
ಯುವ ಜನತೆ ತಮಗೆ ಅರಿವಿಲ್ಲದಂತೆ ಮಾದಕ ವಸ್ತುಗಳ ಸೇವನೆಯ ಚಟಕ್ಕೆ ಬಲಿಯಾಗುತ್ತಿದ್ದಾರೆ: ಲೋಕಾಯುಕ್ತ ಡಿವೈಎಸ್‌ಪಿ ಡಾ. ಗಾನ ಪಿ. ಕುಮಾರ್
ಮಂಗಳೂರು: ವಿದ್ಯಾರ್ಥಿಗಳು ಸೇರಿದಂತೆ ಯುವ ಜನತೆ ತಮಗೆ ಅರಿವಿಲ್ಲದಂತೆ ಮಾದಕ ವಸ್ತುಗಳ ಸೇವನೆಯ ಚಟಕ್ಕೆ ಬಲಿಯಾಗುತ್ತಿದ್ದಾರೆ. ಇದು ಕುಟುಂಬ ಹಾಗೂ ಸಮಾಜದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ. ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಯುವ ಜನರಲ್ಲಿ ಜಾಗೃತಿ ಮೂಡಿಸುವುದು ಅವಶ್ಯ ಎಂದು ಲೋಕಾಯುಕ್ತ ಡಿವೈಎಸ್‌ಪಿ ಡಾ. ಗಾನ ಪಿ. ಕುಮಾರ್ ಹೇಳಿದರು.
ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ದ.ಕ.ಜಿಲ್ಲಾ ಘಟಕದ ವತಿಯಿಂದ ರಾಮಕೃಷ್ಣ ಕಾಲೇಜು ಸಹಯೋಗದಲ್ಲಿ ಗುರುವಾರ ಬಂಟ್ಸ್ ಹಾಸ್ಟೆಲ್‌ನ ಗೀತಾ ಎಸ್.ಎಂ. ಶೆಟ್ಟಿ ಸಭಾಂಗಣದಲ್ಲಿ ನಡೆದ ಅಂತಾರಾಷ್ಟ್ರೀಯ ಮಾದಕ ದ್ರವ್ಯ ಮತ್ತು ಅಕ್ರಮ ಸಾಗಾಟ ವಿರೋಧಿ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದ ಅವರು ವಿದ್ಯಾರ್ಥಿಗಳು ಡ್ರಗ್ಸ್ ಜಾಲಕ್ಕೆ ಬಲಿಯಾಗದೆ ಭವಿಷ್ಯದಲ್ಲಿ ಉತ್ತಮ ಸಮಾಜ ನಿರ್ಮಿಸಲು ವಿದ್ಯಾಭ್ಯಾಸದ ಕಡೆಗೆ ಹೆಚ್ಚಿನ ಗಮನ ಹರಿಸಬೇಕು ಎಂದರು.
ಫಾ.ಮುಲ್ಲರ್ ಮೆಡಿಕಲ್ ಕಾಲೇಜಿನ ಮನೋವೈದ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ.ಅರುಣ ಯಡಿಯಾಳ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ರೆಡ್‌ಕ್ರಾಸ್ ಸೊಸೈಟಿಯ ದ.ಕ. ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ರಾಮಕೃಷ್ಣ ಕಾಲೇಜಿನ ಸಂಚಾಲಕ ಡಾ. ಸಂಜೀವ ರೈ, ಪ್ರಾಂಶುಪಾಲೆ ಡಾ. ಅನಸೂಯ ರೈ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಶ್ರೀ ರಾಮಕೃಷ್ಣ ಪ.ಪೂ. ಕಾಲೇಜಿನ ಪ್ರಾಂಶುಪಾಲೆ ಯಶೋಧ, ಶ್ರೀ ರಾಮಕೃಷ್ಣ ಹೈಸ್ಕೂಲ್‌ನ ಮುಖ್ಯ ಶಿಕ್ಷಕಿ ಪ್ರೆಸಿಲ್ಲಾ ಡಿಸೋಜಾ, ರೆಡ್‌ಕ್ರಾಸ್ ಜಿಲ್ಲಾ ಘಟಕದ ನಿರ್ದೇಶಕರಾದ ಯತೀಶ್ ಬೈಕಂಪಾಡಿ, ಗುರುದತ್ ಕಾಮತ್, ಪಿ.ಬಿ. ಹರೀಶ್ ರೈ ಉಪಸ್ಥಿತರಿದ್ದರು.
ರೆಡ್‌ಕ್ರಾಸ್ ನಿರ್ದೇಶಕ ಡಾ. ಬಿ. ಸಚ್ಚಿದಾನಂದ ರೈ ಸ್ವಾಗತಿಸಿದರು. ಉಪನ್ಯಾಸಕಿ ವಾಣಿ ಕಾರ್ಯಕ್ರಮ ನಿರೂಪಿಸಿದರು.
ಅಂತಾರಾಷ್ಟ್ರೀಯ ಮಾದಕ ದ್ರವ್ಯ ಮತ್ತು ಅಕ್ರಮ ಸಾಗಾಟ ವಿರೋಧಿ ದಿನಾಚರಣೆ ಅಂಗವಾಗಿ ಏರ್ಪಡಿಸಿದ ರೀಲ್ಸ್ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಶ್ರೀ ರಾಮಕೃಷ್ಣ ಕಾಲೇಜು ಮತ್ತು ಮಂಗಳಾ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸ್ನ ಯೂತ್ ರೆಡ್ಕ್ರಾಸ್ ಘಟಕದ ವಿದ್ಯಾರ್ಥಿಗಳು ಭಾಗವಹಿಸಿದ್ದರು.