
ಜು.9ರಂದು ಅಖಿಲ ಭಾರತ ಮಹಾಮುಷ್ಕರ: ಜಿಲ್ಲಾ ಮಟ್ಟದಲ್ಲೂ ಬೃಹತ್ ಪ್ರತಿಭಟನೆ
ಮಂಗಳೂರು: ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಕೇಂದ್ರ ಕಾರ್ಮಿಕ ಸಂಘಟನೆಗಳು ಹಾಗೂ ರೈತ ಸಂಘಟನೆಗಳ ಸಂಯುಕ್ತ ಕಿಸಾನ್ ಮೋರ್ಚಾ ಜಂಟಿ ನೇತೃತ್ವದಲ್ಲಿ ಜು.9ರಂದು ಅಖಿಲ ಭಾರತ ಮಹಾಮುಷ್ಕರ ನಡೆಯಲಿದ್ದು, ಅಂದು ಜಿಲ್ಲಾ ಮಟ್ಟದಲ್ಲೂ ಬೃಹತ್ ಪ್ರತಿಭಟನೆ ಏರ್ಪಡಿಸಲಾಗಿದೆ ಎಂದು ಸಿಐಟಿಯು ದ.ಕ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜು.9 ರಂದು ಬೆಳಗ್ಗೆ 10ಕ್ಕೆ ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಕಾರ್ಮಿಕರ ಬೃಹತ್ ಪ್ರತಿಭಟನಾ ಮೆರವಣಿಗೆ ಹೊರಡಲಿದ್ದು, ಬಳಿಕ 10.30 ಗಂಟೆಗೆ ಕ್ಲಾಕ್ ಟವರ್ ಬಳಿ ಪ್ರತಿಭಟನಾ ಸಭೆ ಆಯೋಜಿಸಲಾಗಿದೆ. ವಿವಿಧ ಕಾರ್ಮಿಕ ಸಂಘಟನೆಗಳ ಮುಖಂಡರು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.
8 ಗಂಟೆ ಕೆಲಸದ ಅವಧಿ, ಖಾಯಂ ಕೆಲಸ, ಕೆಲಸಕ್ಕೆ ತಕ್ಕ ವೇತನ, ಮುಷ್ಕರದ ಹಕ್ಕು, ಸಂಘ ಕಟ್ಟುವ ಹಕ್ಕು ಇನ್ನಿತರ ಹಕ್ಕುಗಳನ್ನು ಇಲ್ಲವಾಗಿಸಿ ಕಾರ್ಮಿಕರನ್ನು ಗುಲಾಮರನ್ನಾಗಿಸುವ ಕಾರ್ಮಿಕ ವಿರೋಧಿ 4 ಸಂಹಿತೆಗಳನ್ನು ರದ್ದುಪಡಿಸಬೇಕು. ಬೆಲೆ ಏರಿಕೆಗೆ ಅನುಗುಣವಾಗಿ ಎಲ್ಲ ವಿಭಾಗಗಳ ಕಾರ್ಮಿಕರಿಗೆ ರಾಷ್ಟ್ರವ್ಯಾಪಿ 26 ಸಾವಿರ ರೂ. ಹಾಗೂ ರಾಜ್ಯವ್ಯಾಪಿ 36 ಸಾವಿರ ರೂ. ಕನಿಷ್ಠ ವೇತನ ನಿಗದಿಪಡಿಸಬೇಕು. ಗುತ್ತಿಗೆ ಕಾರ್ಮಿಕರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ತಕ್ಷಣ ಜಾರಿ ಮಾಡಬೇಕು. ಹಳೆ ಪಿಂಚಣಿ ಯೋಜನೆ ಜಾರಿ ಮಾಡುವುದು, ಸಾರ್ವಜನಿಕ ಉದ್ದಿಮೆ, ನಿಗಮ ಮತ್ತು ಇಲಾಖೆಗಳನ್ನು ಖಾಸಗಿಕರಣಗೊಳಿಸುವ ರಾಷ್ಟ್ರೀಯ ನಗದೀಕರಣ ಪೈಪ್‌ಲೈನ್ ಯೋಜನೆಯನ್ನು ರದ್ದುಪಡಿಸಬೇಕು. ವಿದ್ಯುತ್ ಖಾಸಗಿಕರಣ ಮಾಡುವ ವಿದ್ಯುತ್ ತಿದ್ದುಪಡಿ ಮಸೂದೆ ಹಿಂಪಡೆಯಬೇಕು ಎಂದು ಸುನಿಲ್ ಕುಮಾರ್ ಆಗ್ರಹಿಸಿದರು.
ಉದ್ಯೋಗದ ಹಕ್ಕನ್ನು ಮೂಲಭೂತ ಹಕ್ಕಾಗಿಸಬೇಕು. ಖಾಲಿಯಿರುವ ಹುದ್ದೆಗಳ ಭರ್ತಿ ಮಾಡಬೇಕು. ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ವಾರ್ಷಿಕ 200 ದಿನ ಕೆಲಸ. ದಿನಕ್ಕೆ 600 ರೂ. ಕೂಲಿ ನಿಗದಿಪಡಿಸಬೇಕು. ನಗರ ಪ್ರದೇಶಕ್ಕೂ ಇದನ್ನು ವಿಸ್ತರಿಸಬೇಕು. ದಿನದ ಕೆಲಸದ ಅವಧಿ 12 ಗಂಟೆಗೆ ವಿಸ್ತರಣೆ ಹಾಗೂ ರಾತ್ರಿ ಪಾಳಿಯಲ್ಲಿ ಮಹಿಳಾ ಕಾರ್ಮಿಕರ ದುಡಿಮೆಗೆ ಅವಕಾಶ ನೀಡಿ ಕಾರ್ಖಾನೆ ಕಾಯ್ದೆಗೆ ಮಾಡಿರುವ ತಿದ್ದುಪಡಿಗಳನ್ನು ರಾಜ್ಯ ಸರ್ಕಾರ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು.
ಅಖಿಲ ಭಾರತ ಬ್ಯಾಂಕ್ ನೌಕರರ ಸಂಘಟನೆ ಪ್ರಧಾನ ಕಾರ್ಯದರ್ಶಿ ಫಣೀಂದ್ರ ರಾವ್, ಎಐಟಿಯುಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೀತಾರಾಮು ಬೆರಿಂಜ, ಎಐಕೆಎಸ್ ಜಿಲ್ಲಾಧ್ಯಕ್ಷ ಕೆ. ಯಾದವ ಶೆಟ್ಟಿ, ರಾಜ್ಯ ರೈತ ಸಂಘ ಜಿಲ್ಲಾಧ್ಯಕ್ಷ ಓಸ್ವಾಲ್ಡ್ ಫರ್ನಾಂಡಿಸ್, ಸಿಐಟಿಯು ಜಿಲ್ಲಾಧ್ಯಕ್ಷ ಜೆ. ಬಾಲಕೃಷ್ಣ ಶೆಟ್ಟಿ, ಎಐಟಿಯುಸಿ ಜಿಲ್ಲಾ ಉಪಾಧ್ಯಕ್ಷ ಕರುಣಾಕರ ಮಾರಿಪಳ್ಳ, ಸಿಐಟಿಯು ಜಿಲ್ಲಾ ಖಜಾಂಚಿ ಯೋಗೀಶ್ ಜಪ್ಪಿನಮೊಗರು ಇದ್ದರು.