
ಧರ್ಮಸ್ಥಳ ಗ್ರಾಮದಲ್ಲಿ ಸಾವಿನ ಪ್ರಕರಣ: ಎಸ್‌ಐಟಿ ರಚನೆಗೆ ಮಹಿಳಾ ಅಯೋಗದಿಂದ ಸಿಎಂಗೆ ಪತ್ರ
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಹೆಣಗಳನ್ನು ಹೂತು ಹಾಕಿರುವುದಾಗಿ ಸಾಕ್ಷಿ ದೂರುದಾರ ನೀಡಿರುವ ಹೇಳಿಕೆಗಳ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸುವಂತೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.
ಸಾಕ್ಷಿ ದೂರುದಾರ ಬೆಳ್ತಂಗಡಿ ನ್ಯಾಯಾಲಯಕ್ಕೆ ಬಂದು ಹೇಳಿಕೆ ನೀಡಿದ ಬಳಿಕವೂ ತನಿಖೆಯಲ್ಲಿ ಯಾವುದೇ ಪ್ರಗತಿ ಕಾಣಿಸಿರಲಿಲ್ಲ. ಇದೀಗ ಮಹಿಳಾ ಆಯೋಗ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ತನಿಖೆಗೆ ವಿಶೇಷ ತನಿಖಾ ತಂಡ ರಚಿಸಿ ಸೂಕ್ತ ತನಿಖೆ ನಡೆಸುವಂತೆ ಕೇಳಿಕೊಂಡಿದ್ದಾರೆ. ಅಲ್ಲದೆ, ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಏಳು ದಿನಗಳೊಳಗೆ ಘಟನೆಯ ಬಗ್ಗೆ ವರದಿ ನೀಡುವಂತೆ ಪತ್ರ ಬರೆಯಲಾಗಿದೆ.
ಧರ್ಮಸ್ಥಳ ಭಾಗದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ವ್ಯಕ್ತಿಯೊಬ್ಬರು ನ್ಯಾಯಾಲಯದಲ್ಲಿ ಹೇಳಿಕೆಯನ್ನು ದಾಖಲಿಸಿದ್ದಾರೆ. ಧರ್ಮಸ್ಥಳದ ವ್ಯಾಪ್ತಿಯಲ್ಲಿ ಕಳೆದ 20 ವರ್ಷಗಳಿಂದ ಎಷ್ಟು ಮಹಿಳೆಯರು ಮತ್ತು ವಿದ್ಯಾರ್ಥಿನಿಯರು ನಾಪತ್ತೆಯಾಗಿದ್ದಾರೆ. ಅದರಲ್ಲಿ ಎಷ್ಟು ಜನರ ಪತ್ತೆ ಮಾಡಲಾಗಿದೆ. ಪತ್ತೆ ಮಾಡಲಾಗದ ಪ್ರಕರಣಗಳು ಎಷ್ಟು? ಆಸ್ವಾಭಾವಿಕವಾದ ಸಾವು/ ಕೊಲೆ ಪ್ರಕರಣಗಳಲ್ಲಿ ಕೈಗೊಂಡ ಕ್ರಮ ಮತ್ತು ಅತ್ಯಾಚಾರ ಪ್ರಕರಣಗಳ ವಿವರವನ್ನು ಈ ಪತ್ರ ತಲುಪಿದ 7 ದಿನದೊಳಗೆ ಮಹಿಳಾ ಆಯೋಗಕ್ಕೆ ಕಳುಹಿಸುವಂತೆ ಪತ್ರದಲ್ಲಿ ಆಗ್ರಹಿಸಲಾಗಿದೆ.