
ಕೋಮು ಗಲಭೆಗೆ ನಿಯಂತ್ರಣ: ವಿಶೇಷ ಕಾರ್ಯಪಡೆಗೆ ಚಾಲನೆ
ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಹಾಗೂ ಶಿವಮೊಗ್ಗದಲ್ಲಿ ಸಂಭವಿಸುತ್ತಿರುವ ಕೋಮುಗಲಭೆ ಪ್ರಚೋದಿಸುವ ಸರಣಿ ಹತ್ಯೆಗಳ ತಡೆಗೆ ರಾಜ್ಯ ಸರಕಾರ ರಚಿಸಿರುವ ವಿಶೇಷ ಕಾರ್ಯಪಡೆ ಘಟಕಕ್ಕೆ ಗೃಹಸಚಿವ ಡಾ.ಜಿ.ಪರಮೇಶ್ವರ್ ಇಂದು ಮಂಗಳೂರಿನಲ್ಲಿ ಚಾಲನೆ ನೀಡಿದರು.
ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ, ಮಂಜುನಾಥ್ ಭಂಡಾರಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಮತ್ತು ಪೊಲೀಸ್ ಮಹಾ ನಿರೀಕ್ಷಕ ಡಾ.ಎಂ.ಎ.ಸಲೀಂ, ಅಪರ ಪೊಲೀಸ್ ಮಹಾ ನಿರ್ದೇಶಕ ಎಸ್.ಮುರುಗನ್, ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ವಿಶೇಷ ಕಾರ್ಯಪಡೆ ಘಟಕದ ಡಿಐಜಿಪಿ (ಪ್ರಭಾರ) ಆಗಿರುವ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಸಿ.ಎಚ್. ಮತ್ತಿತರರು ಉಪಸ್ಥಿತರಿದ್ದರು. ವಿಶೇಷ ಕಾರ್ಯಪಡೆಯಲ್ಲಿ ಒಟ್ಟು 248 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಇವು ಮೂರು ಕಂಪೆನಿಗಳಾಗಿ ಕಾರ್ಯನಿರ್ವಹಿಸಲಿವೆ.