
ಆಸ್ಥಿ ಪಂಜರ ಸ್ವಾಧೀನ
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹಗಳನ್ನು ದಫನ ಮಾಡಿರುವುದಾಗಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ವ್ಯಕ್ತಿ ಶುಕ್ರವಾರ ಸಂಜೆ ಬೆಳ್ತಂಗಡಿ ನ್ಯಾಯಾಲಯಕ್ಕೆ ವಕೀಲರ ಜೊತೆ ಹಾಜರಾಗಿ ಬೆಳ್ತಂಗಡಿ ಪ್ರಧಾನ ಸಿವಿಲ್ ನ್ಯಾಯಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಯವರ ಮುಂದೆ ಹಾಜರಾಗಿ, ಬಿಎನ್ ಎಸ್ 183 ಪ್ರಕಾರ ಹೇಳಿಕೆ ನೀಡಿದ್ದಾರೆ. ನಂತರ ವಕೀಲರೊಂದಿಗೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ತೆರಳಿ ವಿಚಾರಣೆ ನಡೆಸಲಾಗಿದೆ.
ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಕಚೇರಿ ಪ್ರಕಟಣೆ ಬಿಡುಗಡೆ ಮಾಡಿದೆ. ’ಶುಕ್ರವಾರ ಸಾಕ್ಷಿ ದೂರುದಾರರು ಬೆಳ್ತಂಗಡಿಯ ನ್ಯಾಯಾಲಯದ ಮುಂದೆ ಹಾಜರಾಗಿ ತಮ್ಮ ಹೇಳಿಕೆ ನೀಡಿದ್ದಾರೆ. ಸಾಕ್ಷಿ ದೂರುದಾರರು ಸ್ವತಃ ತಾವೇ ಹೊರತೆಗೆದಿರುವುದಾಗಿ ತಿಳಿಸಿರುವ ಅಸ್ಥಿಪಂಜರದ ಅವಶೇಷಗಳನ್ನು ಹಾಜರುಪಡಿಸಿದ್ದು, ಅವುಗಳನ್ನು ಸಾಕ್ಷಿ ದೂರುದಾರರ ಪರ ವಕೀಲರು ಹಾಗೂ ಪಂಚರ ಸಮ್ಮುಖದಲ್ಲಿ ಪೊಲೀಸರು ಸ್ವಾಧೀನಕ್ಕೆ ಪಡೆದುಕೊಳ್ಳಲಾಗಿದೆ. ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು" ಎಂದು ಪ್ರಕಟಣೆ ತಿಳಿಸಿದೆ.
ಗುರುತು ಬಹಿರಂಗಪಡಿಸಿಲ್ಲ..
ಜಿಲ್ಲೆಯ ಸಕ್ಷಮ ಪ್ರಾಧಿಕಾರವು ಈ ಪ್ರಕರಣದಲ್ಲಿ ಸಾಕ್ಷಿಯ ರಕ್ಷಣೆಗೆ ಗುರುವಾರ ಸಂಜೆ ತಕ್ಷಣದಿಂದಲೇ ಜಾರಿಗೆ ಬರುವಂತೆ ಅನುಮೋದನೆ ನೀಡಿದೆ. ಆದರೆ ಸಾಕ್ಷಿ ದೂರುದಾರರ ಗುರುತಿನ ರಕ್ಷಣೆಯ ವಿಚಾರದಲ್ಲಿ, ಸಾಕ್ಷಿ ದೂರುದಾರರನ್ನು ಪ್ರತಿನಿಧಿಸಿರುವ ವ್ಯಕ್ತಿಗಳು ಪತ್ರಿಕಾ ಪ್ರಕಟಣೆ ಹಾಗೂ ಎಫ್ಐಆರ್ ಪ್ರತಿಯನ್ನು ಮಾಧ್ಯಮಗಳಿಗೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ನೀಡುವ ಮೂಲಕ, ಸಾಕ್ಷಿ ದೂರುದಾರರ ವಯಸ್ಸು, ವೃತ್ತಿಯ ಸ್ಥಳ, ಚಹರೆ, ವೃತ್ತಿಯಲ್ಲಿದ್ದ ಅವಧಿ, ಸಮುದಾಯ ಮತ್ತು ಇತರೆ ಮಾಹಿತಿಗಳನ್ನು ಬಹಿರಂಗಗೊಳಿಸಿರುವುದರಿಂದ, ಸ್ಥಳೀಯ ಅನೇಕರು ಸಾಕ್ಷಿ ದೂರುದಾರರನ್ನು ಅಂದಾಜಿಸಿರುತ್ತಾರೆ. ಆದರೆ ಎಲ್ಲಾ ಅಧಿಕೃತ ಮೂಲಗಳಿಂದ ಸಾಕ್ಷಿ ದೂರುದಾರರ ಗುರುತು ಬಹಿರಂಗಪಡಿಸದಿರಲು ನಿರ್ಧರಿಸಲಾಗಿದೆ’ ಬಂಟ್ವಾಳ ಪೊಲೀಸ್ ಉಪಾಧೀಕ್ಷಕರ ನೇತೃತ್ವದಲ್ಲಿ ಪ್ರತ್ಯೇಕ ತನಿಖೆ ಆರಂಭಿಸಲಾಗಿದೆ ಎಂದು ಎಸ್ಪಿ ಪ್ರಕಟಣೆ ತಿಳಿಸಿದೆ.