
ನದಿಯಂತಾದ ಸೂರಿಕುಮೇರ್
ಬಂಟ್ವಾಳ: ಭಾನುವಾರ ಸುರಿದ ಧಾರಕಾರ ಮಳೆಯಿಂದಾಗಿ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರು ಜಂಕ್ಷನ್ ಕೃತಕ ನದಿಯಂತಾದ ಪರಿಣಾಮ ಸಂಚಾರ ಅಸ್ತವ್ಯಸ್ತಗೊಂಡಿತು.
ಮಳೆ ನೀರು ಹರಿದು ಹೋಗಲು ಚರಂಡಿ ವ್ಯವಸ್ಥೆ ಇಲ್ಲದಿರುವುದರಿಂದ ಸೂರಿಕುಮೇರು ರಸ್ತೆಯಲ್ಲಿ ನೀರು ಹರಿಯುತ್ತಿದ್ದು ವಾಹನ ಸವಾರರು ಸಂಚಾರಕ್ಕೆ ಪರದಾಡುವಂತಾಯಿತು.
ಬೆಳಗ್ಗೆ ಸುಮಾರು 12 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಕೂಡ ಇದೇ ಸ್ಥಿತಿಯಲ್ಲಿ ಕಂಡು ಬಂದಿದ್ದು, ಸಂಜೆ ವೇಳೆ ಚರಂಡಿಯ ಹೂಳೆತ್ತುವ ಕಾರ್ಯ ಕೈಗೆತ್ತಿಕೊಂಡರು.
ಗುತ್ತಿಗೆ ಸಂಸ್ಥೆಯ ನಿರ್ಲಕ್ಷ್ಯ ತನದ ಕಾಮಗಾರಿಯಿಂದಾಗಿ ರಸ್ತೆ ಸಹಿತ ಮನೆಗಳಿಗೆ ಮಳೆ ನೀರು ನುಗ್ಗುವಂತಾಗಿದೆ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದೆ.
ಈ ನಡುವೆ ವಿಟ್ಲ-ಸಾಲೆತ್ತೂರು ರಸ್ತೆಯ ಕಾಡುಮಠ ಬಳಿಯ ಅಳ್ಳಿಗಂಡೆ ಎಂಬಲ್ಲಿ ಗುಡ್ಡವೊಂದು ಕುಸಿದು ವಿದ್ಯುತ್ ಕಂಬಗಳಿಗೆ ಹಾನಿಯಾದ ಘಟನೆ ನಡೆದಿದೆ.
ರಸ್ತೆ ಬದಿಯಲ್ಲಿನ ವಿದ್ಯುತ್ ಕಂಬಗಳ ಮೇಲೆ ಮರಗಳು ಉರುಳಿಬಿದ್ದ ಪರಿಣಾಮ ವಿದ್ಯುತ್ ಕಂಬಗಳು ನೆಲಕ್ಕುರುಳಿದೆ. ಘಟನೆ ಬಗ್ಗೆ ಮಾಹಿತಿ ಅರಿತ ಅಗ್ನಿಶಾಮಕ, ಮೆಸ್ಕಾಂ ಇಲಾಖೆಯ ಸಿಬ್ಬಂದಿಗಳು ಹಾಗೂ ವಿಟ್ಲ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಸ್ಥಳೀಯರ ಸಹಕಾರದೊಂದಿಗೆ ತಾತ್ಕಾಲಿಕ ಪರಿಹಾರ ಕೈಗೊಂಡಿದ್ದಾರೆ.
ವಿಟ್ಲ ಕಂದಾಯ ನಿರೀಕ್ಷಕರು, ಕೊಳ್ನಾಡು ಗ್ರಾಮ ಆಡಳಿತಾಧಿಕಾರಿ ಹಾಗೂ ಸಾಲೆತ್ತೂರು ಮೆಸ್ಕಾಂ ಅಧಿಕಾರಿ, ಸಿಬ್ಬಂದಿಗಳು ತೆರವು ಕಾರ್ಯಾಚರಣೆ ನಡೆಸಿ ವಾಹನಗಳ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿದ್ದಾರೆ.