
ಹಿಂದೂ ನಾಯಕ ಅರುಣ್ ಕುಮಾರ್ ಪುತ್ತಿಲಗೆ ಗಡಿಪಾರು
ಪುತ್ತೂರು: ಹಿಂದೂ ನಾಯಕ ಅರುಣ್ ಕುಮಾರ್ ಪುತ್ತಿಲ ಅವರಿಗೆ ಗಡಿಪಾರು ಕುರಿತು ಸಹಾಯಕ ಆಯುಕ್ತರು ಆದೇಶ ಹೊರಡಿಸುವ ಕುರಿತು ವಿಚಾರಣೆ ದಿನಾಂಕ ನಿಗದಿಪಡಿಸಿ ನೋಟಿಸ್ ನೀಡಲಾಗಿದೆ.
ಪುತ್ತೂರು ಮುಂಡೂರು ಗ್ರಾಮ ಪುತ್ತಿಲ ಮನೆ ನಿವಾಸಿ ಅರುಣ್ ಕುಮಾರ್ ಪುತ್ತಿಲ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಕಲಬುರಗಿ ಜಿಲ್ಲೆಯ ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಆದೇಶ ಹೊರಡಿಸುವ ಕುರಿತು ಕಂದಾಯ ಇಲಾಖೆ ಸಹಾಯಕ ಆಯುಕ್ತರು ಜೂ.೬ರಂದು ವಿಚಾರಣೆಯನ್ನು ನಿಗದಿಪಡಿಸಿದ್ದಾರೆ. ಈ ವಿಚಾರಣೆಗೆ ಅರುಣ್ ಕುಮಾರ್ ಪುತ್ತಿಲ ಅವರು ತಪ್ಪದೆ ಹಾಜರಾಗುವಂತೆ ಸೂಚಿಸಲಾಗಿದೆ.
ಈ ಪ್ರಕರಣದಲ್ಲಿ ಅರುಣ್ ಕುಮಾರ್ ಪುತ್ತಿಲ ಅವರು ಸ್ವತಃ ಯಾ ನ್ಯಾಯವಾದಿಯವರ ಮೂಲಕ ವಿಚಾರಣೆಗೆ ಹಾಜರಾಗಿ ವಾದಿಸಬಹುದೆಂದು ತಿಳಿಸಲಾಗಿದೆ. ತಪ್ಪಿದಲ್ಲಿ ಈ ಪ್ರಕರಣದಲ್ಲಿ ನಿಮಗೆ ಆಸಕ್ತಿ ಇಲ್ಲವೆಂದು ಭಾವಿಸಿ, ಲಭ್ಯವಿರುವ ಮಾಹಿತಿಯ ಆಧಾರದಲ್ಲಿ ಏಕಪಕ್ಷಿಯವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಉಪವಿಭಾಗದ ದಂಡಾಧಿಕಾರಿಯಾಗಿರುವ ಸಹಾಯಕ ಆಯುಕ್ತರು ಜಾರಿ ಮಾಡಿದ ನೋಟೀಸ್‌ನಲ್ಲಿ ಉಲ್ಲೇಖಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಕೆಲವು ಕೋಮು ಸಂಘರ್ಷ ಘಟನೆಗಳ ಬಳಿಕ ಹಿರಿಯ ಐಪಿಎಸ್ ಅಧಿಕಾರಿಗಳ ಬದಲಾವಣೆಯಾಗಿತ್ತು. ಇದರ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.