
ಸರ್ಕಾರಿ ಶಾಲೆ ಉಳಿವಿಗಾಗಿ ಆಂಗ್ಲ ಮಾಧ್ಯಮ ಆರಂಭ: ಸಚಿವ ರಾಮಲಿಂಗ ರೆಡ್ಡಿ
ಕುಂದಾಪುರ: ಇಂಗ್ಲೀಷ್ ವ್ಯಾಮೋಹದಿಂದ ಹಾಗೂ ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ಪಡೆದರೆ ಮಕ್ಕಳ ಭವಿಷ್ಯ ಚೆನ್ನಾಗಿರುತ್ತದೆ ಎಂಬ ನಂಬಿಕೆಯಿಂದ ಪೋಷಕರು ಆಂಗ್ಲ ಮಾಧ್ಯಮ ಶಾಲೆಗಳಿಗೆ ಮಕ್ಕಳನ್ನು ದಾಖಲು ಮಾಡುತ್ತಿದ್ದಾರೆ. ಹೀಗಾಗಿ ಸರಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದೆ. ಸರ್ಕಾರ ಈ ದೃಷ್ಟಿಯಿಂದ ಸರಕಾರಿ ಶಾಲೆಗಳಲ್ಲೂ ಕೂಡ ಆಂಗ್ಲ ಮಾಧ್ಯಮ ಪ್ರಾರಂಭಿಸಿದೆ ಎಂದು ಕರ್ನಾಟಕ ಸರ್ಕಾರದ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಹೇಳಿದರು.
ಗೋಪಾಡಿ ಶ್ರೀನಿವಾಸ ರುಕ್ಮಿಣಿ ಫೌಂಡೇಶನ್ ಮತ್ತು ಕರ್ನಾಟಕ ಪಬ್ಲಿಕ್ ಸ್ಕೂಲ್ ಕೋಟೇಶ್ವರ ಪ್ರಾಥಮಿಕ ವಿಭಾಗ ಶತಮಾನೋತ್ಸವ ಸಮಿತಿ ಜಂಟಿಯಾಗಿ ಕೋಟೇಶ್ವರದ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಸುಮಾರು 25 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ ಸುಸಜ್ಜಿತವಾದ ಮತ್ತು ಆಧುನಿಕ ಸೌಲಭ್ಯಗಳನ್ನು ಒಳಗೊಂಡ ‘ಗೋಪಾಡಿ ರುಕ್ಮಿಣಿ ಶ್ರೀನಿವಾಸ ರಂಗ ಮಂಟಪ’ವನ್ನು ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು.
ಮೂಲಭೂತ ಸೌಕರ್ಯ ಹಾಗೂ ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳಿಗೆ ಅತಿಥಿ ಶಿಕ್ಷಕರನ್ನು ನೀಡುವ ಪ್ರಯತ್ನ ನಡೆಯಬೇಕು. ಚುನಾಯಿತ ಜನಪ್ರತಿನಿಧಿಗಳ ಜೊತೆಗೆ ಸಾರ್ವಜನಿಕರು ಅಗತ್ಯವಾಗಿ ಸಹಕಾರ ನೀಡಬೇಕು. ಬೇರೆ ಬೇರೆ ನಗರಗಳಲ್ಲಿ ಹೋಗಿ ವಾಸ ಮಾಡಿಕೊಂಡಿರುವವರು ತಮ್ಮ ಊರಿನ ಶಾಲೆಗಳನ್ನು ಅಭಿವೃದ್ಧಿ ಮಾಡಿದರೆ ಶಿಕ್ಷಣದ ಗುಣಮಟ್ಟ ಹಾಗೂ ವಿದ್ಯಾರ್ಥಿಗಳ ಸಂಖ್ಯೆ ಕೂಡ ಹೆಚ್ಚಾಗುತ್ತದೆ. ಸಾರ್ವಜನಿಕರು ಮನಸ್ಸು ಮಾಡಿದರೆ ಸರಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಲು ಸಾಧ್ಯ ಎಂದು ಅವರು ಹೇಳಿದರು.
ಶ್ರೀ ಸೋದೆ ವಾದಿರಾಜ ಮಠಾಧೀಶ ಶ್ರೀ ವಿಶ್ವವಲ್ಲಭ ತೀರ್ಥ ಸ್ವಾಮೀಜಿಯವರು ಆಶೀರ್ವಚನ ನೀಡಿದರು.
ಕುಂದಾಪುರ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭ ಗೋಪಾಡಿ ರುಕ್ಮಿಣಿ ಶ್ರೀನಿವಾಸ ರಂಗ ಮಂಟಪವನ್ನು ನಿರ್ಮಿಸಿಕೊಟ್ಟ ಗೋಪಾಡಿ ಶ್ರೀನಿವಾಸ ರಾವ್ ದಂಪತಿ ಹಾಗೂ ಸಚಿವ ರಾಮಲಿಂಗ ರೆಡ್ಡಿ ಅವರನ್ನು ಶಾಲೆಯ ಶತಮಾನೋತ್ಸವ ಸಮಿತಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಕೋಟೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷೆ ರಾಗಿಣಿ ದೇವಾಡಿಗ, ಗೋಪಾಡಿ ಶ್ರೀನಿವಾಸ ರುಕ್ಮಿಣಿ ಫೌಂಡೇಶನ್ ಗೋಪಾಡಿ ಸಂಸ್ಥಾಪಕ ಗೋಪಾಡಿ ಶ್ರೀನಿವಾಸ ರಾವ್, ಟ್ರಸ್ಟ್ ಅಧ್ಯಕ್ಷೆ ರುಕ್ಮಿಣಿ ಜಿ., ಕರ್ನಾಟಕ ಪಬ್ಲಿಕ್ ಸ್ಕೂಲ್ ಕೋಟೇಶ್ವರ ಶತಮಾನೋತ್ಸವ ಸಮಿತಿ ಅಧ್ಯಕ್ಷ ಶ್ರೀಧರ ವಿಠಲ ಕಾಮತ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜೇಶ ಉಡುಪ, ಮಾಜಿ ಸಚಿವರಾದ ಅಭಯಚಂದ್ರ ಜೈನ್, ವಿನಯಕುಮಾರ್ ಸೊರಕೆ, ಸಮಾಜ ಸೇವಕ ದಿನೇಶ್ ಹೆಗ್ಡೆ ಮೊಳಹಳ್ಳಿ, ಮುನಿಯಾಲು ಉದಯ ಕುಮಾರ್ ಶೆಟ್ಟಿ, ಪ್ರಸಾದ್ ರಾಜ್ ಕಾಂಚನ್, ಕುಂದಾಪುರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಶೆಟ್ಟಿ, ಅಶೋಕ ಕಾಮತ್ ಮತ್ತಿತರರು ಉಪಸ್ಥಿತರಿದ್ದರು.