
ಯುವಕನ ಕೊಲೆ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ
Tuesday, April 29, 2025
ಮಂಗಳೂರು: ಮಂಗಳೂರಿನ ಹೊರವಲಯದ ಕುಡುಪು ಬಳಿ ಯುವಕನನ್ನು ಕಲ್ಲಿನಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಅಂತ್ಯಂತ ಖಂಡನೀಯ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಸಚಿವ ದಿನೇಶ್ ಗುಂಡೂರಾವ್, ಕ್ರಿಕೆಟ್ ಆಟ ಆಡುವ ವೇಳೆ ಆಟಗಾರರ ಗುಂಪು ಹಾಗೂ ಅನ್ಯ ಕೋಮಿನ ಯುವಕನ ನಡುವೆ ಪರಸ್ಪರ ಮಾತಿನ ಚಕಮಕಿ ನಡೆದು, ಯುವಕನ ಮೇಲೆ ಹಲ್ಲೆಮಾಡಲಾಗಿದೆ. ಈ ರೀತಿಯ ಘಟನೆಗಳು ಕೋಮು ವೈಷಮ್ಯವನ್ನು ಬೀರುತ್ತವೆ. ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ನಾನು ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.
ಈಗಾಗಲೇ ಪ್ರಕರಣ ಕುರಿತು ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಸೂಕ್ತ ತನಿಖೆ ನಡೆಸಲಾಗುತ್ತಿದೆ. ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡದೆ ಕೋಮುಸೌಹಾರ್ಧತೆ ಹಾಗೂ ಶಾಂತಿ ಕಾಪಾಡುವಂತೆ ನಾನು ಮನವಿ ಮಾಡುತ್ತೇನೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.