
ಪೇಜಾವರ ಶಾಲೆಯ ಛಾವಣಿ ಕುಸಿತ: ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಎಐಡಿಎಸ್‌ಓ ಖಂಡನೆ
Tuesday, July 1, 2025
ಮಂಗಳೂರು: ಮಂಗಳೂರಿನ ಪೇಜಾವರ ಕೆಂಜಾರು ಮುಖ್ಯಪ್ರಾಣ ಪೂರ್ವ ಪ್ರಾಥಮಿಕ ಶಾಲೆಯ ತರಗತಿಯಲ್ಲಿ ವಿದ್ಯಾರ್ಥಿಗಳಿದ್ದಾಗಲೇ ಕಟ್ಟಡದ ಛಾವಣಿ ಕುಸಿದ ಘಟನೆಯು ಸರ್ಕಾರದ ನಿರ್ಲಕ್ಷ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಈ ದುರ್ಘಟನೆಯಲ್ಲಿ ಮಗು ಗಾಯಗೊಂಡಿರುವುದು ಖಂಡನೀಯ.
ಮಳೆಗಾಲದಂತಹ ಅಪಾಯಕಾರಿ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಖಚಿತಪಡಿಸುವುದು ಸರ್ಕಾರದ ಪ್ರಾಥಮಿಕ ಜವಾಬ್ದಾರಿಯಾಗಿದೆ. ಆದರೆ, ಸರ್ಕಾರ ಈ ಜವಾಬ್ದಾರಿಯಿಂದ ನುಣುಚಿಕೊಂಡಿರುವುದು ಸ್ಪಷ್ಟವಾಗಿ ಕಾಣುತ್ತದೆ. ಸರ್ಕಾರವು ಶಿಕ್ಷಣದ ಖಾಸಗೀಕರಣವನ್ನು ಪ್ರೋತ್ಸಾಹಿಸುತ್ತಾ, ಬಡ ಮಕ್ಕಳ ಭವಿಷ್ಯಕ್ಕೆ ಆಧಾರವಾಗಿರುವ ಸರ್ಕಾರಿ ಶಾಲೆಗಳ ದುಃಸ್ಥಿತಿಯ ಬಗ್ಗೆ ಕಣ್ಣುಮುಚ್ಚಿ ಕುಳಿತಿದೆ. ಇಂತಹ ಘಟನೆಗಳು ಪುನರಾವೃತ್ತಿಯಾಗದಂತೆ ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ಸರ್ಕಾರಿ ಶಾಲೆಗಳ ಮೂಲಸೌಕರ್ಯವನ್ನು ಸುಧಾರಿಸಬೇಕೆಂದು ಎಐಡಿಎಸ್‌ಓ ಪ್ರಕಟಣೆಯಲ್ಲಿ ತೀವ್ರವಾಗಿ ಆಗ್ರಹಿಸಿದೆ.