
ರೆಡ್‌ಕ್ರಾಸ್‌ನಿಂದ ಯೋಗ ದಿನಾಚರಣೆ
ಮಂಗಳೂರು: ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಬಲ್ಮಠ ಮತ್ತು ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಸಹಯೋಗದಲ್ಲಿ ಬಲ್ಮಠದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿದ ಕಾಲೇಜಿನ ಪ್ರಾಂಶುಪಾಲ ಡಾ. ಜಗದೀಶ್ ಬಾಳ ಮಾತನಾಡಿ, ‘ಆರೋಗ್ಯವಂತ ಯುವ ಜನತೆ ದೇಶದ ಆಸ್ತಿಯಾಗಿದ್ದು, ವಿದ್ಯಾರ್ಥಿಗಳು ನಿರಂತರ ಯೋಗಾಭ್ಯಾಸದಿಂದ ದೇಹದ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ರೆಡ್‌ಕ್ರಾಸ್ ಸೊಸೈಟಿಯ ದ.ಕ. ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಮಾತನಾಡಿ, ‘ಒತ್ತಡದ ಬದುಕಿನ ಮಧ್ಯೆ ನಾವು ಆರೋಗ್ಯದ ಕಡೆಗೂ ಗಮನ ಹರಿಸಬೇಕು. ಯೋಗದಿಂದ ಆರೋಗ್ಯ ಹಾಗೂ ಜೀವನೋತ್ಸಾಹ ವೃದ್ಧಿಯಾಗಿ ಬದುಕು ಹಸನಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ದೇವಿಕಾ ಯೋಗ ಕೇಂದ್ರದ ನಿರ್ದೇಶಕಿ ದೇವಿಕಾ ಪುರುಷೋತ್ತಮ್ ಅವರನ್ನು ಸನ್ಮಾನಿಸಲಾಯಿತು.
ರೆಡ್‌ಕ್ರಾಸ್ ಆಡಳಿತ ಮಂಡಳಿ ನಿರ್ದೇಶಕರಾದ ಡಾ. ಸುಮನ ಬೋಳಾರ್, ಗುರುದತ್ ಎಂ. ನಾಯಕ್, ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್‌ನ ನಿಯೋಜಿತ ಅಧ್ಯಕ್ಷ ಭಾಸ್ಕರ ರೈ ಕಟ್ಟ, ಮಾಜಿ ಅಧ್ಯಕ್ಷ ರವಿ ಜಲನ್, ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಅಬ್ದುಲ್ ಕುಂಞ ಉಪಸ್ಥಿತರಿದ್ದರು.
ರೆಡ್‌ಕ್ರಾಸ್ ನಿರ್ದೇಶಕ ಪಿ.ಬಿ. ಹರೀಶ್ ರೈ ಸ್ವಾಗತಿಸಿ, ಕಾರ್ಯದರ್ಶಿ ಕಿಶೋರ್ ಚಂದ್ರ ಹೆಗ್ಡೆ ವಂದಿಸಿದರು.