
ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ
Saturday, June 14, 2025
ಉಡುಪಿ: ರಾಷ್ಟ್ರೀಯ ಹೆದ್ದಾರಿ 169ಎ ತೀರ್ಥಹಳ್ಳಿ-ಮಲ್ಪೆ ರಸ್ತೆಯ ಆಗುಂಬೆ ಘಾಟಿಯಲ್ಲಿ ಭಾರಿ ಮಳೆಯಿಂದಾಗಿ ಮತ್ತು ಭಾರಿ ವಾಹನಗಳ ಓಡಾಟದಿಂದ ಅಲ್ಲಲ್ಲಿ ರಸ್ತೆ ಬದಿಯಲ್ಲಿ ಭೂಕುಸಿತ ಆಗುವ ಸಂಭವ ಇರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಜೂ. 15ರಿಂದ ಸೆ. 30ರ ವರೆಗೆ ಲಘು ವಾಹನ ಸಂಚಾರಕ್ಕೆ ಮಾತ್ರ ಅನುವು ಮಾಡಿ, ಭಾರಿ ವಾಹನ ಸಂಚಾರವನ್ನು ನಿಬಂಧಿಸಿ ಜಿಲ್ಲಾ ದಂಡಾಧಿಕಾರಿ ಮತ್ತು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶಿಸಿದ್ದಾರೆ.
ಉಡುಪಿಯಿಂದ ತೀರ್ಥಹಳ್ಳಿಗೆ ಸಂಚರಿಸುವ ಭಾರಿ ವಾಹನಗಳು ಬದಲಿ ಮಾರ್ಗವಾಗಿ ಉಡುಪಿ-ಕುಂದಾಪುರ-ಸಿದ್ಧಾಪುರ- ಮಾಸ್ತಿಕಟ್ಟೆ-ತೀರ್ಥಹಳ್ಳಿ ಮಾರ್ಗವಾಗಿ ಸಂಚರಿಸುವಂತೆ ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಲಾಗಿದೆ.