
ಸಾರ್ವಜನಿಕರ ಸುರಕ್ಷತೆಗಾಗಿ ಮನೆಮನೆಗೆ ಪೊಲೀಸ್ ಭೇಟಿ ಕಾರ್ಯಕ್ರಮಕ್ಕೆ ಚಾಲನೆ
Friday, July 11, 2025
ಕುಂದಾಪುರ: ಸಾರ್ವಜನಿಕರ ಸುರಕ್ಷತೆಗಾಗಿ ಮನೆ ಮನೆಗೆ ಪೊಲೀಸ್ ಎಂಬ ವಿನೂತನ ಕಾರ್ಯಕ್ರಮವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿದೆ. ಅಪರಾಧ ತಡೆ ಹಾಗೂ ಶಾಂತಿ ಮತ್ತು ಭದ್ರತೆಯ ಸ್ಥಿರತೆಯನ್ನು ಕಾಪಾಡುವಲ್ಲಿ ಈ ಕ್ರಮ ಪ್ರಮುಖ ಪಾತ್ರ ವಹಿಸಲಿದೆ.
ಸಾರ್ವಜನಿಕರ ಸಹಕಾರದಿಂದ ಪೊಲೀಸರು ಶಂಕಾಸ್ಪದ ಚಟುವಟಿಕೆಗಳನ್ನು ಬೇಗ ಗುರುತಿಸಿ ತಡೆಗಟ್ಟುವುದು. ಜನರಲ್ಲಿ ಪೊಲೀಸ್ ವ್ಯವಸ್ಥೆಯ ಬಗ್ಗೆ ನಂಬಿಕೆ ಬೆಳೆಸುವುದು, ಸಮುದಾಯ ಪೊಲೀಸ್ ವ್ಯವಸ್ಥೆಯನ್ನು ಬಲಪಡಿಸುವುದು ಪೊಲೀಸ್ ಮತ್ತು ಸಾರ್ವಜನಿಕರ ನಡುವೆ ವಿಶ್ವಾಸದ ಸಂಬಂಧವನ್ನು ನಿರ್ಮಿಸುವುದು ಇದರ ಉದ್ದೇಶವಾಗಿದೆ ಎಂದು ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷಕ ಗೋಪಿಕೃಷ್ಣ ಹೇಳಿದರು.
ಜು.11 ರಂದು ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಾರ್ವಜನಿಕರ ಸುರಕ್ಷತೆಗಾಗಿ ಮನೆಮನೆಗೆ ಪೊಲೀಸ್ ಭೇಟಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಸರ್ಕಾರದ ಸೂಚನೆಯಂತೆ ಈ ಪೊಲೀಸ್ ಉಪಕ್ರಮವನ್ನು ಆರಂಭಿಸಲಾಗಿದೆ.
ಕೋಟ ಉಪನಿರೀಕ್ಷಕ ರಾಘವೇಂದ್ರ ಸಿ., ಸಹಾಯಕ ಉಪ ನಿರೀಕ್ಷಕಿ ಸುಧಾ ಪ್ರಭು ಮತ್ತು ಸಿಬ್ಬಂದಿಗಳು, ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ಕುಂದರ್ ಮತ್ತು ಸ್ಥಳೀಯರು ಉಪಸ್ಥಿತರಿದ್ದರು.