
ಫೆ.21-22 ರಂದು 27ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ ಮತ್ತು ಮಂಗಳೂರು ವಿಶ್ವವಿದ್ಯಾನಿಲಯದ ವತಿಯಿಂದ ಫೆ.21 ಮತ್ತು 22ರಂದು ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳಾ ಸಭಾಂಗಣದಲ್ಲಿ 27ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಎಂ.ಪಿ.ಶ್ರೀನಾಥ್ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಹಿತಿ ಡಾ. ಬಿ. ಪ್ರಭಾಕರ ಶಿಶಿಲ ಅವರ ಸರ್ವಾಧ್ಯಕ್ಷತೆಯಲ್ಲಿ ಸಮ್ಮೇಳನ ನಡೆಯಲಿದೆ. ಫೆ.21ರ ಬೆಳಿಗ್ಗೆ 8.45ಕ್ಕೆ ಅಸೈಗೋಳಿಯ ಕೇಂದ್ರ ಮೈದಾನದಿಂದ ಕನ್ನಡ ಸಾಂಸ್ಕೃತಿಕ ದಿಬ್ಬಣ ಹೊರಡಲಿದ್ದು, ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರು ಚಾಲನೆ ನೀಡಲಿದ್ದಾರೆ. ಬಳಿಕ 10 ಗಂಟೆಗೆ ನಡೆಯಲಿರುವ ಉದ್ಘಾಟನಾ ಸಮಾರಂಭದಲ್ಲಿ ವಿಧಾನ ಸಭಾ ಅಧ್ಯಕ್ಷ ಯು.ಟಿ.ಖಾದರ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತಿತರರು ಭಾಗವಹಿಸುವರು ಎಂದರು.
ಎರಡು ದಿನಗಳ ಕಾಲ ನಡೆಯಲಿರುವ ಈ ಸಮ್ಮೇಳನದಲ್ಲಿ ಒಟ್ಟು 18 ಕೃತಿಗಳು ಲೋಕಾರ್ಪಣೆಗೊಳ್ಳಲಿವೆ. 13 ಮಂದಿ ಸಾಧಕರಿಗೆ ಸನ್ಮಾನ ನೆರವೇರಲಿದೆ. ವಿವಿಧ ಸಾಹಿತ್ಯ ಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೂಡ ಜೋಡಿಸಲಾಗಿದೆ. ವಿದ್ಯಾರ್ಥಿಗಳು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಸಾಹಿತ್ಯಾಭಿಮಾನಿಗಳು ಸೇರುವಂತೆ ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ಶಾಲಾ ಕಾಲೇಜುಗಳಿಗೆ ವಿದ್ಯಾರ್ಥಿಗಳನ್ನು ಕಳುಹಿಸಿಕೊಡುವಂತೆ ಸಂಬಂಧಪಟ್ಟ ಅಧಿಕಾರಿಗಳ ಮೂಲಕ ಮನವಿ ಸೂಚಿಸಲಾಗಿದೆ ಎಂದವರು ತಿಳಿಸಿದರು.
ಸಮ್ಮೇಳ ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿ ಡಾ.ಧನಂಜಯ ಕುಂಬ್ಳೆ, ಕಾರ್ಯದರ್ಶಿ ರವೀಂದ್ರ ರೈ ಕಲ್ಲಿಮಾರ್, ಕೋಶಾಧಿಕಾರಿ ಚಂದ್ರಹಾಸ ಶೆಟ್ಟಿ, ಮಾಧ್ಯಮ ಸಮಿತಿ ಅಧ್ಯಕ್ಷ ವಸಂತ ಕೊಣಾಜೆ, ರೇಮಂಡ್ ಡಿ.ಕುನ್ಹಾ ತಾಕೊಡೆ ಉಪಸ್ಥಿತರಿದ್ದರು.