
ಗಣೇಶ ಚತುರ್ಥಿ: ರಾಸಾಯನಿಕ ಬಣ್ಣಗಳಿಂದ ಕೂಡಿದ ವಿಗ್ರಹ ವಿಸರ್ಜನೆ ನಿಷೇಧ
ಮಂಗಳೂರು: ಪ್ರತಿ ವರ್ಷದಂತೆ ಈ ಬಾರಿಯೂ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕರು ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣದ ವಿಗ್ರಹಗಳನ್ನು ಸ್ಥಾಪಿಸಿ ಪೂಜಿಸಿದ ನಂತರ ಕೆರೆ /ಬಾವಿ ಹಾಗೂ ಇನ್ನಿತರ ನೈಸರ್ಗಿಕ ಜಲ ಮೂಲಗಳಿಗೆ ವಿಸರ್ಜಿಸುವುದು ಸಂಪ್ರಾದಯವಾಗಿದ್ದು, ಇದರಿಂದ ನೈಸರ್ಗಿಕ ಜಲಮೂಲಗಳು ಕಲುಷಿತಗೊಂಡು ಇವುಗಳ ಭೌತಿಕ ಹಾಗೂ ರಾಸಾಯನಿಕ ಗುಣಮಟ್ಟವು ಮಾರ್ಪಟ್ಟು ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗುವುದಲ್ಲದೇ ಪ್ರಾಣಿ, ಪಕ್ಷಿ ಹಾಗೂ ಇತರೇ ಜಲಚರಗಳ ಜೀವಕ್ಕೆ ಅಪಾಯವಾಗುತ್ತದೆ. ಅಲ್ಲದೇ ಇಂತಹ ಕಲುಷಿತ ನೀರಿನಿಂದ ಸಾರ್ವಜನಿಕ ಆರೋಗ್ಯಕ್ಕೂ ಧಕ್ಕೆ ಉಂಟಾಗುತ್ತದೆ.
ಹೈಕೋರ್ಟ್ ಆದೇಶ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಸೂಚನೆ ತಿಳಿಸಿರುವಂತೆ ಹಬ್ಬದ ಆಚರಣೆಯಿಂದ ಉಂಟಾಗುವ ಮಾಲಿನ್ಯದಿಂದ ನೈಸರ್ಗಿಕ ಜಲ ಮೂಲಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಅಧಿಸೂಚನೆಯನ್ನು ಹೊರಡಿಸಿದ್ದು, ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತವಾದ ಗೌರಿ ಮತ್ತು ಗಣೇಶ ವಿಗ್ರಹಗಳನ್ನು ಇನ್ನು ಮುಂದೆ ರಾಜ್ಯದ ಯಾವುದೇ ಕೆರೆ, ಬಾವಿ, ಕಟ್ಟೆ ಮತ್ತು ಇತರೆ ಜಲಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ.