕಾನೂನು ಕೈಗೆತ್ತಿಕೊಳ್ಳುವ ಸಮಾಜಘಾತುಕರ ವಿರುದ್ಧ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು. ಜಿಲ್ಲೆಯ ಅಭಿವೃದ್ಧಿ, ಶಿಕ್ಷಣ ಮತ್ತು ಪ್ರವಾಸೋದ್ಯಮ ಬೆಳವಣಿಗೆಗೆ ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವುದು ಅಗತ್ಯ ಎಂಬ ಅಂಶವನ್ನು ಸಮಾಜದ ಎಲ್ಲಾ ವರ್ಗದ ಜನರು ಭಾವಿಸಬೇಕು ಎಂದು ಅವರು ಹೇಳಿದರು.
ಈಗಾಗಲೇ ಅಸ್ತಿತ್ವದಲ್ಲಿ ಜೀವ ಸಾರ್ಥಕತೆ ಅಂಗಕಸಿ ಯೋಜನೆ ವಿಸತರಣೆಗೆ ರಾಜ್ಯ ಸರಕಾರ ತೀರ್ಮಾನಿಸಿದ್ದು, ರಾಜ್ಯದ ಆದ್ಯತಾ ಮನೆ ಕಾಡು ಹೊಂದಿರುವವರಿಗೆ ಈ ಯೋಜನೆಯಡಿ ಹೃದಯ, ಶ್ವಾಸಕೋಶ ಮತ್ತು ಮೂಳೆ ಮಜ್ಜೆಯ ಕಸಿಯ ಸೌಲಭ್ಯವನ್ನು ವಿಸ್ತರಿಸಲು 30 ಕೋಟಿ ರೂ. ಒದಗಿಸಲು ತೀರ್ಮಾನಿಸಲಾಗಿದೆ. ಇದಕ್ಕಾಗಿ 15, 18 ಮತ್ತು 21 ಲಕ್ಷ ರೂ.ಗಳ ಮೂರು ಪ್ಯಾಕೇಜ್‌ಗಳಲ್ಲಿ ಅವಕಾಶ ಕಲಪಿಸಲಾಗಿದೆ ಎಂದು ರಾಜ್ಯದ ಆರೋಗ್ಯ ಸಚಿವರೂ ಆಗಿರುವ ದಿನೇಶ್ ಗುಂಡೂರಾವ್ ತಿಳಿಸಿದರು.
ರಾಜ್ಯದ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಸಮಗ್ರ ಮೂಲಭೂತ ಸೌಕರ್ಯ ಕಲ್ಪಿಸುವ ಉದ್ದೇಶದಿಂದ 2024-25೨೦ನೆ ಸಾಲಿನಲ್ಲಿ ಮಹಾತ್ಮಗಾಂಧಿ ನಗರ ವಿಕಾಸ ಯೋಜನೆಯಲ್ಲಿ ಒಟ್ಟು 165 ಕೋಟಿ ರೂ. ಅನುದಾನ ಮಂಗಳೂರು ಮಹಾನಗರ ಪಾಲಿಕೆಗೆ ಹಂಚಿಕೆ ಮಾಡಲಾಗಿದೆ. ಈ ಯೋಜನೆಯಲ್ಲಿ ಒಟ್ಟು 25 ಕಾಮಗಾರಿಗಳನ್ನು ಪ್ರಸ್ತಾವಿಸಲಾಗಿದ್ದು, ಕಾಮಗಾರಿಗಳ ಅಂದಾಜು ಪಟ್ಟಿ ತಯಾರಿಕೆ ಹಂತದಲ್ಲಿದೆ. ಶೀಘ್ರ ಕಾಮಗಾರಿ ಆರಂಭಿಸಲಾಗುವುದು ಎಂದು ಅವರು ಈ ಸಂದರ್ಭ ತಿಳಿಸಿದರು.
ಹಲವು ವರ್ಷಗಳ ಬಳಿಕ ನಡೆದ ಕರಾವಳಿ ಉತ್ಸವ ನಿರೀಕ್ಷೆಗೂ ಮೀರಿ ಜನರು, ಪ್ರವಾಸಿಗರು ಭಾಗವಹಿಸಲು ಅವಕಾಶ ಕಲ್ಪಿಸಿದೆ. ಸಾಂಸ್ಕೃತಿಕ ಕಾರ್ಯಕ್ರಮ, ವಸ್ತುಪ್ರದರ್ಶನ, ಯುವ ಉತ್ಸವ, ಶ್ವಾನ ಪ್ರದರ್ಶನ, ಕಲಾ ಪರ್ಬ, ಕಾರು ಮತ್ತು ಬೈಕ್‌ಗಳ ಪ್ರದರ್ಶನ, ಬೀಚ್ ಉತ್ಸವ, ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ಕಾರ್ಯಕ್ರಮಗಳು ಜಿಲ್ಲೆಯ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಿದೆ. ಈ ಎಲ್ಲಾ ಕಾರ್ಯಕ್ರಮಗಳನ್ನು ನಿರಂತರವಾಗಿ ಮುಂದುವರಿಸಲು ವಾರ್ಷಿಕ ಉತ್ಸವವಾಗಿ ನಿಗದಿಗೊಳಿಸಲು ಸರಕಾರ ನಿರ್ಧರಿಸಿದೆ ಎಂದು ಸಚಿವರು ಹೇಳಿದರು.
ಮಂಗಳೂರು ಉಡುಪಿಯಲ್ಲಿ ನಡೆದ ಕರ್ನಾಟಕ ಕ್ರೀಡಾಕೂಟವೂ ಯಶಸ್ಸು ಕಂಡಿದ್ದು, ನಗರದಲ್ಲಿ ನಿರ್ಮಾಣವಾಗುತ್ತಿರುವ ಒಳಾಂಗಣ ಕ್ರೀಡಾಂಗಣವನ್ನು ಶೀಘ್ರವೇ ಕ್ರೀಡಾಪಟುಗಳ ಬಳಕೆಗೆ ಸಮರ್ಪಿಸಲಾಗುವುದು. ನೆಹರೂ ಮೈದಾನದ ಫುಟ್‌ಬಾಲ್ ಮೈದಾನದಲ್ಲಿ ಉನ್ನತ ಸೌಲಭ್ಯಗಳನ್ನು ಒದಗಿಸಿ ಮೇಲ್ದರ್ಜೆಗೆ ಏರಿಸಲಾಗುವುದು ಎಂದು ಅವರು ತಿಳಿಸಿದರು.
ಪರಿಶಿಷ್ಟ ಜಾತಿ ಮತ್ತು ಪಂಗಡಗಳ ವಿದ್ಯಾರ್ಥಿಗಳಿಗೆ ಮಂಗಳೂರು, ಬಂಟ್ವಾಳ ಮತ್ತು ಬೆಳ್ತಂಗಡಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಿದ್ಯಾರ್ಥಿ ನಿಲಯ ನಿರ್ಮಾಣ ಕಾಮಗಾರಿಗಳು ಪ್ರಗತಿಯಲ್ಲಿವೆ. ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗಾಗಿ 4 ಹೊಸ ಹಾಸ್ಟೆಲ್‌ಗಳನ್ನು ಆರಂಭಿಸಲಾಗಿದ್ದು,ಇ ದರಲ್ಲಿ 400 ವಿದ್ಯಾರ್ಥಿಗಳು ಪ್ರಯೋಜನ ಪಡೆಯಲಿದ್ದಾರೆ. ಹಾಸ್ಟೆಲ್ ಸೀಟು ದೊರಕದ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆಯಡಿ ಪ್ರತಿ ತಿಂಗಳು ತಲಾ 1500 ರೂ.ನಂತೆ 10 ತಿಂಗಳಿಗೆ 15 ಸಾವಿರ ರೂ. ಒದಗಿಸಲಾಗುತ್ತಿದೆ. ಜಿಲ್ಲೆಯಲ್ಲಿ ಸೈನಿಕ ತರಬೇತಿ ಶಾಲೆ ನಡೆಯುತ್ತಿದ್ದು, ಪ್ರತಿವರ್ಷ 200 ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಈಗಾಗಲೇ ವಿವಿಧ ಸೇನಾ ಹುದ್ದೆಗಳಿಗೆ ಹಲವರು ಆಯ್ಕೆಯಾಗಿದ್ದಾರೆ ಎಂದು ಅವರು ವಿವರಿಸಿದರು.
ಪದ್ಮಶ್ರೀ ಹರೇಕಳ ಹಾಜಬ್ಬ, ಸಂಸದ ಬ್ರಜೇಶ್ ಚೌಟ, ಮೇಯರ್ ಮನೋಜ್ ಕುಮಾರ್, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ, ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರನಾಥ್ ಗಟ್ಟಿ, ಕೊಕಂಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಜೋಕಿಂ ಸ್ಟಾನ್ಲಿ ಅಲ್ವಾರಿಸ್, ಬ್ಯಾರಿ ಅಕಾಡೆಮಿ ಅಧ್ಯಕ್ಷ ಉಮರ್ ಯು.ಎಚ್., ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಎಂ.ಪಿ. ಶ್ರೀನಾಥ್, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್, ಜಿ.ಪಂ. ಸಿಇಒ ಡಾ. ಆನಂದ್ ಕೆ., ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್., ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್, ಪಾಲಿಕೆ ಆಯುಕ್ತ ರವಿಚಂದ್ರ ನಾಯಕ್ ಮೊದಲಾದವರು ಉಪಸ್ಥಿತರಿದ್ದರು.
ಈ ಸಂದರ್ಭ ನೆಹರೂ ಮೈದಾನದಲ್ಲಿ ಆಯೋಜಿಸಲಾದ ವಿಂಟೇಜ್ ಕಾರು, ಬೈಕ್‌ಗಳ ಪ್ರದರ್ಶನ, ರ‍್ಯಾಲಿಗೆ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು.