
ಜುಲೈ 26ರಂದು ಆಳ್ವಾಸ್‌ನಲ್ಲಿ ಅಧ್ಯಾಪಕ ಭೂಷಣ ಪ್ರಶಸ್ತಿ ಪ್ರದಾನ
Wednesday, July 23, 2025
ಮೂಡುಬಿದಿರೆ: ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ ಮಂಗಳೂರು ವಿಭಾಗದ ವತಿಯಿಂದ ಆಳ್ವಾಸ್ ಕಾಲೇಜ್ ಮೂಡಬಿದಿರೆಯ ವಿ. ಎಸ್. ಆಚಾರ್ಯ ಸಭಾಂಗಣದಲ್ಲಿ ಜುಲೈ 26ರಂದು ಮಧ್ಯಾಹ್ನ 2 ಗಂಟೆಗೆ 2025ನೇ ಸಾಲಿನ ಅಧ್ಯಾಪಕ ಭೂಷಣ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಮಡಿಕೇರಿ ಜಿಲ್ಲೆಗಳ ಸಾಧಕ ಪ್ರಾಧ್ಯಾಪಕರುಗಳ ಶೈಕ್ಷಣಿಕ ಸಾಧನೆಗಳನ್ನು ಗುರುತಿಸಿ ಪ್ರಶಸ್ತಿಯನ್ನು ನೀಡಲಾಗುತ್ತದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಶಸ್ತಿ ಪ್ರದಾನ ಮಾಡಲಿರುವರು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
2023ನೇ ಸಾಲಿನಿಂದ ಆರಂಭವಾದ ಈ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ ಮಂಗಳೂರು ವಿಭಾಗವು ಶಿಕ್ಷಣ ಕ್ಷೇತ್ರದಲ್ಲಿ ಅಪೂರ್ವ ಸಾಧನೆಗೈದ ಪ್ರಾಧ್ಯಾಪಕರನ್ನು ಗುರುತಿಸಿ ಬೇರೆ ಬೇರೆ ವಿಭಾಗಗಳಲ್ಲಿ ಪ್ರಶಸ್ತಿಯನ್ನು ನೀಡುತ್ತಿದೆ. ಅಂತೆಯೇ ಈ ಬಾರಿ ಜೀವಮಾನದ ಸಾಧನೆಗಾಗಿ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಉಪಕುಲಪತಿ ಡಾ.ಎಚ್.ಎಸ್ ಬಲ್ಲಾಳ್ ಹಾಗೂ ಮೇಘಾಲಯದ ಸರಸ್ವತಿ ಸಮೂಹ ವಿದ್ಯಾಸಂಸ್ಥೆಗಳ ಸ್ಥಾಪಕ ಡಾ.ಅನಂತಕೃಷ್ಣ ಭಟ್ ಅವರನ್ನು ಆಯ್ಕೆ ಮಾಡಲಾಗಿದೆ. ಕಾಲೇಜು ಆಡಳಿತ ನಿರ್ವಹಣೆಯಲ್ಲಿನ ಸಾಧನೆಗಾಗಿ ಆಳ್ವಾಸ್ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ಹಾಗೂ ಮಂಗಳೂರು ಕೆನರಾ ಕಾಲೇಜಿನ ಪ್ರಾಂಶುಪಾಲೆ ಡಾ.ಪ್ರೇಮಲತಾ ಅವರನ್ನು ಆಯ್ಕೆ ಮಾಡಲಾಗಿದೆ. ಅತ್ಯುತ್ತಮ ಸಂಶೋಧಕ ಪ್ರಶಸ್ತಿಗೆ ಸ್ಕೂಲ್ ಆಫ್ ಎಕನಾಮಿಕ್ಸ್ ಮಣಿಪಾಲ್‌ನ ಪ್ರೊ. ಹರೀಶ್ ಜೋಶಿ ಹಾಗೂ ಎ.ಜೆ ಇಂಜಿನಿಯರಿAಗ್ ಕಾಲೇಜಿನ ಪ್ರಾಂಶುಪಾಲ ಡಾ.ಶಾಂತರಾಮ ರೈ ಸಿ. ಅವರನ್ನು ಆಯ್ಕೆ ಮಾಡಲಾಗಿದೆ. ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಪ್ರಾಧ್ಯಾಪಕಿ ಡಾ.ಸುಭಾಷಿಣಿ ಶ್ರೀವತ್ಸ ಹಾಗೂ ಜಿ. ಶಂಕರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಡಾ. ರಾಜೇಂದ್ರ ಅವರಿಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ನೀಡಲಾಗುವುದು.ಅತ್ಯುತ್ತಮ ಗ್ರಂಥಪಾಲಕ ವಿಭಾಗದಲ್ಲಿ ಫೀಲ್ಡ್ ಮಾರ್ಷಲ್ ಮಡಿಕೇರಿ ಕೆ.ಎಂ ಕಾರ್ಯಪ್ಪ ಕಾಲೇಜಿನ ಪ್ರೊ. ವಿಜಯಲತಾ ಕಾಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಡಾ.ಯಶೋದ ಅವರನ್ನು ಆಯ್ಕೆ ಮಾಡಲಾಗಿದೆ. ಅತ್ಯುತ್ತಮ ದೈಹಿಕ ಶಿಕ್ಷಣ ಶಿಕ್ಷಕರು ಪ್ರಶಸ್ತಿಗಾಗಿ ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕ ಡಾ.ರಾಧಾಕೃಷ್ಣ ಹಾಗೂ ಕಾವೇರಿ ಕಾಲೇಜು ವಿರಾಜಪೇಟೆಯ ಶಿಕ್ಷಕ ತಮ್ಮಯ್ಯ ಅವರನ್ನು ಆಯ್ಕೆ ಮಾಡಲಾಗಿದೆ. 2025ನೇ ಸಾಲಿನಲ್ಲಿ ಪಿ.ಎಚ್‌ಡಿ ಪದವಿ ಪಡೆದ ಸಂಶೋಧನಾರ್ಥಿಗಳನ್ನು ಸನ್ಮಾನಿಸಲಾಗುವುದು.
ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕ ಉಮಾನಾಥ ಕೋಟ್ಯಾನ್, ಪಿ. ಪ್ರಕಾಶ್ ದಿಕ್ಸೂಚಿ ಭಾಷಣ ಮಾಡಲಿರುವರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ ಆಳ್ವ ಅಧ್ಯಕ್ಷತೆ ವಹಿಸುವರು. ಕೆಆರ್‌ಎಂಎಸ್‌ಎಸ್ ರಾಜ್ಯಾಧ್ಯಕ್ಷ ಡಾ. ಗುರುನಾಥ ಬಡಿಗೇರ್, ಡಾ. ಮಾಧವ ಎಂ.ಕೆ, ರಾಜ್ಯ ಜಂಟಿ ಪ್ರಧಾನ ಕಾರ್ಯದರ್ಶಿ ಉಪಸ್ಥಿತರಿರುವರು ಎಂದು ಮಾಹಿತಿ ನೀಡಿದರು.
ಸಂಘಟನೆಯ ಅಧ್ಯಕ್ಷೆ ವಾಣಿ ಯು.ಎಸ್., ಉಡುಪಿ ವಿಭಾಗದ ಅಧ್ಯಕ್ಷ ಡಾ. ಸುರೇಂದ್ರ ಶೆಟ್ಟಿ, ಕಾರ್ಯದರ್ಶಿ ರಾಜೇಶ್ ಕುಮಾರ್, ಸಂಘಟನಾ ಕಾರ್ಯದರ್ಶಿ ವೆಂಕಟೇಶ್ ನಾಯಕ್, ಕಾರ್ಯಕ್ರಮದ ಸಂಯೋಜಕಿ ಜಯಲಕ್ಷ್ಮೀ ಆರ್.ಶೆಟ್ಟಿ ಸುದ್ದಿಗೋಷ್ಠಿಯಲ್ಲಿದ್ದರು.