ಸಮುದಾಯ ಆರೋಗ್ಯ ಕೇಂದ್ರದ ನೂತನ ಕಟ್ಟಡ ಕಾಮಗಾರಿ ಪರಿಶೀಲನೆ

ಸಮುದಾಯ ಆರೋಗ್ಯ ಕೇಂದ್ರದ ನೂತನ ಕಟ್ಟಡ ಕಾಮಗಾರಿ ಪರಿಶೀಲನೆ


ಬಂಟ್ವಾಳ: ದ.ಕ. ಜಿಲ್ಲೆಗೆ ಮಂಜೂರಾಗಿರುವ ಏಕೈಕ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ನೂತನ ಸುಸಜ್ಜಿತ ಕಟ್ಟಡ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ವಿದ್ಯಾರ್ಥಿಗಳ ಅನುಕೂಲತೆಯ ದೃಷ್ಟಿಯಿಂದ ಶೀಘ್ರ ಹೊಸ ಕಟ್ಟಡಕ್ಕೆ ಸ್ಥಳಾಂತರಿಸುವಂತೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗೆ ಸೂಚಿಸಿದರು.


ಅವರು ಪುಂಜಾಲಕಟ್ಟೆಯಲ್ಲಿ 18 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಶ್ರೀ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಯ ಕಟ್ಟಡವನ್ನು ಪರಿಶೀಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.


ಪ್ರಸ್ತುತ ಬಾಡಿಗೆ ಕಟ್ಟಡದಲ್ಲಿ ವಿದ್ಯಾರ್ಥಿಗಳಿಗೆ ಕುಳಿತುಕೊಳ್ಳಲು ವಸತಿ ಕೊರತೆಯಿದ್ದು, ಈಗಾಗಿ ಸ್ಥಳಾಂತರ ತುರ್ತು ಅಗತ್ಯವಾಗಿದೆ. ಹೀಗಾಗಿ ಶೀಘ್ರವಾಗಿ ಧಾರ್ಮಿಕ ವಿಧಿ ವಿಧಾನ ನೆರವೇರಿಸಿ ವಿದ್ಯಾರ್ಥಿಗಳ ಸ್ಥಳಾಂತರಕ್ಕೆ ನಿರ್ದೇಶನ ನೀಡಿದರು.


ಬಳಿಕ ಶಾಸಕರು ಮೇಲ್ದರ್ಜೆಗೇರಿರುವ ಪುಂಜಾಲಕಟ್ಟೆ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಸುಮಾರು 12 ಕೋಟಿ ರೂ. ಅನುದಾನದಲ್ಲಿ ನಿರ್ಮಾಣವಾಗುವ ಕಟ್ಟಡವನ್ನು ಪರಿಶೀಲಿಸಿ, ಕಾಮಗಾರಿಗಳ ಕುರಿತು ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಇಂಜಿನಿಯರ್ ಅವರಿಂದ ಮಾಹಿತಿ ಪಡೆದುಕೊಂಡರು.


ಬಂಟ್ವಾಳ ಹಾಗೂ ಬೆಳ್ತಂಗಡಿ ತಾಲೂಕಿನ ಗಡಿ ಪ್ರದೇಶವಾಗಿರುವ ಪುಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಬೇಕೆಂಬುದು ಈ ಭಾಗದ ಹಿರಿಯ ಮುಖಂಡ ತುಂಗಪ್ಪ ಬಂಗೇರ ಹಾಗೂ ಇತರ ಸಾರ್ವಜನಿಕರ ಒತ್ತಾಯವಾಗಿದ್ದು, ಈ ಹಿನ್ನೆಲೆಯಲ್ಲಿ ಕಳೆದ ಬಿಜೆಪಿ ಸರಕಾರದ ಅವಧಿಯಲ್ಲಿ ಅಂದಿನ ರಾಜ್ಯ ಆರೋಗ್ಯ ಸಚಿವರು, ಬಂಟ್ವಾಳಕ್ಕೆ ಭೇಟಿ ನೀಡಿದ ವೇಳೆ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಿ, ಅದೇಶಿಸುವ ಜೊತೆಗೆ, ಬಳಿಕ ಅನುದಾನವನ್ನು ನೀಡಿದ್ದರು ಎಂದು ತಿಳಿಸಿದರು.


ಜಿ.ಪಂ.ಸದಸ್ಯ ಎಂ.ತುಂಗಪ್ಪ ಬಂಗೇರ, ಪಿಲಾತಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಶಾರದಾ, ಕಾವಳಮೂಡೂರು ಗ್ರಾ.ಪಂ.ಅಧ್ಯಕ್ಷ ಅಜಿತ್ ಶೆಟ್ಟಿ ಕಾರಿಂಜ, ಪಿಲಾತಬೆಟ್ಟು ಗ್ರಾ.ಪಂ. ಸದಸ್ಯರಾದ ಹರ್ಷಿಣಿ ಪುಷ್ಪಾನಂದ, ಕಾಂತಪ್ಪ ಕರ್ಕೇರ, ರಾಯಿ ಗ್ರಾ.ಪಂ. ಅಧ್ಯಕ್ಷ ಸಂತೋಷ್ ರಾಯಿಬೆಟ್ಟು, ಬಂಟ್ವಾಳ ಮಂಡಲದ ಪ್ರಧಾನ ಕಾರ್ಯದರ್ಶಿ ಸುದರ್ಶನ ಬಜ, ಮಾಧ್ಯಮ ಸಂಚಾಲಕ ಪುರುಷೋತ್ತಮ ಶೆಟ್ಟಿ ವಾಮದಪದವು, ಗ್ರಾ.ಪಂ. ಮಾಜಿ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಕಮಂಗಿಲ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಬಿಂದಿಯಾ ನಾಯಕ್, ಪ್ರಾಂಶುಪಾಲ ಸಂತೋಷ್ ಸನಿಲ್, ತಾಲೂಕು ಆರೋಗ್ಯಾಧಿಕಾರಿ ಅಶೋಕ್ ರೈ, ಪುಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ ರಿತೇಶ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article