
ಬಿಸಿಗಾಳಿ: ಮುನ್ನೆಚ್ಚರಿಕೆ ವಹಿಸಲು ಸೂಚನೆ
ಮಂಗಳೂರು: ಭಾರತಿಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯಂತೆ ಕರಾವಳಿ ಜಿಲ್ಲೆಗಳಲ್ಲಿ ಅಧಿಕ ಉಷ್ಣಾಂಶ ದಾಖಲಾಗಿದ್ದು ಬಿಸಿಗಾಳಿ ಎಚ್ಚರಿಕೆ (ಹೀಟ್ ವೇವ್)ಯನ್ನು ನೀಡಲಾಗಿದೆ. ಜಿಲ್ಲೆಯಲ್ಲಿ ಪ್ರಸ್ತುತ 41 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಮುಂದಿನ ಎರಡು ದಿನ ಮುಂದುವರೆಯುವ ಮುನ್ಸೂಚನೆ ಇರುತ್ತದೆ. ಇದರಿಂದ ಹೀಟ್ ವೇವ್ ಸ್ಟ್ರೋಕ್ (ಶಾಖದ ಅಲೆ)ನಿಂದಾಗಿ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ತಿಳಿಸಿದ್ದಾರೆ.
ಸಲಹೆಗಳು..
ವಿಶೇಷವಾಗಿ ಮಧ್ಯಾಹ್ನ 12 ರಿಂದ 3 ರವರೆಗೆ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸಿ. ಹೆಚ್ಚಾಗಿ ಬಾಯಾರಿಕೆ ಇಲ್ಲದಿದ್ದರೂ ಸಹ ಸಾಕಷ್ಟು ನೀರು ಕುಡಿಯಬೇಕು. ಸಾಧ್ಯವಾದಷ್ಟು ಹಗುರವಾದ, ತಿಳಿ ಬಣ್ಣದ, ಸಡಿಲವಾದ ಮತ್ತು ರಂಧ್ರವಿರುವ ಹತ್ತಿ ಬಟ್ಟೆಗಳನ್ನು ಧರಿಸಬೇಕು. ಬಿಸಿಲಿನಲ್ಲಿ ಹೋಗುವಾಗ ರಕ್ಷಣಾತ್ಮಕ ಕನ್ನಡಕಗಳು, ಛತ್ರಿ/ ಟೋಪಿ, ಬೂಟುಗಳು ಅಥವಾ ಚಪ್ಪಲ್ಗಳನ್ನು ಬಳಸಬೇಕು. ಹೊರಗಿನ ತಾಪಮಾನ ಹೆಚ್ಚಿರುವಾಗ ಶ್ರಮದಾಯಕ ಚಟುವಟಿಕೆಗಳನ್ನು ತಪ್ಪಿಸಿ. ಮಧ್ಯಾಹ್ನ 12 ರಿಂದ 3 ಗಂಟೆಯವರೆಗೆ ಹೊರಗೆ ಕೆಲಸ ಮಾಡುವುದನ್ನು ತಪ್ಪಿಸಿ. ದೇಹವನ್ನು ನಿರ್ಜಲೀಕರಣಗೊಳಿಸುವ ಆಲ್ಕೋಹಾಲ್, ಚಹಾ, ಕಾಫಿ ಮತ್ತು ಕಾರ್ಬೋನೇಟೆಡ್ ತಂಪು ಪಾನೀಯಗಳನ್ನು ತಪ್ಪಿಸಿ. ಹಳೆಯ ಆಹಾರ ಮತ್ತು ಹೆಚ್ಚಿನ ಪ್ರೋಟೀನ್ ಹೊಂದಿರುವ ಆಹಾರವನ್ನು ತಪ್ಪಿಸಿ. ನಿಲ್ಲಿಸಿದ ವಾಹನಗಳಲ್ಲಿ ಮಕ್ಕಳನ್ನು ಅಥವಾ ಸಾಕುಪ್ರಾಣಿಗಳನ್ನು ಬಿಡಬೇಡಿ. ನಿಮಗೆ ಮೂರ್ಚೆ ಅಥವಾ ಅನಾರೋಗ್ಯ ಅನಿಸಿದರೆ, ತಕ್ಷಣ ವೈದ್ಯರನ್ನು ಭೇಟಿ ಮಾಡುವಂತೆ ಸೂಚಿಸಲಾಗಿದೆ.