
ಎನ್‌ಐಎ ಕಚೇರಿಯನ್ನು ಮಂಗಳೂರಿನಲ್ಲಿ ಸ್ಥಾಪಿಸಬೇಕು: ಅನುಪಮಾ ಶೆಣೈ
Wednesday, April 30, 2025
ಮಂಗಳೂರು: ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಕಚೇರಿಯನ್ನು ಮಂಗಳೂರಿನಲ್ಲಿ ಸ್ಥಾಪಿಸಬೇಕು ಎಂದು ಮಾಜಿ ಡಿವೈಎಸ್‌ಪಿ, ಭಾರತೀಯ ಜನಶಕ್ತಿ ಕಾಂಗ್ರೆಸ್ ಅಧ್ಯಕ್ಷೆ ಅನುಪಮಾ ಶೆಣೈ ಒತ್ತಾಯಿಸಿದ್ದಾರೆ.
ಸ್ಪೀಕರ್ ಯು.ಟಿ. ಖಾದರ್ ಅವರಿಗೆ ನಿಷೇಧಿತ ಪಿಎಫ್‌ಐ ಸಂಘಟನೆಯ ಬೆದರಿಕೆ ಇದೆ. ನಿವೃತ್ತ ಡಿಜಿಪಿ ಓಂ ಪ್ರಕಾಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಖಾದರ್ ಅವರಿಗೆ ಬೆದರಿಕೆ ಹಾಕಲಾಗಿದೆ. ಈ ಹಿನ್ನೆಲೆಯಲ್ಲಿ ಖಾದರ್ ಅವರು ಎಚ್ಚರದಿಂದ ಇರಬೇಕಾಗಿದೆ. ಓಂ ಪ್ರಕಾಶ್ ಕೊಲೆ ಪ್ರಕರಣದ ತನಿಖೆಯನ್ನು ಎನ್‌ಐಎಗೆ ವಹಿಸಬೇಕು, ಈ ಬಗ್ಗೆ ಪ್ರತಿಪಕ್ಷದ ಸದಸ್ಯರು ಸರಕಾರದ ಮೇಲೆ ಒತ್ತಡ ಹೇರಬೇಕು ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಅವರು ಹೇಳಿದರು.
ಸ್ಪೀಕರ್ ಅವರಿಗೆ ಬೆದರಿಕೆ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹ್ಯೂಬ್ಲೋಟ್ ವಾಚ್ ಸಂಬಂಧಿಸಿ ಸ್ಪೀಕರ್ ಅವರಿಗೆ ಮತ್ತೊಂದು ಪತ್ರ ಬರೆದಿದ್ದೇನೆ. ಪತ್ರದಲ್ಲಿ ನಾನು ಪ್ರಸ್ತಾಪಿಸಿರುವ ವಿಷಯಕ್ಕೆ ಸಂಬಂಧಿಸಿ ಸ್ಪೀಕರ್ ಅವರು ನನಗೆ ಉತ್ತರ ನೀಡಬೇಕು. ವಾಚ್ ಪ್ರಕರಣಕ್ಕೆ ಸಂಬಂಧಿಸಿ ಇಡಿಗೆ ಸಲ್ಲಿಕೆಯಾಗಿರುವ ದೂರಿನ ಸ್ಥಿತಿ ಏನಾಗಿದೆ ಎಂಬ ಬಗ್ಗೆ ಮಾಹಿತಿ ನೀಡಬೇಕು ಎಂದು ಒತ್ತಾಯಿಸಿದರು.