
ಸುಹಾಸ್ ಶೆಟ್ಟಿ ಕೊಲೆ: ಆರೋಪಿಗಳು ಎನ್‌ಐಎ ಕಸ್ಟಡಿಗೆ
Tuesday, June 24, 2025
ಮಂಗಳೂರು: ಬಜ್ಪೆ ಬಳಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ 8 ಮಂದಿ ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಕಸ್ಟಡಿಗೆ ನೀಡಿದೆ. ಪ್ರಕರಣ ಸಂಬಂಧ ಎನ್‌ಐಎ ಪ್ರತ್ಯೇಕವಾಗಿ ಎಫ್‌ಐಆರ್ ದಾಖಲಿಸಿದೆ. ಹೆಚ್ಚಿನ ತನಿಖೆಗಾಗಿ ಆರೋಪಿಗಳನ್ನು ತಮ್ಮ ವಶಕ್ಕೆ ನೀಡುವಂತೆ ಎನ್‌ಐಎ ಎಸ್ಪಿಪಿ ಪ್ರಸನ್ನ ಕುಮಾರ್ ಮನವಿ ಮಾಡಿದರು. ಮನವಿ ಪುರಸ್ಕರಿಸಿದ ಬೆಂಗಳೂರಿನ 50ನೇ ಸಿಸಿಹೆಚ್ ನ್ಯಾಯಾಲಯ ಜುಲೈ 1ರವರೆಗೆ ಆರೋಪಿಗಳನ್ನು ಎನ್‌ಐಎ ವಶಕ್ಕೆ ನೀಡಿ ಆದೇಶ ಹೊರಡಿಸಿದೆ.
ಪ್ರಕರಣದ ತನಿಖೆಯನ್ನು ಎನ್‌ಐಎಗೆ ವಹಿಸುವಂತೆ ರಾಜ್ಯ ಬಿಜೆಪಿ ನಿಯೋಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಮನವಿ ಸಲ್ಲಿಸಿತ್ತು. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಧಾನಸಭೆ ವಿಪಕ್ಷ ನಾಯಕ ಅಶೋಕ್, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರು ರಾಜ್ಯಪಾಲರಿಗೆ ನಾಲ್ಕು ಪುಟಗಳ ಲಿಖಿತ ರೂಪದಲ್ಲಿ ಮನವಿ ಸಲ್ಲಿಸಿದ್ದರು.