
ಅನರ್ಹ ಪಡಿತರ ಚೀಟಿ ರದ್ದು
ಉಡುಪಿ: ಜಿಲ್ಲೆಯಲ್ಲಿ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿ (ಬಿ.ಪಿ.ಎಲ್) ಹೊಂದಿರುವವರು ಸರ್ಕಾರ ವಿಧಿಸಿರುವ ಮಾನದಂಡದ ವಿರುದ್ಧವಾಗಿ ಪಡಿತರ ಚೀಟಿ ಹೊಂದಿದ್ದಲ್ಲಿ, ಸಂಬಂಧಿಸಿದ ತಾಲೂಕು ಕಚೇರಿಯ ಆಹಾರ ಶಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿ, ಪಡಿತರ ಚೀಟಿಯನ್ನು ಆದ್ಯರ್ಪಣೆ (ಸರೆಂಡರ್) ಮಾಡಿಕೊಳ್ಳಬೇಕು. ಯಾವುದೇ ಪಡಿತರ ಚೀಟಿದಾರರು ಸರಕಾರದ ನಿಯಮಾವಳಿಗಳನ್ನು ಮೀರಿ ಒಂದೇ ಮನೆಯಲ್ಲಿ ವಾಸವಿರುವವರು ಒಂದಕ್ಕಿಂತ ಹೆಚ್ಚು ಪಡಿತರ ಚೀಟಿ ಹೊಂದಿದ್ದಲ್ಲಿ ಅಂಥ ಪಡಿತರ ಚೀಟಿದಾರರು ಸಂಬಂಧಪಟ್ಟ ಆಹಾರ ಶಾಖೆಯ ಅಧಿಕಾರಿಗಳಿಗೆ ಪಡಿತರ ಚೀಟಿ ನೀಡಿ ಒಂದಕ್ಕಿಂತ ಹೆಚ್ಚಿನ ಪಡಿತರ ಚೀಟಿಯನ್ನು ರದ್ದುಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಪಡಿತರ ಚೀಟಿದಾರರಲ್ಲಿ ಕೆಲವರು ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯಡಿ ಉಚಿತವಾಗಿ ಒದಗಿಸುವ ಅಕ್ಕಿಯನ್ನು ಹಣದ ಆಸೆಗೆ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿದ್ದು, ಅಕ್ಕಿಯನ್ನು ಸ್ವಂತಕ್ಕೆ ಉಪಯೋಗಿಸದೇ ಮಾರಾಟ ಮಾಡುವುದು ಅಪರಾಧವಾಗಿದೆ. ಈ ಬಗ್ಗೆ ಮಾಹಿತಿ ಬಂದಲ್ಲಿ ಅಂಥ ಕುಟುಂಬಕ್ಕೆ ಪಡಿತರ ವ್ಯವಸ್ಥೆಯಡಿ ಪಡಿತರ ಅಗತ್ಯ ಇಲ್ಲ ಎಂದು ತಿಳಿದು ಅಂಥ ಪಡಿತರಚೀಟಿಯನ್ನು ರದ್ದುಪಡಿಸಲು ಕ್ರಮ ವಹಿಸಲಾಗುವುದು.
ಕುಟುಂಬದ ವಾರ್ಷಿಕ ಆದಾಯ 1.20 ಲಕ್ಷ ರೂ.ಗಳಿಂಗಿಂತಲೂ ಹೆಚ್ಚು ಇರುವ ಕುಟುಂಬಗಳು, ಜೀವನೋಪಾಯಕ್ಕಾಗಿ ಸ್ವತಃ ಓಡಿಸುವ ಒಂದು ವಾಣಿಜ್ಯ ವಾಹನ (ಟ್ರ್ಯಾಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ)ಗಳನ್ನು ಹೊರತುಪಡಿಸಿ ನಾಲ್ಕು ಚಕ್ರದ ವಾಹನ ಹೊಂದಿರುವ ಕುಟುಂಬಗಳು, ಗ್ರಾಮೀಣ ಪ್ರದೇಶದಲ್ಲಿ 3 ಹೆಕ್ಟೇರ್ ಒಣಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು ಅಥವಾ ಗ್ರಾಮೀಣ ಪ್ರದೇಶ ಹೊರತುಪಡಿಸಿ, ನಗರ ಪ್ರದೇಶಗಳಲ್ಲಿ 1,000 ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆಯನ್ನು ಸ್ವಂತವಾಗಿ ಹೊಂದಿರುವ ಕುಟುಂಬಗಳು ಮತ್ತು ವೇತನವನ್ನು ಗಣನೆಗೆ ತೆಗೆದುಕೊಳ್ಳದೇ ಎಲ್ಲಾ ಖಾಯಂ ನೌಕರರು ಅಂದರೆ ಸರ್ಕಾರದ ಅಥವಾ ಸರ್ಕಾರದಿಂದ ಅನುದಾನ ಪಡೆಯುತ್ತಿರುವ ಸಂಸ್ಥೆಗಳು, ಸರ್ಕಾರಿ ಪ್ರಾಯೋಜಿತ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ಮಂಡಳಿಗಳು, ನಿಗಮಗಳು, ಸ್ವಾಯತ್ತ ಸಂಸ್ಥೆಗಳು ಇತ್ಯಾದಿ ಆದಾಯ ತೆರಿಗೆ, ಸೇವಾ ತೆರಿಗೆ, ವ್ಯಾಟ್, ವೃತ್ತಿ ತೆರಿಗೆ ಪಾವತಿಸುತ್ತಿರುವ ಎಲ್ಲಾ ಕುಟುಂಬಗಳು ಆದ್ಯತಾ ಪಡಿತರ ಚೀಟಿ ಹೊಂದಲು ಅನರ್ಹರಾಗಿರುತ್ತಾರೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.