
ವಿದ್ಯಾರ್ಥಿಗಳಿಗೆ ಸಸ್ಯಶಾಸ್ತ್ರದ ಅರಿವು ಮೂಡಿಸುವುದು ಅಗತ್ಯ: ಪ್ರೊ. ಕವಿತಾ ಕೆ.ಆರ್.
ಮಂಗಳೂರು: ವಿದ್ಯಾರ್ಥಿಗಳಿಗೆ ಸಸ್ಯಗಳ ಕುರಿತಾದ ಜ್ಞಾನದ ಅವಶ್ಯಕತೆ ಇದೆ. ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಸಸ್ಯಶಾಸ್ತ್ರ ವಿಭಾಗದ ಕಡೆಗೆ ಹೆಚ್ಚಿನ ಗಮನ ನೀಡುತ್ತಿಲ್ಲ. ಇದಕ್ಕೆ ಕಾರಣವಾದ ಅಂಶಗಳನ್ನು ಗುರುತಿಸಿ ಸೂಕ್ತ ಮಾರ್ಗದರ್ಶನದೊಂದಿಗೆ ವಿದ್ಯಾರ್ಥಿಗಳಿಗೆ ಹೆಚ್ಚಿನ ಅರಿವು ಮೂಡಿಸಬೇಕಾಗಿದೆ ಎಂದು ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕಿ ಪ್ರೊ. ಕವಿತಾ ಕೆ.ಆರ್. ಹೇಳಿದರು.
ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಸಸ್ಯಶಾಸ್ತ್ರ ವಿಭಾಗದ ವತಿಯಿಂದ ನಡೆದ ರಾಜ್ಯ ಶಿಕ್ಷಣ ನೀತಿಯ ಸಸ್ಯಶಾಸ್ತ್ರ ಪಠ್ಯಕ್ರಮ ಕುರಿತ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದರು.
ಕೃತಕ ಬುದ್ಧಿಮತ್ತೆ ಜ್ಞಾನವಿಲ್ಲದೇ ಕೆಲಸ ಕೌಶಲ್ಯ ಆಧಾರಿತವಾಗಿ ಕೆಲಸ ನಿರ್ವಹಿಸುತ್ತದೆ. ಆದರೆ, ಇದು ಉದ್ಯೋಗಕ್ಕೆ ಅಡ್ಡಿ ಉಂಟು ಮಾಡಿ ನಿರುದ್ಯೋಗಿತನಕ್ಕೆ ಕಾರಣವಾಗುತ್ತಿದೆ. ಆದರೆ ಇಂದಿನ ವಿದ್ಯಾರ್ಥಿಗಳು ಸಸ್ಯಶಾಸ್ತ್ರವನ್ನು ವೈಜ್ಞಾನಿಕ ಹಾಗೂ ವ್ಯವಸ್ಥಿತವಾಗಿ ಅಧ್ಯಯನ ಮಾಡುವ ಮೂಲಕ ವಿದ್ಯಾರ್ಥಿಗಳು ಶೈಕ್ಷಣಿಕ ಕ್ಷೇತ್ರಕ್ಕೆ ಕೊಡುಗೆ ನೀಡಬೇಕು ಎಂದು ಸಲಹೆ ನೀಡಿದರು.
ಮಂಗಳೂರು ವಿಶ್ವವಿದ್ಯಾನಿಲಯ ಸಸ್ಯಶಾಸ್ತ್ರ ಅಧ್ಯಾಪಕರ ಸಂಘ ವನಶ್ರೀ ಅಧ್ಯಕ್ಷ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಕುಮಾರ ಹೆಗ್ಡೆ ಬಿ.ಎ., ಸಸ್ಯಶಾಸ್ತ್ರ ಅಧ್ಯಯನಕ್ಕೆ ಹೆಚ್ಚಿನ ಉತ್ತೇಜನ ನೀಡಿ ವಿದ್ಯಾರ್ಥಿಗಳ ಪಠ್ಯಕ್ಕೆ ಪೂರಕವಾದ ಯೋಜನಾ ಕಾರ್ಯ ಹಾಗೂ ಶೈಕ್ಷಣಿಕ ಅಧ್ಯಯನ ಪ್ರವಾಸ ಹಮ್ಮಿಕೊಳ್ಳುವ ಮೂಲಕ ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಶ್ವವಿದ್ಯಾನಿಲಯ ಕಾಲೇಜಿನ ಪ್ರಾಂಶುಪಾಲ ಪ್ರೊ. ಗಣಪತಿ ಗೌಡ ವಹಿಸಿಕೊಂಡಿದ್ದರು. ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಪ್ರೊ. ಶೋಭಾ, ಸಹಾಯಕ ಪ್ರಾಧ್ಯಾಪಕ ಡಾ. ಸಿದ್ಧರಾಜು ಎಂ.ಎನ್., ವನಶ್ರೀ ಸಂಘದ ಕಾರ್ಯದರ್ಶಿ ಡಾ. ವಿನಾಯಕ ಕೆ.ಎಸ್. ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.